Home ಬ್ರೇಕಿಂಗ್ ಸುದ್ದಿ ಧರ್ಮಸ್ಥಳ ಸಾವಿನ ಪ್ರಕರಣಗಳಿಗೆ ಎಸ್.ಐ.ಟಿ ರಚನೆಗೆ ಮುಖ್ಯಮಂತ್ರಿಗಳಿಗೆ ರಾಜ್ಯ ಮಹಿಳಾ ಆಯೋಗ ಮನವಿ

ಧರ್ಮಸ್ಥಳ ಸಾವಿನ ಪ್ರಕರಣಗಳಿಗೆ ಎಸ್.ಐ.ಟಿ ರಚನೆಗೆ ಮುಖ್ಯಮಂತ್ರಿಗಳಿಗೆ ರಾಜ್ಯ ಮಹಿಳಾ ಆಯೋಗ ಮನವಿ

0

ದಿನದಿಂದ ದಿನಕ್ಕೆ ವಿಚಿತ್ರ ತಿರುವುಗಳನ್ನು ಪಡೆದುಕೊಳ್ಳುತ್ತಿರುವ ಧರ್ಮಸ್ಥಳ ಗ್ರಾಮದ ವ್ಯಾಪ್ತಿಯಲ್ಲಿನ ಸಾವಿನ ಪ್ರಕರಣ ಮತ್ತು ಮಾಧ್ಯಮಗಳಲ್ಲಿ ಬಿತ್ತರವಾಗುತ್ತಿರುವ ಸುದ್ದಿ ಸಂಬಂಧಿಸಿದಂತೆ ಸಮಗ್ರ ತನಿಖೆಗೆ ವಿಶೇಷ ತನಿಖಾ ತಂಡ ರಚನೆಗೆ ರಾಜ್ಯ ಮಹಿಳಾ ಆಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಮಾಡಿದೆ. 20 ವರ್ಷಗಳಿಂದ ಧರ್ಮಸ್ಥಳ ಗ್ರಾಮ ವ್ಯಾಪ್ತಿಯಲ್ಲಿ ನಡೆದ ಕೊಲೆ, ಅತ್ಯಾಚಾರ ಮತ್ತು ನಾಪತ್ತೆ ಪ್ರಕರಣಗಳನ್ನೆಲ್ಲಾ ಸೇರಿದಂತೆ ತನಿಖೆ ರೂಪುಗೊಳಿಸಲು ಮಹಿಳಾ ಆಯೋಗ ಮನವಿ ಮಾಡಿದೆ.

ಧರ್ಮಸ್ಥಳದ ಭಾಗದಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ ವ್ಯಕ್ತಿಯೊಬ್ಬರು ನ್ಯಾಯಾಲಯದಲ್ಲಿ ಹೇಳಿಕೆಯನ್ನು ದಾಖಲಿಸಿದ್ದಾರೆ. ದಿನಾಂಕ: 12-07-2025ರಂದು ಟೈಮ್ಸ್ ನೌ ಮತ್ತಿತರ ಮಾಧ್ಯಮಗಳು ಮನುಷ್ಯರೊಬ್ಬರ ತಲೆಬುರುಡೆ ದೊರಕಿದ ಬಗ್ಗೆ ಹಾಗೂ ನಾಪತ್ತೆಯಾದ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರ ಕುಟುಂಬದವರ ಹೇಳಿಕೆಯ ವರದಿ ಪ್ರಸಾರವಾಗಿರುವುದನ್ನು ಆಯೋಗವು ಗಂಭೀರವಾಗಿ ಪರಿಗಣಿಸಿದೆ. ಈ ಮಾಧ್ಯಮ ವರದಿ ಮತ್ತು ಶವಗಳನ್ನು ಹೂತಿರುವ ವ್ಯಕ್ತಿಯ ಹೇಳಿಕೆಯು ಕಳೆದ 20ಕ್ಕೂ ಹೆಚ್ಚು ವರ್ಷ ಗಂಭೀರ ಸ್ವರೂಪದ ದೌರ್ಜನ್ಯ, ಹತ್ಯೆ, ಅತ್ಯಾಚಾರ, ಅಸ್ವಾಭಾವಿಕವಾದ ಸಾವು ಮತ್ತು ನಾಪತ್ತೆ ಪ್ರಕರಣಗಳು ಹಲವು ಮಹಿಳೆಯರ, ವಿದ್ಯಾರ್ಥಿನಿಯರ ಮೇಲೆ ನಡೆದಿರುವ ಬಗ್ಗೆ ಹೇಳಲಾಗಿದೆ ಎಂದು ಮಹಿಳಾ ಆಯೋಗ ದೂರಿನಲ್ಲಿ ತಿಳಿಸಿದೆ.

ಅನೇಕ ಕುಟುಂಬಗಳು ತಮ್ಮ ಮಕ್ಕಳ ನಾಪತ್ತೆ, ಸಾವಿನ ಪ್ರಕರಣ ದಾಖಲಿಸಲು ಪೊಲೀಸ್ ಠಾಣೆಗೆ ಹೋದಾಗ ಸಿಬ್ಬಂದಿಗಳು ಸೂಕ್ತವಾಗಿ ಸ್ಪಂದಿಸಿಲ್ಲ ಎಂದು ಕೂಡ ಆರೋಪ ಮಾಡಿರುತ್ತಾರೆ. ಹಾಗಾಗಿ ಧರ್ಮಸ್ಥಳದ ವ್ಯಾಪ್ತಿಯಲ್ಲಿ ಕಳೆದ 20 ವರ್ಷಗಳಿಂದ ನಾಪತ್ತೆಯಾಗಿರುವ ಮಹಿಳೆಯರ ಮತ್ತು ವಿದ್ಯಾರ್ಥಿನಿಯರ ಪ್ರಕರಣಗಳು, ಅಸ್ವಾಭಾವಿಕವಾದ ಸಾವು/ ಕೊಲೆ ಪ್ರಕರಣಗಳು ಮತ್ತು ಅತ್ಯಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ಸಮಗ್ರ ಮತ್ತು ನಿಷ್ಪಕ್ಷಪಾತ ತನಿಖೆಗಾಗಿ ಹಿರಿಯ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ(ಎಸ್.ಐ.ಟಿ) ರಚಿಸುವಂತೆ ಈ ಮೂಲಕ ತಮ್ಮನ್ನು ಕೋರುತ್ತೇನೆ ಎಂದು ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಮುಖ್ಯಮಂತ್ರಿಗಳಿಗೆ ಸಲ್ಲಿಸಿದ ಮನವಿ ಪತ್ರದಲ್ಲಿ ತಿಳಿಸಿದ್ದಾರೆ.

ಹಾಗೆಯೇ ಮೇಲ್ಕಂಡ ಈ ಎಲ್ಲಾ ಪ್ರಕರಣಗಳ ಬಗ್ಗೆ ಸಮಗ್ರ ವರದಿ ನೀಡುವಂತೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೂ ಪತ್ರ ಬರೆದಿದ್ದಾರೆ. ಕಳೆದ 20ಕ್ಕೂ ಹೆಚ್ಚು ವರ್ಷ ಗಂಭೀರ ಸ್ವರೂಪದ ದೌರ್ಜನ್ಯ, ಹತ್ಯೆ, ಅತ್ಯಾಚಾರ, ಅಸ್ವಾಭಾವಿಕವಾದ ಸಾವು ಮತ್ತು ನಾಪತ್ತೆ ಪ್ರಕರಣಗಳು ಹಲವು ಮಹಿಳೆಯರ, ವಿದ್ಯಾರ್ಥಿನಿಯರ ಮೇಲೆ ನಡೆದಿರುವ ಬಗ್ಗೆ ಹೇಳಲಾಗಿದೆ. ಅನೇಕ ಕುಟುಂಬಗಳು ತಮ್ಮ ಮಕ್ಕಳ ನಾಪತ್ತೆ, ಸಾವಿನ ಪ್ರಕರಣ ದಾಖಲಿಸಲು ಪೊಲೀಸ್ ಠಾಣೆಗೆ ಹೋದಾಗ ಸಿಬ್ಬಂದಿಗಳು ಸೂಕ್ತವಾಗಿ ಸ್ಪಂದಿಸಿಲ್ಲ ಎಂದು ಕೂಡ ಆರೋಪ ಮಾಡಿರುತ್ತಾರೆ.

ಹಾಗಾಗಿ ಧರ್ಮಸ್ಥಳದ ವ್ಯಾಪ್ತಿಯಲ್ಲಿ ಕಳೆದ 20 ವರ್ಷಗಳಿಂದ ಎಷ್ಟು ಮಹಿಳೆಯರು ಮತ್ತು ವಿದ್ಯಾರ್ಥಿನಿಯರು ನಾಪತ್ತೆಯಾಗಿದ್ದಾರೆ. ಅವರಲ್ಲಿ ಎಷ್ಟು ಜನರ ಪತ್ತೆ ಮಾಡಲಾಗಿದೆ, ಪತ್ತೆ ಮಾಡಲಾಗದೆ ಪ್ರಕರಣಗಳು ಎಷ್ಟು? ಅಸ್ವಾಭಾವಿಕವಾದ ಸಾವು/ ಕೊಲೆ ಪ್ರಕರಣಗಳಲ್ಲಿ ಕೈಗೊಂಡ ಕ್ರಮ ಮತ್ತು ಅತ್ಯಾಚಾರ ಪ್ರಕರಣಗಳ ವಿವರವನ್ನು ಈ ಪತ್ರ ತಲುಪಿದ 7 ದಿನದೊಳಗೆ ಮಹಿಳಾ ಆಯೋಗಕ್ಕೆ ಕಳುಹಿಸುವಂತೆ ಕೋರುತ್ತೇನೆ ಎಂದು ಡಾ.ನಾಗಲಕ್ಷ್ಮಿ ಚೌಧರಿ ತಮ್ಮ ಮನವಿ ಪತ್ರದಲ್ಲಿ ತಿಳಿಸಿದ್ದಾರೆ.

You cannot copy content of this page

Exit mobile version