ಬೆಂಗಳೂರು: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಪ್ರಶ್ನೆಪತ್ರಿಕೆ ಸೋರಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಶಾಲಾ ಶಿಕ್ಷಣ ಇಲಾಖೆಯು ಮಹತ್ವದ ಕ್ರಮ ಕೈಗೊಂಡಿದ್ದು, ಎರಡನೇ ಪೂರ್ವಸಿದ್ಧತಾ ಪರೀಕ್ಷೆಯ ಸಮಯವನ್ನು ಬದಲಾವಣೆ ಮಾಡಿದೆ.
ಜನವರಿ 27 ರಿಂದ ಫೆಬ್ರವರಿ 2 ರವರೆಗೆ ಈ ಪರೀಕ್ಷೆಗಳು ನಡೆಯಲಿವೆ. ಮೊದಲ ಪೂರ್ವಸಿದ್ಧತಾ ಪರೀಕ್ಷೆಗಳು ಬೆಳಗ್ಗೆ 10 ಗಂಟೆಗೆ ಆರಂಭವಾಗಿದ್ದವು. ಆದರೆ, ಇದೀಗ ಪರಿಷ್ಕೃತ ವೇಳಾಪಟ್ಟಿಯ ಪ್ರಕಾರ, ಎರಡನೇ ಪೂರ್ವಸಿದ್ಧತಾ ಪರೀಕ್ಷೆಗಳು ಬೆಳಗ್ಗೆ 11 ಗಂಟೆಗೆ ಪ್ರಾರಂಭವಾಗಲಿವೆ. ಇದಕ್ಕೂ ಮುನ್ನ, ಬೆಳಗ್ಗೆ 9 ರಿಂದ 10.30 ರವರೆಗೆ ಎಂದಿನಂತೆ ತರಗತಿಗಳು ನಡೆಯಲಿದ್ದು, ವಿದ್ಯಾರ್ಥಿಗಳು 10.50ರ ವೇಳೆಗೆ ಪರೀಕ್ಷಾ ಕೊಠಡಿಯಲ್ಲಿ ಆಸೀನರಾಗಿರಬೇಕು ಎಂದು ಇಲಾಖೆ ತಿಳಿಸಿದೆ.
ಪ್ರಶ್ನೆಪತ್ರಿಕೆ ನಿರ್ವಹಣೆಗೆ ಕಟ್ಟುನಿಟ್ಟಿನ ಸೂಚನೆ:
ಪ್ರಶ್ನೆಪತ್ರಿಕೆಗಳನ್ನು ಪರೀಕ್ಷೆಯ ದಿನದಂದು ಬೆಳಗ್ಗೆ 9.30 ಕ್ಕೆ ಆಯಾ ಶಾಲೆಗಳಲ್ಲಿ ಡೌನ್‌ಲೋಡ್ ಮಾಡಿಕೊಳ್ಳಬೇಕು. ಬೆಳಗ್ಗೆ 10 ಗಂಟೆಯೊಳಗೆ ಮುದ್ರಣ ಕಾರ್ಯ ಪೂರ್ಣಗೊಳಿಸಿ, 10.30ಕ್ಕೆ ವಿತರಣೆಗೆ ಸಿದ್ಧವಾಗಿಟ್ಟುಕೊಳ್ಳಬೇಕು. ನಂತರ 10.50ಕ್ಕೆ ಪರೀಕ್ಷಾ ಕೊಠಡಿಗಳಿಗೆ ತಲುಪಿಸಬೇಕು ಎಂದು ಇಲಾಖೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದೆ.
ಶಾಲಾ ಮುಖ್ಯಸ್ಥರು ಮತ್ತು ಸ್ಥಳೀಯ ಅಧಿಕಾರಿಗಳು ಈ ಪ್ರಕ್ರಿಯೆಯಲ್ಲಿ ಅತ್ಯಂತ ಜಾಗರೂಕರಾಗಿರಬೇಕು. ಒಂದು ವೇಳೆ ಪ್ರಶ್ನೆಪತ್ರಿಕೆ ಸೋರಿಕೆಯಾದರೆ ಶಾಲಾ ಮುಖ್ಯಸ್ಥರು, ನೋಡಲ್ ಶಿಕ್ಷಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳು (BEO) ಮತ್ತು ಸಂಬಂಧಪಟ್ಟ ಉಪ ನಿರ್ದೇಶಕರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಇಲಾಖೆ ಎಚ್ಚರಿಕೆ ನೀಡಿದೆ.
