ಬೆಂಗಳೂರು: ದೀರ್ಘಕಾಲದ ಕಾನೂನು ಹೋರಾಟದ ನಂತರ, ಧಾರವಾಡದ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್ ಗುರುವಾರ ಜಾಮೀನು ನೀಡಿದೆ. ಈ ಮೂಲಕ ಜೈಲುವಾಸ ಅನುಭವಿಸುತ್ತಿದ್ದ ಕುಲಕರ್ಣಿಗೆ ದೊಡ್ಡ ಮಟ್ಟದ ಕಾನೂನು ರಿಲೀಫ್ ಸಿಕ್ಕಂತಾಗಿದೆ.
ಇತ್ತೀಚೆಗಷ್ಟೇ ಕರ್ನಾಟಕ ಹೈಕೋರ್ಟ್ ವಿನಯ್ ಕುಲಕರ್ಣಿ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಕುಲಕರ್ಣಿ ಪರ ವಕೀಲ ಶರಣಗೌಡ ಪಾಟೀಲ್ ನೇತೃತ್ವದ ತಂಡ ಮಂಡಿಸಿದ ವಾದವನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಸಂಜಯ್ ಕರೋಲ್ ಅವರಿದ್ದ ಪೀಠವು ಜಾಮೀನು ಮಂಜೂರು ಮಾಡಿದೆ.
ಜಾಮೀನು ನೀಡುವ ಸಂದರ್ಭದಲ್ಲಿ ನ್ಯಾಯಾಲಯವು ಒಂದು ಪ್ರಮುಖ ಸೂಚನೆ ನೀಡಿದ್ದು, ಮುಂದಿನ ಎರಡು ತಿಂಗಳ ಒಳಗಾಗಿ ಪ್ರಕರಣದ ವಿಚಾರಣೆಯನ್ನು ಪೂರ್ಣಗೊಳಿಸುವಂತೆ ಸಂಬಂಧಪಟ್ಟ ನ್ಯಾಯಾಲಯಕ್ಕೆ ಆದೇಶಿಸಿದೆ.
ಪ್ರಕರಣದ ಸಾಕ್ಷಿಗಳಿಗೆ ಬೆದರಿಕೆ ಹಾಕಿದ್ದಾರೆ ಎಂಬ ಗಂಭೀರ ಆರೋಪದ ಮೇಲೆ ಸಿಬಿಐ ಮನವಿಯ ಮೇರೆಗೆ ಈ ಹಿಂದೆ ವಿನಯ್ ಕುಲಕರ್ಣಿ ಅವರ ಜಾಮೀನು ರದ್ದಾಗಿತ್ತು. ಈ ಹಿನ್ನೆಲೆಯಲ್ಲಿ ಅವರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಶರಣಾಗಿ ಜೈಲು ಸೇರಿದ್ದರು. ಸಾಕ್ಷಿ ನಾಶ ಮತ್ತು ತನಿಖೆಗೆ ಅಡ್ಡಿಪಡಿಸುವ ಸಾಧ್ಯತೆ ಇದೆ ಎಂದು ಸಿಬಿಐ ನಿರಂತರವಾಗಿ ಜಾಮೀನು ನೀಡುವುದಕ್ಕೆ ಆಕ್ಷೇಪ ವ್ಯಕ್ತಪಡಿಸುತ್ತಲೇ ಬಂದಿತ್ತು.
ಸದ್ಯ ಸುಪ್ರೀಂ ಕೋರ್ಟ್‌ನಿಂದ ಜಾಮೀನು ಸಿಕ್ಕಿರುವುದು ಅವರ ಬೆಂಬಲಿಗರಲ್ಲಿ ಸಂತಸ ತಂದಿದ್ದು, ಧಾರವಾಡ ರಾಜಕಾರಣದಲ್ಲೂ ಈ ಬೆಳವಣಿಗೆ ಮಹತ್ವ ಪಡೆದುಕೊಂಡಿದೆ.
