ಬೆಂಗಳೂರು : ಬೀದಿಬದಿ ವ್ಯಾಪಾರಿಗಳನ್ನು (Street Vendors) ತೆರವುಗೊಳಿಸುವ ವಿಚಾರದಲ್ಲಿ ಕರ್ನಾಟಕ ಹೈಕೋರ್ಟ್ (High Court) ಮಹತ್ವದ ಸ್ಪಷ್ಟನೆ ನೀಡಿದೆ. ಸುಪ್ರೀಂ ಕೋರ್ಟ್ (Supreme Court) ಆದೇಶವನ್ನು ಮುಂದಿಟ್ಟುಕೊಂಡು ಬೀದಿಬದಿ ವ್ಯಾಪಾರಿಗಳನ್ನು ಏಕಾಏಕಿ ತೆರವುಗೊಳಿಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ. ವ್ಯಾಪಾರಿಗಳ ಹಿತರಕ್ಷಣೆಗೆ ಇರುವ ಕಾನೂನಿನ ನಿಯಮಗಳನ್ನು ಪಾಲಿಸುವುದು ಕಡ್ಡಾಯ ಎಂದು ತಿಳಿಸಿದೆ.ಮಂಗಳೂರಿನ ಟೌನ್ ಹಾಲ್ ಸಮೀಪ ನಡೆಯುತ್ತಿದ್ದ ‘ಸಂಡೇ ಬಜಾರ್’ ತೆರವು ಕಾರ್ಯಾಚರಣೆಗೆ ಸಂಬಂಧಿಸಿದ ಪ್ರಕರಣದ ವಿಚಾರಣೆ ವೇಳೆ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿದೆ. ದಕ್ಷಿಣ ಕನ್ನಡ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘದ ಕಾರ್ಯಾಧ್ಯಕ್ಷ ಬಿ.ಕೆ. ಇಮ್ತಿಯಾಝ್ ಅವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಿಚಾರಣೆ ನಡೆಸಿತು.ಮಹಾನಗರ ಪಾಲಿಕೆ ಅಧಿಕಾರಿಗಳು ಸುಪ್ರೀಂ ಕೋರ್ಟ್ ಆದೇಶವನ್ನು ಉಲ್ಲೇಖಿಸಿ ಸಂಡೇ ಬಜಾರ್‌ನ ಅಂಗಡಿಗಳನ್ನು ತೆರವುಗೊಳಿಸಲು ಮುಂದಾಗಿದ್ದರು. ಇದನ್ನು ವಿರೋಧಿಸಿದ ಸಂಘದ ಪದಾಧಿಕಾರಿಗಳು, ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಮನವಿ ಮಾಡಿದ್ದರು. ಬಳಿಕ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಾಗೂ ಹಲ್ಲೆ ನಡೆಸಿದ ಆರೋಪದಡಿ ಸಂಘದ ಪ್ರತಿನಿಧಿಗಳ ವಿರುದ್ಧ ಪೊಲೀಸ್ ದೂರು ದಾಖಲಾಗಿತ್ತು.
ಈ ಪ್ರಕರಣವನ್ನು ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋಗಿದ್ದ ಅರ್ಜಿದಾರರ ಪರ ವಕೀಲರಾದ ಎಸ್. ಬಾಲನ್ ಮತ್ತು ರಕ್ಷಿತಾ ಸಿಂಗ್, ಪಾಲಿಕೆ ಅಧಿಕಾರಿಗಳು ಯಾವುದೇ ಮುನ್ಸೂಚನೆ ನೀಡದೆ ಅಂಗಡಿಗಳನ್ನು ತೆರವುಗೊಳಿಸಿದ್ದಾರೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು.ವಾರಕ್ಕೊಮ್ಮೆ ನಡೆಯುವ ಸಂಡೇ ಬಜಾರ್ ಅನ್ನು ಶಾಶ್ವತ ಅತಿಕ್ರಮಣ ಎಂದು ಪರಿಗಣಿಸಲಾಗದು. ಸುಪ್ರೀಂ ಕೋರ್ಟ್‌ನ ಆದೇಶವು ಫುಟ್‌ಪಾತ್ ಸೇರಿದಂತೆ ಸಾರ್ವಜನಿಕ ಮೂಲಸೌಕರ್ಯ ನಿರ್ವಹಣೆಗೆ ಸಂಬಂಧಿಸಿದ್ದೇ ಹೊರತು, ಬೀದಿಬದಿ ವ್ಯಾಪಾರಿಗಳ ಹಕ್ಕುಗಳನ್ನು ರಕ್ಷಿಸುವ 2014ರ ಕಾಯ್ದೆಯನ್ನು ರದ್ದುಗೊಳಿಸಿಲ್ಲ ಎಂದು ವಕೀಲರು ವಾದಿಸಿದರು.ಅಲ್ಲದೆ, ತೆರವು ಕಾರ್ಯಾಚರಣೆ ವೇಳೆ ಯಾವುದೇ ಹಲ್ಲೆ ನಡೆದಿಲ್ಲ. ಘಟನೆಗೆ ಸಂಬಂಧಿಸಿದ ದೃಶ್ಯಾವಳಿಗಳು ಲಭ್ಯವಿದ್ದರೂ, ತಮ್ಮ ಕ್ರಮವನ್ನು ಸಮರ್ಥಿಸಿಕೊಳ್ಳಲು ಪಾಲಿಕೆ ಅಧಿಕಾರಿಗಳು ಸಂಘದ ಪದಾಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಅರ್ಜಿದಾರರ ಪರ ವಕೀಲರು ಆರೋಪಿಸಿದರು.
ವಾದ ಆಲಿಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು, ಸಾರ್ವಜನಿಕ ರಸ್ತೆ ಹಾಗೂ ಫುಟ್‌ಪಾತ್‌ಗಳನ್ನು ಸುಗಮವಾಗಿ ನಿರ್ವಹಿಸುವುದು ಅಗತ್ಯ. ಆದರೆ ಅದಕ್ಕಾಗಿ ಬೀದಿಬದಿ ವ್ಯಾಪಾರಿಗಳ ಹಕ್ಕುಗಳನ್ನು ಕಡೆಗಣಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.ಬೀದಿಬದಿ ವ್ಯಾಪಾರಿಗಳ ಹಿತರಕ್ಷಣಾ ಕಾಯ್ದೆ ಜಾರಿಯಲ್ಲಿರುವುದರಿಂದ ಅದರಲ್ಲಿರುವ ನಿಯಮಗಳನ್ನು ಪಾಲಿಸಬೇಕು. ವ್ಯಾಪಾರಿಗಳನ್ನು ತೆರವುಗೊಳಿಸುವ ಮುನ್ನ ಕಾನೂನುಬದ್ಧ ಪ್ರಕ್ರಿಯೆ ಹಾಗೂ ಪುನರ್ವಸತಿ ವ್ಯವಸ್ಥೆ ಕಲ್ಪಿಸುವ ಅಂಶಗಳನ್ನು ಪರಿಗಣಿಸಬೇಕು. ಈ ಕ್ರಮಗಳನ್ನು ಕೈಗೊಳ್ಳದೆ ನಡೆಸುವ ತೆರವು ಕಾನೂನುಬದ್ಧವಾಗುವುದಿಲ್ಲ ಎಂದು ಹೈಕೋರ್ಟ್ ತಿಳಿಸಿದೆ.ಈ ಮೂಲಕ ಸುಪ್ರೀಂ ಕೋರ್ಟ್ ಆದೇಶದ ಹೆಸರಿನಲ್ಲಿ ಬೀದಿಬದಿ ವ್ಯಾಪಾರಿಗಳ ವಿರುದ್ಧ ಏಕಾಏಕಿ ಕ್ರಮ ಕೈಗೊಳ್ಳುವಂತಿಲ್ಲ ಎಂಬ ಸ್ಪಷ್ಟ ಸಂದೇಶವನ್ನು ಹೈಕೋರ್ಟ್ ನೀಡಿದೆ.
