Monday, January 12, 2026

ಸತ್ಯ | ನ್ಯಾಯ |ಧರ್ಮ

ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ : ಶಿಕ್ಷಕರು–ವಿದ್ಯಾರ್ಥಿಗಳು ಸೇರಿ 8 ಮಂದಿ ಬಂಧನ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ (SSLC Preparatory Exam) ಹಿಂದಿ ವಿಷಯದ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಸೇರಿ ಒಟ್ಟು ಎಂಟು ಆರೋಪಿಗಳನ್ನು ಬೆಂಗಳೂರು ಉತ್ತರ ವಿಭಾಗದ ಸೈಬರ್ ಪೊಲೀಸರು ಬಂಧಿಸಿದ್ದಾರೆ. ಬಂಧಿತರಲ್ಲಿ ವಿವಿಧ ಜಿಲ್ಲೆಗಳ ಶಾಲಾ ಶಿಕ್ಷಕರು, ಸಹ ಶಿಕ್ಷಕರು, ಮುಖ್ಯೋಪಾಧ್ಯಾಯರು ಹಾಗೂ ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳು ಸೇರಿದ್ದಾರೆ.

ಹಿಂದಿ ವಿಷಯದ ಪ್ರಶ್ನೆಪತ್ರಿಕೆ ಯೂಟ್ಯೂಬ್‌ನಲ್ಲಿ ಪ್ರಸಾರವಾಗುತ್ತಿರುವುದು ಪತ್ತೆಯಾದ ಬೆನ್ನಲ್ಲೇ, ಪದವಿ ಪೂರ್ವ ಶಿಕ್ಷಣ ಇಲಾಖೆ ಅಧಿಕಾರಿಯೊಬ್ಬರು ಬೆಂಗಳೂರು ಉತ್ತರ ವಿಭಾಗದ ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿದಾಗ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂಬುದು ದೃಢಪಟ್ಟಿದೆ.

ಪೊಲೀಸರ ಮಾಹಿತಿ ಪ್ರಕಾರ, ತುಮಕೂರು, ರಾಮನಗರ ಹಾಗೂ ಕಲಬುರಗಿ ಜಿಲ್ಲೆಗಳ ಕೆಲ ಶಾಲೆಗಳ ಶಿಕ್ಷಕರು ಈ ಅಕ್ರಮದಲ್ಲಿ ಶಾಮೀಲಾಗಿರುವುದು ಪತ್ತೆಯಾಗಿದೆ. ತುಮಕೂರಿನ ಶಾಲೆಯೊಂದರ ಮುಖ್ಯೋಪಾಧ್ಯಾಯ ವಿ.ಡಿ. ಗಿರೀಶ್, ರಾಮನಗರದ ಸಹ ಶಿಕ್ಷಕ ಅಮ್ಜದ್ ಖಾನ್ ಸೇರಿದಂತೆ ಕಲಬುರಗಿ ಜಿಲ್ಲೆಯ ಶಿಕ್ಷಕರು ಮತ್ತು ಸಹ ಶಿಕ್ಷಕರು ಬಂಧನಕ್ಕೊಳಗಾಗಿದ್ದಾರೆ.

ಬಂಧಿತರ ಪಟ್ಟಿಯಲ್ಲಿ ಕಲಬುರಗಿ ಜಿಲ್ಲೆಯ ಮುಖ್ಯ ಶಿಕ್ಷಕಿ ಶಾಹಿದಾ ಬೇಗಂ, ಶಿಕ್ಷಕ ಮೊಹಮ್ಮದ್ ಸಿರಾಜುದ್ದೀನ್, ಸಹ ಶಿಕ್ಷಕಿ ಫಾಹ್ಮಿದಾ, ಶಿಕ್ಷಕಿ ಫರ್ಜಾನಾ ಬೇಗಂ ಸೇರಿದ್ದಾರೆ. ಇದಲ್ಲದೆ, ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳನ್ನೂ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಬಂಧಿತರ ವಿವರ
* ವಿ.ಡಿ. ಗಿರೀಶ್ – ಮುಖ್ಯೋಪಾಧ್ಯಾಯ, ತುಮಕೂರು
* ಅಮ್ಜದ್ ಖಾನ್ – ಸಹ ಶಿಕ್ಷಕ, ರಾಮನಗರ
* ಶಾಹಿದಾ ಬೇಗಂ – ಮುಖ್ಯ ಶಿಕ್ಷಕಿ, ಕಲಬುರಗಿ
* ಫಾಹ್ಮಿದಾ – ಸಹ ಶಿಕ್ಷಕಿ, ಕಲಬುರಗಿ
* ಮೊಹಮ್ಮದ್ ಸಿರಾಜುದ್ದೀನ್ – ಶಿಕ್ಷಕ, ಕಲಬುರಗಿ
* ಫರ್ಜಾನಾ ಬೇಗಂ – ಶಿಕ್ಷಕಿ, ಕಲಬುರಗಿ
ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳು

ಸದ್ಯ ಬಂಧಿತ ಆರೋಪಿಗಳನ್ನು ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದು, ಪ್ರಶ್ನೆಪತ್ರಿಕೆ ಸೋರಿಕೆ ಯಾವ ರೀತಿಯಲ್ಲಿ ನಡೆದಿದೆ, ಇನ್ನಿತರರು ಇದರಲ್ಲಿ ಭಾಗಿಯಾಗಿದೆಯೇ ಎಂಬ ಕುರಿತು ತನಿಖೆ ಮುಂದುವರಿದಿದೆ. ಶಿಕ್ಷಣ ಕ್ಷೇತ್ರದ ಪಾವಿತ್ರ್ಯಕ್ಕೆ ಗಂಭೀರ ಧಕ್ಕೆ ತಂದಿರುವ ಈ ಘಟನೆ ರಾಜ್ಯಾದ್ಯಂತ ಆತಂಕಕ್ಕೆ ಕಾರಣವಾಗಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page