ಬೆಂಗಳೂರು: ಕ್ರಿಸ್‌ಮಸ್ ಮತ್ತು ಹೊಸ ವರ್ಷದ ಪ್ರಯುಕ್ತ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) 1000 ಹೆಚ್ಚುವರಿ ಬಸ್‌ಗಳ ವಿಶೇಷ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸಿದೆ. ಹಬ್ಬದ ದಿನಗಳಲ್ಲಿ ಊರುಗಳಿಗೆ ತೆರಳುವ ಪ್ರಯಾಣಿಕರಿಗೆ ಇದರಿಂದ ಮಹತ್ತರ ಅನುಕೂಲವಾಗಲಿದೆ.
ಈ ಕುರಿತು ಕೆಎಸ್‌ಆರ್‌ಟಿಸಿ ಪ್ರಕಟಣೆ ಹೊರಡಿಸಿದ್ದು, ಡಿಸೆಂಬರ್ 25, 2025ರಂದು ಕ್ರಿಸ್‌ಮಸ್ ಹಬ್ಬದ ಹಿನ್ನೆಲೆಯಲ್ಲಿ ಡಿಸೆಂಬರ್ 19, 20 ಹಾಗೂ 24, 2025ರಂದು ಬೆಂಗಳೂರಿನಿಂದ ವಿವಿಧ ಸ್ಥಳಗಳಿಗೆ 1000 ಹೆಚ್ಚುವರಿ ಬಸ್‌ಗಳನ್ನು ಕಾರ್ಯಾಚರಣೆ ಮಾಡಲಾಗುವುದು ಎಂದು ತಿಳಿಸಿದೆ. ಅದೇ ರೀತಿ ರಾಜ್ಯದ ಹಾಗೂ ಅಂತರರಾಜ್ಯದ ವಿವಿಧ ನಗರಗಳಿಂದ ಬೆಂಗಳೂರಿಗೆ ಡಿಸೆಂಬರ್ 26 ಹಾಗೂ 28, 2025ರಂದು ವಿಶೇಷ ಬಸ್‌ಗಳನ್ನು ಕಾರ್ಯಾಚರಣೆ ಮಾಡಲಾಗುವುದು ಎಂದು ಮಾಹಿತಿ ನೀಡಿದೆ.
ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗೀರ್, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್ ಸೇರಿದಂತೆ ಹಲವು ಸ್ಥಳಗಳಿಗೆ ವಿಶೇಷ ಬಸ್‌ಗಳ ಸಂಚಾರ ಇರಲಿದೆ.
ಇನ್ನು ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ ಹಾಗೂ ಮಡಿಕೇರಿ ಮಾರ್ಗಗಳತ್ತ ವಿಶೇಷ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗುತ್ತದೆ.
ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಬಸ್‌ಗಳಿಗೆ ಮುಂಗಡ ಆಸನ ಕಾಯ್ದಿರಿಸುವ ಸೌಲಭ್ಯ ಒದಗಿಸಲಾಗಿದ್ದು, ಟಿಕೆಟ್‌ನಲ್ಲಿ ನಮೂದಿಸಿರುವ ಬಸ್ ನಿಲ್ದಾಣ ಅಥವಾ ಪಿಕ್‌ಅಪ್ ಪಾಯಿಂಟ್ ವಿವರಗಳನ್ನು ಗಮನಿಸುವಂತೆ ಕೆಎಸ್‌ಆರ್‌ಟಿಸಿ ಮನವಿ ಮಾಡಿದೆ.
ಇ-ಟಿಕೆಟ್ ಬುಕ್ಕಿಂಗ್‌ನ್ನು www.ksrtc.karnataka.gov.in ವೆಬ್‌ಸೈಟ್ ಮೂಲಕ ಮಾಡಬಹುದಾಗಿದ್ದು, ಕರ್ನಾಟಕ ಹಾಗೂ ಅಂತರರಾಜ್ಯದಲ್ಲಿರುವ ಗಣಕೀಕೃತ ಬುಕ್ಕಿಂಗ್ ಕೌಂಟರ್‌ಗಳಲ್ಲೂ ಮುಂಗಡ ಆಸನ ಕಾಯ್ದಿರಿಸಬಹುದು.
ರಿಯಾಯಿತಿಯೂ ಲಭ್ಯ
ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೆಟ್ ಕಾಯ್ದಿರಿಸಿದರೆ ಶೇ.5 ರಷ್ಟು ರಿಯಾಯಿತಿ ಹಾಗೂ ಹೋಗುವ-ಬರುವ ಪ್ರಯಾಣದ ಟಿಕೆಟ್ ಒಟ್ಟಿಗೆ ಬುಕ್ ಮಾಡಿದಲ್ಲಿ ಬರುವ ಪ್ರಯಾಣದ ದರದಲ್ಲಿ ಶೇ.10 ರಷ್ಟು ರಿಯಾಯಿತಿ ನೀಡಲಾಗುತ್ತದೆ.
ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಗೋವಾ, ಮಹಾರಾಷ್ಟ್ರ ಹಾಗೂ ಪುದುಚೇರಿಯ ಪ್ರಮುಖ ನಗರಗಳಲ್ಲಿ ಕೆಎಸ್‌ಆರ್‌ಟಿಸಿಯ ಮುಂಗಡ ಬುಕ್ಕಿಂಗ್ ಕೌಂಟರ್‌ಗಳು ಲಭ್ಯವಿದ್ದು, ಅಲ್ಲಿಯೂ ಟಿಕೆಟ್ ಕಾಯ್ದಿರಿಸಬಹುದು. ಹೆಚ್ಚುವರಿ ಸಾರಿಗೆಗಳ ಹೊರಡುವ ಸ್ಥಳ ಹಾಗೂ ವೇಳಾಪಟ್ಟಿಯ ವಿವರಗಳನ್ನು ವೆಬ್‌ಸೈಟ್ ಹಾಗೂ ಆನ್‌ಲೈನ್ ಬುಕ್ಕಿಂಗ್ ವ್ಯವಸ್ಥೆಯಲ್ಲಿ ಸಾರ್ವಜನಿಕ ಮಾಹಿತಿಗಾಗಿ ಪ್ರಕಟಿಸಲಾಗಿದೆ.
ಇದಲ್ಲದೆ, ನಿಗಮದ ಕಾರ್ಯಾಚರಣೆ ವ್ಯಾಪ್ತಿಯಲ್ಲಿನ ಎಲ್ಲಾ ತಾಲ್ಲೂಕು ಹಾಗೂ ಜಿಲ್ಲಾ ಬಸ್ ನಿಲ್ದಾಣಗಳಿಂದ ಸಂಚಾರದ ಒತ್ತಡಕ್ಕೆ ಅನುಗುಣವಾಗಿ ವಿಶೇಷ ಬಸ್‌ಗಳನ್ನು ಕಾರ್ಯಾಚರಣೆ ಮಾಡಲಾಗುವುದು ಎಂದು ಕೆಎಸ್‌ಆರ್‌ಟಿಸಿ ತಿಳಿಸಿದೆ.
