Home ರಾಜ್ಯ ದಕ್ಷಿಣ ಕನ್ನಡ ತುಳುವಿಗೆ ರಾಜ್ಯದ ಎರಡನೇ ಅಧಿಕೃತ ಭಾಷೆಯ ಸ್ಥಾನಮಾನ; ಮಂಗಳೂರಿನ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

ತುಳುವಿಗೆ ರಾಜ್ಯದ ಎರಡನೇ ಅಧಿಕೃತ ಭಾಷೆಯ ಸ್ಥಾನಮಾನ; ಮಂಗಳೂರಿನ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

0

ಮಂಗಳೂರು: ಕರಾವಳಿ ಭಾಗದ ಜನರ ಬಹುಕಾಲದ ಬೇಡಿಕೆಯಾಗಿದ್ದ ತುಳು ಭಾಷೆಗೆ ಕರ್ನಾಟಕದ ಎರಡನೇ ಅಧಿಕೃತ ಭಾಷೆಯ ಸ್ಥಾನಮಾನ ನೀಡಲು ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ.

ಮಂಗಳೂರಿನ ಪ್ರಜಾಸೌಧದಲ್ಲಿ ಶುಕ್ರವಾರ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಸುಮಾರು ಮೂರು ಗಂಟೆಗಳ ಕಾಲ ನಡೆದ ಸಭೆಯ ಬಳಿಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸುದ್ದಿಗೋಷ್ಠಿಯಲ್ಲಿ ಸಂಪುಟದ ತೀರ್ಮಾನವನ್ನು ಪ್ರಕಟಿಸಿದರು.

ತುಳು ಭಾಷೆಗೆ ಅಧಿಕೃತ ಮಾನ್ಯತೆ ನೀಡುವ ವಿಚಾರದಲ್ಲಿ ಹಿಂದಿನ ಸರ್ಕಾರಗಳು ಕೈಗೊಂಡ ಕ್ರಮಗಳ ಕುರಿತು ಚರ್ಚಿಸುವ ಅಗತ್ಯವಿಲ್ಲ. ತಮ್ಮ ಸರ್ಕಾರಕ್ಕೆ ಈ ವಿಚಾರದಲ್ಲಿ ಸ್ಪಷ್ಟ ಬದ್ಧತೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

“ನಾವು ಭಾವನೆಗಳ ಮೇಲೆ ರಾಜಕಾರಣ ಮಾಡುವುದಿಲ್ಲ. ಜನರ ಬದುಕಿಗೆ ಸಂಬಂಧಿಸಿದ ವಿಚಾರಗಳಿಗೆ ಆದ್ಯತೆ ನೀಡುತ್ತೇವೆ,” ಎಂದು ಅವರು ತಿಳಿಸಿದರು.

ತುಳುವಿಗೆ ಅಧಿಕೃತ ಭಾಷಾ ಸ್ಥಾನಮಾನ ಕಲ್ಪಿಸುವ ಬೇಡಿಕೆಗೆ ಹಲವು ವರ್ಷಗಳಿಂದ ನಡೆದ ಹೋರಾಟವನ್ನು ಸ್ಮರಿಸಿದ ಮುಖ್ಯಮಂತ್ರಿ, ಈ ನಿಟ್ಟಿನಲ್ಲಿ ಧ್ವನಿ ಎತ್ತಿದ ಎಲ್ಲರಿಗೂ ಅಭಿನಂದನೆ ಸಲ್ಲಿಸಿದರು.

ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರು ಸ್ಪೀಕರ್ ಆಗಿ ಅಧಿಕಾರ ವಹಿಸಿಕೊಂಡ ಬಳಿಕ ಮೊದಲ ಬಾರಿಗೆ ಪ್ರಸ್ತಾಪಿಸಿದ ಪ್ರಮುಖ ವಿಚಾರಗಳಲ್ಲಿ ತುಳು ಭಾಷೆಗೆ ಅಧಿಕೃತ ಸ್ಥಾನಮಾನ ನೀಡುವ ಬೇಡಿಕೆಯೂ ಒಂದಾಗಿತ್ತು ಎಂದು ಡಿ.ಕೆ. ಶಿವಕುಮಾರ್ ಉಲ್ಲೇಖಿಸಿದರು. ಖಾದರ್ ಅವರ ಪಾತ್ರವನ್ನೂ ಸ್ಮರಿಸಿದ ಅವರು, ತುಳುವಿಗೆ ಮಾನ್ಯತೆಗಾಗಿ ಹೋರಾಡಿದ ಎಲ್ಲರ ಕೊಡುಗೆಯನ್ನು ಗುರುತಿಸಿದರು.

ಮಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ತುಳು ಭಾಷೆಗೆ ಅಧಿಕೃತ ಮಾನ್ಯತೆ ನೀಡಿರುವ ನಿರ್ಧಾರವು ಕರಾವಳಿ ಭಾಗದಲ್ಲಿ ವಿಶೇಷ ಮಹತ್ವ ಪಡೆದುಕೊಂಡಿದೆ.

You cannot copy content of this page

Exit mobile version