ಚೆನ್ನೈ: ಕೇಂದ್ರ ಚುನಾವಣಾ ಆಯೋಗವು ಕೈಗೆತ್ತಿಕೊಂಡಿರುವ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ (Special Summary Revision – SER) ಪ್ರಕ್ರಿಯೆಯು ‘ನಾಗರಿಕರ ಹಕ್ಕುಗಳ ಮೇಲಿನ ದಾಳಿ’ ಎಂದು ತಮಿಳುನಾಡು ಸರ್ಕಾರ ಆರೋಪಿಸಿದೆ.
ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ನೇತೃತ್ವದಲ್ಲಿ ಭಾನುವಾರ ನಡೆದ ಸರ್ವಪಕ್ಷ ಸಭೆಯಲ್ಲಿ ಈ ಕುರಿತು ನಿರ್ಣಯ ಕೈಗೊಳ್ಳಲಾಗಿದ್ದು, ರಾಜ್ಯದಲ್ಲಿ 2026 ರಲ್ಲಿ ನಡೆಯುವ ವಿಧಾನಸಭಾ ಚುನಾವಣೆಗಳ ನಂತರವೇ ‘ಸರ್’ ಪ್ರಕ್ರಿಯೆಯನ್ನು ಕೈಗೊಳ್ಳಬೇಕು ಎಂದು ಚುನಾವಣಾ ಆಯೋಗಕ್ಕೆ ಮನವಿ ಮಾಡಲಾಗಿದೆ.
ಚುನಾವಣಾ ಆಯೋಗವು ‘ಸರ್’ ಪ್ರಕ್ರಿಯೆಯನ್ನು ನಿಲ್ಲಿಸದಿದ್ದರೆ ಸುಪ್ರೀಂ ಕೋರ್ಟ್ ಮೊರೆ ಹೋಗುವುದಾಗಿ ತಮಿಳುನಾಡು ಸರ್ಕಾರ ಎಚ್ಚರಿಕೆ ನೀಡಿದೆ. ಸಭೆಯು ‘ಸರ್’ ಪ್ರಕ್ರಿಯೆಯ ಬಗ್ಗೆ ಅನುಮಾನಗಳನ್ನು ವ್ಯಕ್ತಪಡಿಸುವುದರ ಜೊತೆಗೆ, ಅದನ್ನು ಜಾರಿಗೊಳಿಸುವಲ್ಲಿರುವ ಪ್ರಾಯೋಗಿಕ ತೊಂದರೆಗಳನ್ನು (Practical difficulties) ಪ್ರಸ್ತಾಪಿಸಿದೆ.
ಮತದಾರರ ಹಿತಾಸಕ್ತಿಗಳಿಗಾಗಿ ಸ್ವತಂತ್ರವಾಗಿ ಕಾರ್ಯನಿರ್ವಹಿಸಬೇಕಾದ ಚುನಾವಣಾ ಆಯೋಗವು ಕೇಂದ್ರದಲ್ಲಿ ಅಧಿಕಾರದಲ್ಲಿರುವ ಪಕ್ಷದ ಆದೇಶಗಳಿಗೆ ಅನುಗುಣವಾಗಿ ತಲೆಬಾಗುತ್ತಿದೆ ಎಂದು ಸಭೆಯಲ್ಲಿ ಆರೋಪಿಸಲಾಯಿತು.
