Home ದೇಶ ಗುಜರಾತ್‌ | ಸೂರತ್‌ ರೈಲು ನಿಲ್ದಾಣದಲ್ಲಿ ನಡೆದ ಕಾಲ್ತುಳಿತಕ್ಕೆ ಓರ್ವ ಬಲಿ, ಹಲವರಿಗೆ ಗಾಯ

ಗುಜರಾತ್‌ | ಸೂರತ್‌ ರೈಲು ನಿಲ್ದಾಣದಲ್ಲಿ ನಡೆದ ಕಾಲ್ತುಳಿತಕ್ಕೆ ಓರ್ವ ಬಲಿ, ಹಲವರಿಗೆ ಗಾಯ

0

ಅಹಮದಾಬಾದ್: ದೀಪಾವಳಿ ಹಬ್ಬದಂದು ಗುಜರಾತ್‌ನ ಸೂರತ್‌ನಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದ್ದು (Stampede in Surat Railway Station) ಸೂರತ್ ರೈಲು ನಿಲ್ದಾಣದಲ್ಲಿ ನಡೆದ ಕಾಲ್ತುಳಿತಕ್ಕೆ ಒಬ್ಬರು ಸಾವಿಗೀಡಾಗಿದ್ದಾರೆ.

ಈ ಘಟನೆಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ. ಹಲವಾರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಘಟನೆ ನಡೆದ ತಕ್ಷಣ ರೈಲ್ವೆ ಭದ್ರತಾ ಸಿಬ್ಬಂದಿ ಮತ್ತು ರೈಲ್ವೆ ಜನರಲ್ ಪೊಲೀಸರಿಗೆ ಎಚ್ಚರಿಕೆ ನೀಡಲಾಯಿತು. ಯುದ್ಧೋಪಾದಿಯಲ್ಲಿ ಪ್ರತಿಕ್ರಿಯಿಸಿದ ಅವರು, ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ರವಾನಿಸಿದರು. ಅವರಿಗೆ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ. ಸೂರತ್‌ನಿಂದ ರೈಲ್ವೆ ಖಾತೆ ರಾಜ್ಯ ಸಚಿವ ದರ್ಶನ ಜರ್ದೋಶ್ ಅವರು ಆಸ್ಪತ್ರೆಯಲ್ಲಿ ಸಂತ್ರಸ್ತರನ್ನು ಭೇಟಿ ಮಾಡಿದರು.

ದೀಪಾವಳಿ ಹಬ್ಬಕ್ಕೆ ಊರಿಗೆ ತೆರಳಲು ಹೆಚ್ಚಿನ ಸಂಖ್ಯೆಯಲ್ಲಿ ಜನರು ರೈಲು ನಿಲ್ದಾಣಕ್ಕೆ ಆಗಮಿಸಿದಾಗ ಈ ಘಟನೆ ನಡೆದಿದೆ. ರೈಲ್ವೆ ನಿಲ್ದಾಣದಲ್ಲಿ ಕನಿಷ್ಠ ಸೌಲಭ್ಯಗಳಿಲ್ಲದ ಕಾರಣ ಕಾಲ್ತುಳಿತ ಸಂಭವಿಸಿದೆ ಎನ್ನಲಾಗುತ್ತಿದೆ. ರೈಲು ಹತ್ತುವಾಗ ಪರಸ್ಪರ ತಳ್ಳಿಕೊಂಡಿದ್ದು ಕಾಲ್ತುಳಿತಕ್ಕೆ ಕಾರಣವಾಯಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಮೃತರನ್ನು ಬಿಹಾರದ ಚಾಪ್ರಾ ಜಿಲ್ಲೆಯ ವೀರೇಂದ್ರ ಕುಮಾರ್ ಎಂದು ಗುರುತಿಸಲಾಗಿದೆ. ಛತ್ ಪೂಜೆಗೆಂದು ಸ್ವಗ್ರಾಮಕ್ಕೆ ತೆರಳಲು ಸೂರತ್ ರೈಲು ನಿಲ್ದಾಣದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಉಸಿರಾಡಲು ಸಾಧ್ಯವಾಗದೆ ಸ್ಥಳದಲ್ಲೇ ಕುಸಿದು ಬಿದ್ದ ಅವರನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಗಿದ್ದು, ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ.

ಈ ಘಟನೆ ಬಗ್ಗೆ ಪಶ್ಚಿಮ ರೈಲ್ವೆ ಅಧಿಕಾರಿಗಳು ಆಘಾತ ವ್ಯಕ್ತಪಡಿಸಿದ್ದಾರೆ. ಸಮಗ್ರ ತನಿಖೆಗೆ ಆದೇಶಿಸಲಾಗಿದೆ. ಗಾಯಾಳುಗಳಿಗೆ ಉತ್ತಮ ವೈದ್ಯಕೀಯ ಸೌಲಭ್ಯ ಕಲ್ಪಿಸಲಾಗುವುದು ಎಂದರು. ಪಶ್ಚಿಮ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಸುಮಿತ್ ಠಾಕೂರ್ ಮಾತನಾಡಿ, ದೀಪಾವಳಿ ಹಬ್ಬದ ವಿಪರೀತವನ್ನು ಗಮನದಲ್ಲಿಟ್ಟುಕೊಂಡು ಮುಂಬೈಗೆ ವಿಶೇಷ ರೈಲುಗಳನ್ನು ದೊಡ್ಡ ಪ್ರಮಾಣದಲ್ಲಿ ಓಡಿಸಲಾಗುತ್ತಿದೆ ಎಂದು ಹೇಳಿದ್ದಾರೆ.

ಮುಂಬೈ ಸೇರಿದಂತೆ ಮಧ್ಯಪ್ರದೇಶದ ವಿವಿಧ ನಗರಗಳ ನಡುವೆ 400 ಟ್ರಿಪ್ ಮಾಡಲು 46 ವಿಶೇಷ ರೈಲುಗಳನ್ನು ಒದಗಿಸಲಾಗಿದೆ ಎಂದು ವಿವರಿಸಲಾಗಿದೆ. ನಿಲ್ದಾಣದಲ್ಲಿ 165 ಆರ್‌ಪಿಎಫ್ ಮತ್ತು ಜಿಪಿಎಫ್ ಯೋಧರನ್ನು ನಿಯೋಜಿಸಲಾಗಿದೆ ಎಂದು ಸುಮಿತ್ ಠಾಕೂರ್ ತಿಳಿಸಿದ್ದಾರೆ. ಟಿಕೆಟ್‌ಗಾಗಿ ಹೆಚ್ಚುವರಿ ಕೌಂಟರ್‌ಗಳನ್ನು ಸ್ಥಾಪಿಸಲಾಗಿದೆ ಎಂದೂ ಅವರು ಹೇಳಿದರು.

You cannot copy content of this page

Exit mobile version