ರಾಹುಲ್ ಗಾಂಧಿ ವಿರುದ್ಧ ರಾಜ್ಯಸಭಾ ಮಾಜಿ ಸಂಸದ ಡಾ.ಸುಬ್ರಮಣಿಯನ್ ಸ್ವಾಮಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಕಾಂಗ್ರೆಸ್ ನಾಯಕನ ಭಾರತೀಯ ಪೌರತ್ವವನ್ನು ರದ್ದುಗೊಳಿಸುವಂತೆ ಗೃಹ ಸಚಿವಾಲಯಕ್ಕೆ ಸೂಚನೆ ನೀಡುವಂತೆ ಕೋರಿ ಅವರು ಅರ್ಜಿ ಸಲ್ಲಿಸಿದ್ದಾರೆ.
ಮುಂದಿನ ವಾರ ದೆಹಲಿ ಹೈಕೋರ್ಟ್ ಈ ಬಗ್ಗೆ ವಿಚಾರಣೆ ನಡೆಸುವ ಸಾಧ್ಯತೆಯಿದೆ.
ಐದು ವರ್ಷಗಳ ಹಿಂದೆ ರಾಹುಲ್ ಗಾಂಧಿಯವರ ಪೌರತ್ವದ ಬಗ್ಗೆ ಗೃಹ ಸಚಿವಾಲಯಕ್ಕೆ ದೂರು ನೀಡಿದ್ದೆ ಎಂದು ಡಾ.ಸುಬ್ರಮಣಿಯನ್ ಸ್ವಾಮಿ ಹೇಳುತ್ತಾರೆ. ಆದರೆ ಇದುವರೆಗೆ ಗೃಹ ಸಚಿವಾಲಯ ಈ ವಿಚಾರದಲ್ಲಿ ಯಾವುದೇ ಸ್ಪಷ್ಟ ನಿರ್ಧಾರ ಅಥವಾ ಕ್ರಮ ಕೈಗೊಂಡಿಲ್ಲ.
ಇದುವರೆಗೆ ಕೈಗೊಂಡಿರುವ ಕ್ರಮಗಳ ಕುರಿತು ಗೃಹ ಸಚಿವಾಲಯದಿಂದ ಸ್ಥಿತಿ ವರದಿ ತರಿಸಿಕೊಳ್ಳುವಂತೆ ಸ್ವಾಮಿ ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ. ಇದಲ್ಲದೇ ರಾಹುಲ್ ಗಾಂಧಿ ಅವರ ಪೌರತ್ವಕ್ಕೆ ಸಂಬಂಧಿಸಿದಂತೆ ಮಾಹಿತಿ ಹಕ್ಕು (ಆರ್‌ಟಿಐ) ಅಡಿಯಲ್ಲಿ ಕೇಳಲಾದ ಮಾಹಿತಿಗೆ ಪ್ರತಿಕ್ರಿಯೆಯಾಗಿ ಕೇಂದ್ರ ಸರ್ಕಾರ ಯಾವುದೇ ಮಾಹಿತಿಯನ್ನು ಹಂಚಿಕೊಳ್ಳಲು ನಿರಾಕರಿಸಿತ್ತು. ಆರ್‌ಟಿಐ ಕಾಯ್ದೆಯ ಸೆಕ್ಷನ್ 8 (1) (ಎಚ್) ಮತ್ತು (ಜೆ) ಅಡಿಯಲ್ಲಿ ಮಾಹಿತಿಯನ್ನು ಬಹಿರಂಗಪಡಿಸಲಾಗುವುದಿಲ್ಲ ಅದು ತನಿಖೆ ಪ್ರಕ್ರಿಯೆಗೆ ಅಡ್ಡಿಯಾಗಬಹುದು ಎಂದು ಸಚಿವಾಲಯ ಹೇಳಿದೆ.
ರಾಹುಲ್ ಗಾಂಧಿಯವರ ಪೌರತ್ವದ ಬಗ್ಗೆ ಪ್ರಶ್ನಿಸಿ ವರ್ಷಗಳ ಹಿಂದೆ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ರಾಹುಲ್ ಗಾಂಧಿ ಅವರ ಪೌರತ್ವದ ಬಗ್ಗೆ ತ್ವರಿತವಾಗಿ ತನಿಖೆ ನಡೆಸುವಂತೆ ಗೃಹ ಸಚಿವಾಲಯಕ್ಕೆ ಸೂಚನೆ ನೀಡಬೇಕು ಎಂದು ಈ ಮನವಿಯಲ್ಲಿ ಆಗ್ರಹಿಸಲಾಗಿತ್ತು. ಅಂದಿನ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ಪೀಠ ಈ ಅರ್ಜಿಯನ್ನು ತಿರಸ್ಕರಿಸಿತ್ತು.