Thursday, August 15, 2024

ಸತ್ಯ | ನ್ಯಾಯ |ಧರ್ಮ

ತಡವಾಗಬಹುದು.. ಆದರೆ ನ್ಯಾಯವೇ ಗೆಲ್ಲುವುದು: ಸಿಸೋಡಿಯಾ ಜಾಮೀನು ಕುರಿತು ಸುನೀತಾ ಕೇಜ್ರಿವಾಲ್ ಪ್ರತಿಕ್ರಿಯೆ

ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ ಹಿರಿಯ ನಾಯಕ ಮನೀಶ್ ಸಿಸೋಡಿಯಾ ಇಂದು ಮತ್ತೆ ಸ್ವತಂತ್ರರಾಗಿದ್ದಾರೆ.

ಮದ್ಯ ನೀತಿ ಪ್ರಕರಣದಲ್ಲಿ ಸಿಸೋಡಿಯಾ ಅವರಿಗೆ ಇಂದು ಜಾಮೀನು ದೊರಕಿದೆ. ಈ ಕುರಿತು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಪತ್ನಿ ಸುನೀತಾ ಕೇಜ್ರಿವಾಲ್ ಪ್ರತಿಕ್ರಿಯಿಸಿದ್ದಾರೆ. ತಡವಾಗಿಯಾದರೂ ನ್ಯಾಯ ಸಿಕ್ಕಿದೆ. ನ್ಯಾಯ ಸಿಗುವುದು ವಿಳಂಬವಾಗಬಹುದು ಆದರೆ ನ್ಯಾಯ ಗೆಲ್ಲದೆ ಇರುವುದಿಲ್ಲ ಎಂದು ಅವರು ಹೇಳಿದ್ದಾರೆ.

ಕಳೆದ ವರ್ಷ ಫೆಬ್ರವರಿ 26ರಂದು ಮದ್ಯ ನೀತಿ ಹಗರಣ ಪ್ರಕರಣದಲ್ಲಿ ಸಿಸೋಡಿಯಾ ಅವರನ್ನು ಅಧಿಕಾರಿಗಳು ಬಂಧಿಸಿದ್ದರು. ಅಂದಿನಿಂದ ಅವರು ತಿಹಾರ್ ಜೈಲಿನಲ್ಲೇ ಇದ್ದರು. ಜಾಮೀನಿಗಾಗಿ ತೀವ್ರ ಹೋರಾಟ ನಡೆಸಿದ್ದರು.

ಈಗ 17 ತಿಂಗಳಿನಿಂದ ಜೈಲಿನಲ್ಲಿದ್ದ ಸಿಸೋಡಿಯಾಗೆ ಸುಪ್ರೀಂ ತೀರ್ಪಿನಿಂದ ಭಾರೀ ರಿಲೀಫ್ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ದೇಶದ ಸರ್ವೋಚ್ಚ ನ್ಯಾಯಾಲಯದ ತೀರ್ಪಿನ ಬಗ್ಗೆ ಆಮ್ ಆದ್ಮಿ ಪಕ್ಷ ಸಂತಸ ವ್ಯಕ್ತಪಡಿಸಿದೆ. ಸತ್ಯಕ್ಕೆ ಕೊನೆಗೂ ಜಯ ಸಿಕ್ಕಿದೆ ಎಂದು ಎಎಪಿ ನಾಯಕರು ಸುಪ್ರೀಂ ತೀರ್ಪನ್ನು ಸ್ವಾಗತಿಸಿದ್ದಾರೆ.

ಇದೇ ಪ್ರಕರಣದಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನೂ ಬಂಧಿಸಲಾಗಿದೆ. ಈ ವರ್ಷದ ಮಾರ್ಚ್‌ನಲ್ಲಿ ಇಡಿ ಕೇಜ್ರಿವಾಲ್‌ ಅವರನ್ನು ಬಂಧಿಸಿತ್ತು. ಅಂದಿನಿಂದ ಅವರು ಜಾಮೀನಿಗಾಗಿ ತೀವ್ರ ಪ್ರಯತ್ನ ನಡೆಸುತ್ತಿದ್ದಾರೆ. ಇಡಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಜಾಮೀನು ನೀಡಿದ್ದರೂ, ಸಿಬಿಐ ಪ್ರಕರಣದಲ್ಲಿ ಅವರು ಪ್ರಸ್ತುತ ತಿಹಾರ್ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಮತ್ತೊಂದೆಡೆ, ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನವನ್ನು ಇದೇ ತಿಂಗಳ 20ರವರೆಗೆ ವಿಸ್ತರಿಸಿ ರೂಸ್ ಅವೆನ್ಯೂ ಕೋರ್ಟ್ ಗುರುವಾರ ಆದೇಶ ಹೊರಡಿಸಿದೆ. ಕಸ್ಟಡಿ ಅವಧಿ ಮುಗಿದ ಕಾರಣ, ಸಿಬಿಐ ಅವರನ್ನು ತಿಹಾರ್ ಜೈಲಿನಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸಿತು. ‌
ಮದ್ಯ ನೀತಿ ಪ್ರಕರಣದಲ್ಲಿ ಕೇಂದ್ರೀಯ ತನಿಖಾ ದಳದ (ಸಿಬಿಐ) ಬಂಧನವನ್ನು ಪ್ರಶ್ನಿಸಿ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಸೋಮವಾರ ವಜಾಗೊಳಿಸಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page