ನವದೆಹಲಿ: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧದ ಆದಾಯ ಮೀರಿ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಿಬಿಐ ತನಿಖೆಯನ್ನು ಹಿಂಪಡೆಯುವ ರಾಜ್ಯ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳನ್ನು ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠದ ಮುಂದೆ ವಿಚಾರಣೆಗೆ ಪಟ್ಟಿ ಮಾಡಲಾಗುವುದು ಎಂದು ಸುಪ್ರೀಂ ಕೋರ್ಟ್ ಸೋಮವಾರ ತಿಳಿಸಿದೆ.
ಸಿಬಿಐ ಮತ್ತು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಗಳ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ, ನ್ಯಾಯಮೂರ್ತಿ ಕೆ. ವಿನೋದ್ ಚಂದ್ರನ್ ಅವರ ನೇತೃತ್ವದ ಪೀಠವು ನಡೆಸಿತು.
ಈ ಪ್ರಕರಣವನ್ನು ಈ ಹಿಂದೆ ನ್ಯಾಯಮೂರ್ತಿ ಸೂರ್ಯಕಾಂತ್ ಅವರ ನೇತೃತ್ವದ ಪೀಠವೇ ವಿಚಾರಣೆ ನಡೆಸಿತ್ತು. ಇದೀಗ ಅವರ ಪೀಠಕ್ಕೆ ವಿಚಾರಣೆ ನಡೆಸುವಂತೆ ಅರ್ಜಿಗಳನ್ನು ವರ್ಗಾಯಿಸಲು ಸುಪ್ರೀಂ ಕೋರ್ಟ್ ಸೂಚಿಸಿದೆ.
ಈ ಸಂದರ್ಭದಲ್ಲಿ ಡಿ.ಕೆ. ಶಿವಕುಮಾರ್ ಅವರ ಪರವಾಗಿ ಹಿರಿಯ ವಕೀಲರಾದ ಅಭಿಷೇಕ್ ಎಂ. ಸಿಂಘ್ವಿ ಅವರು, “ರಾಜಕೀಯ ವಿಷಯಗಳನ್ನು ನ್ಯಾಯಾಲಯದ ಹೊರಗೆ ಇತ್ಯರ್ಥಪಡಿಸಿಕೊಳ್ಳಬೇಕು ಎಂದು ಈ ಹಿಂದೆ ಮುಖ್ಯ ನ್ಯಾಯಮೂರ್ತಿಗಳು ಹೇಳಿದ್ದರು” ಎಂದು ಪೀಠದ ಗಮನಕ್ಕೆ ತಂದರು.
ಪ್ರಕರಣದ ಹಿನ್ನೆಲೆ
ಡಿ.ಕೆ. ಶಿವಕುಮಾರ್ ಅವರು ಆದಾಯಕ್ಕಿಂತ ಅಧಿಕ ಅಕ್ರಮ ಆಸ್ತಿ ಗಳಿಸಿದ್ದಾರೆ ಎಂಬ ಆರೋಪದ ಮೇಲೆ, ಹಿಂದಿನ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರವು 2019ರ ಸೆಪ್ಟೆಂಬರ್ 25 ರಂದು ಸಿಬಿಐ ತನಿಖೆಗೆ ಆದೇಶ ನೀಡಿತ್ತು. ಇದರ ನಂತರ, ಸಿಬಿಐ 2020ರ ಅಕ್ಟೋಬರ್ 3 ರಂದು ಶಿವಕುಮಾರ್ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದೆ.