Home ಇನ್ನಷ್ಟು ಕೋರ್ಟು - ಕಾನೂನು ಮೊಬೈಲ್‌ನಲ್ಲಿ ಮಕ್ಕಳ ಅಶ್ಲೀಲ ಚಿತ್ರ ಸಂಗ್ರಹವೂ ಅಪರಾಧ: ಕರ್ನಾಟಕ ಹೈಕೋರ್ಟ್ ಸ್ಪಷ್ಟನೆ

ಮೊಬೈಲ್‌ನಲ್ಲಿ ಮಕ್ಕಳ ಅಶ್ಲೀಲ ಚಿತ್ರ ಸಂಗ್ರಹವೂ ಅಪರಾಧ: ಕರ್ನಾಟಕ ಹೈಕೋರ್ಟ್ ಸ್ಪಷ್ಟನೆ

0

ಮಕ್ಕಳ ಅಶ್ಲೀಲ ಚಿತ್ರಗಳು ಅಥವಾ ವೀಡಿಯೊಗಳನ್ನು ಮೊಬೈಲ್ ಫೋನ್‌ನಲ್ಲಿ ಸಂಗ್ರಹಿಸುವುದೇ ಅಪರಾಧ ಎಂದು ಕರ್ನಾಟಕ ಹೈಕೋರ್ಟ್ ಮತ್ತೊಮ್ಮೆ ಸ್ಪಷ್ಟಪಡಿಸಿದೆ. ಇಂತಹ ವಿಷಯಗಳನ್ನು ಕೇವಲ ಸಂಗ್ರಹಿಸಿದ್ದರೂ ಮಾಹಿತಿ ತಂತ್ರಜ್ಞಾನ ಕಾಯ್ದೆ ಮತ್ತು ಪೋಕ್ಸೊ ಕಾಯ್ದೆಯಡಿ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ನ್ಯಾಯಾಲಯ ತಿಳಿಸಿದೆ.

ಕೇರಳದ ತ್ರಿಶೂರ್ ಮೂಲದ ವ್ಯಕ್ತಿಯೊಬ್ಬರು ತಮ್ಮ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ರದ್ದುಪಡಿಸುವಂತೆ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿ ಅರ್ಜಿಯನ್ನು ತಿರಸ್ಕರಿಸಿತು.

ಆರೋಪಿಯ ವಿರುದ್ಧ ಕಳೆದ ವರ್ಷ ಬೆಂಗಳೂರಿನ ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನ್ನ ಮೊಬೈಲ್‌ನಲ್ಲಿ ಮಕ್ಕಳ ಅಶ್ಲೀಲ ಚಿತ್ರಗಳನ್ನು ಸಂಗ್ರಹಿಸಿಕೊಂಡಿದ್ದುದನ್ನು ಒಪ್ಪಿಕೊಂಡಿದ್ದ ಆರೋಪಿಯು, ಇವುಗಳನ್ನು ಯಾರಿಗೂ ರವಾನಿಸದಿರುವುದರಿಂದ ಅಪರಾಧವಾಗುವುದಿಲ್ಲ ಎಂದು ನ್ಯಾಯಾಲಯದ ಮುಂದೆ ವಾದಿಸಿದ್ದ.

ಆದರೆ, ಈ ವಾದವನ್ನು ತಳ್ಳಿಹಾಕಿದ ಹೈಕೋರ್ಟ್, ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ಉಲ್ಲೇಖಿಸಿ ಮಕ್ಕಳನ್ನು ಒಳಗೊಂಡ ಅಶ್ಲೀಲ ವಸ್ತುಗಳನ್ನು ಹೊಂದಿರುವುದು ಅಥವಾ ಸಂಗ್ರಹಿಸುವುದೇ ಕಾನೂನುಬಾಹಿರ ಎಂದು ಹೇಳಿತು. ಇಂತಹ ವಸ್ತುಗಳನ್ನು ಹಂಚಿಕೊಳ್ಳುವ ಅಥವಾ ರವಾನಿಸುವ ಉದ್ದೇಶದಿಂದ ಸಂಗ್ರಹಿಸುವುದೂ ಪೋಕ್ಸೊ ಕಾಯ್ದೆಯಡಿ ಶಿಕ್ಷಾರ್ಹ ಎಂದು ನ್ಯಾಯಾಲಯ ತಿಳಿಸಿದೆ.

ಅರ್ಜಿದಾರರು ತಮ್ಮ ಮೊಬೈಲ್‌ನಲ್ಲಿ ಮಕ್ಕಳ ಅಶ್ಲೀಲ ಚಿತ್ರಗಳು ಹಾಗೂ ವೀಡಿಯೊಗಳನ್ನು ಸಂಗ್ರಹಿಸಿಕೊಂಡಿರುವುದನ್ನು ಒಪ್ಪಿಕೊಂಡಿರುವುದರಿಂದ, ಕೇವಲ ಪ್ರಸಾರ ಮಾಡದಿದ್ದ ಕಾರಣಕ್ಕೆ ಅಪರಾಧದಿಂದ ಮುಕ್ತರಾಗಲು ಸಾಧ್ಯವಿಲ್ಲ ಎಂದು ನ್ಯಾಯಮೂರ್ತಿ ನಾಗಪ್ರಸನ್ನ ಅಭಿಪ್ರಾಯಪಟ್ಟರು.

ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ರದ್ದುಪಡಿಸಲು ಅವಕಾಶವಿಲ್ಲ ಎಂದು ಹೇಳಿದ ನ್ಯಾಯಾಲಯ, ಆರೋಪಿಯು ಪೂರ್ಣ ಪ್ರಮಾಣದ ವಿಚಾರಣೆಯನ್ನು ಎದುರಿಸಬೇಕಾಗುತ್ತದೆ ಎಂದು ತಿಳಿಸಿ ಅರ್ಜಿಯನ್ನು ತಿರಸ್ಕರಿಸಿದೆ.

You cannot copy content of this page

Exit mobile version