ಬೆಂಗಳೂರು: ರಾಜ್ಯ ಸರ್ಕಾರ ಕೇವಲ ಎರಡು ದಿನಗಳ ಹಿಂದೆ ಜಾರಿಗೊಳಿಸಿದ್ದ ಗುಟ್ಕಾ ಹಾಗೂ ನಿಕೋಟಿನ್ ಅಥವಾ ತಂಬಾಕು ಅಂಶ ಹೊಂದಿರುವ ಪಾನ್ ಮಸಾಲಾ ಉತ್ಪನ್ನಗಳ ಮೇಲಿನ ಒಂದು ವರ್ಷದ ನಿಷೇಧ ಆದೇಶವನ್ನು ಹಿಂಪಡೆಯುವ ಸಾಧ್ಯತೆಗಳು ಹೆಚ್ಚಾಗಿವೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆದೇಶವನ್ನು ಮರುಪರಿಶೀಲಿಸಿ ಹಿಂಪಡೆಯುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಆಹಾರ ಸುರಕ್ಷತಾ ಆಯುಕ್ತರು ರಾಜ್ಯಾದ್ಯಂತ ಗುಟ್ಕಾ ಹಾಗೂ ತಂಬಾಕು ಅಥವಾ ನಿಕೋಟಿನ್ ಒಳಗೊಂಡ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ, ದಾಸ್ತಾನು, ವಿತರಣೆ, ಸಾಗಣೆ ಮತ್ತು ಮಾರಾಟವನ್ನು ಒಂದು ವರ್ಷದ ಅವಧಿಗೆ ನಿಷೇಧಿಸಿ ಆದೇಶ ಹೊರಡಿಸಿದ್ದರು. ಈ ಕ್ರಮದಿಂದ ಅಡಿಕೆ ಬೆಳೆಗಾರರು ಹಾಗೂ ಪಾನ್ ಮಸಾಲಾ ಉದ್ಯಮಕ್ಕೆ ಸಂಬಂಧಿಸಿದ ಸಾವಿರಾರು ಕುಟುಂಬಗಳ ಮೇಲೆ ಪರಿಣಾಮ ಬೀಳುವ ಆತಂಕ ವ್ಯಕ್ತವಾಗಿತ್ತು.
ನಿಷೇಧ ಆದೇಶದ ಕುರಿತು ತನಗೆ ಪೂರ್ವ ಮಾಹಿತಿ ನೀಡದೆ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಅಸಮಾಧಾನ ವ್ಯಕ್ತಪಡಿಸಿರುವುದಾಗಿ ಮೂಲಗಳು ತಿಳಿಸಿವೆ. ಆದೇಶದಿಂದ ಅಡಿಕೆ ಬೆಳೆಗಾರರು ಸೇರಿದಂತೆ ಅನೇಕ ರೈತರಿಗೆ ಆರ್ಥಿಕ ನಷ್ಟ ಉಂಟಾಗುವ ಸಾಧ್ಯತೆ ಇರುವುದರಿಂದ ಕೂಡಲೇ ಆದೇಶವನ್ನು ಹಿಂಪಡೆಯುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎನ್ನಲಾಗಿದೆ.
ಇದರ ನಡುವೆ, ಗುರುವಾರ ಆಡಳಿತ ಹಾಗೂ ಪ್ರತಿಪಕ್ಷದ ಶಾಸಕರ ನಿಯೋಗವು ಮುಖ್ಯಮಂತ್ರಿಯನ್ನು ಭೇಟಿಯಾಗಿ ನಿಷೇಧ ಆದೇಶವನ್ನು ವಾಪಸ್ ಪಡೆಯುವಂತೆ ಮನವಿ ಸಲ್ಲಿಸಿತ್ತು. ಬಿಜೆಪಿ ಶಾಸಕ ಆರಗ ಜ್ಞಾನೇಂದ್ರ ಹಾಗೂ ಕಾಂಗ್ರೆಸ್ ಶಾಸಕ ಡಿ.ಜಿ. ಶಾಂತನೇಗೌಡ ಅವರ ನೇತೃತ್ವದಲ್ಲಿ ನಡೆದ ಈ ಭೇಟಿಯಲ್ಲಿ ಅಡಿಕೆ ಬೆಳೆಗಾರರ ಹಿತಾಸಕ್ತಿ ಹಾಗೂ ಮಲೆನಾಡು ಭಾಗದ ಆರ್ಥಿಕ ಪರಿಸ್ಥಿತಿಯ ಬಗ್ಗೆ ಗಮನ ಸೆಳೆಯಲಾಗಿತ್ತು.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಡಿಕೆ ಕೃಷಿಯೇ ಪ್ರಮುಖ ಜೀವನಾಧಾರವಾಗಿರುವ ಹಿನ್ನೆಲೆಯಲ್ಲಿ, ನಿಷೇಧ ಆದೇಶದ ವಿರುದ್ಧ ರೈತ ಸಂಘಟನೆಗಳು ಮತ್ತು ಜನಪ್ರತಿನಿಧಿಗಳಿಂದ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. ಇದೀಗ ಮುಖ್ಯಮಂತ್ರಿ ಮಟ್ಟದಲ್ಲಿ ಮರುಪರಿಶೀಲನೆಗೆ ಸೂಚನೆ ನೀಡಿರುವುದರಿಂದ ಆದೇಶವನ್ನು ಅಧಿಕೃತವಾಗಿ ಹಿಂಪಡೆಯುವ ಬಗ್ಗೆ ಸರ್ಕಾರದ ಮುಂದಿನ ಕ್ರಮದತ್ತ ಎಲ್ಲರ ಗಮನ ನೆಟ್ಟಿದೆ.
