ಧರ್ಮಸ್ಥಳ ಸೌಜನ್ಯ ಪ್ರಕರಣಕ್ಕೆ ಹೊಸ ತಿರುವು: ಸಿಬಿಐ ಮತ್ತು ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

2012ರಲ್ಲಿ ನಡೆದ ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವು ಮತ್ತೆ ಚರ್ಚೆಗೆ ಕಾರಣವಾಗಿದ್ದು, ಸುಪ್ರೀಂಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಪೂರ್ಣ ತನಿಖಾ ವರದಿಯನ್ನು ಸಲ್ಲಿಸುವಂತೆ ಸಿಬಿಐಗೆ ಸೂಚನೆ ನೀಡಿದ್ದು, ರಾಜ್ಯ ಸರ್ಕಾರಕ್ಕೂ ನೋಟಿಸ್ ಜಾರಿಗೊಳಿಸಲಾಗಿದೆ.

ಧರ್ಮಸ್ಥಳ ಸಮೀಪದ ಎಸ್‌ಡಿಎಂ ಕಾಲೇಜಿನ ವಿದ್ಯಾರ್ಥಿನಿ ಸೌಜನ್ಯ 2012ರ ಅಕ್ಟೋಬರ್‌ನಲ್ಲಿ ನಾಪತ್ತೆಯಾಗಿದ್ದು, ಮರುದಿನ ಅರಣ್ಯ ಪ್ರದೇಶದಲ್ಲಿ ಮೃತದೇಹ ಪತ್ತೆಯಾಗಿತ್ತು. ಪ್ರಾಥಮಿಕ ತನಿಖೆಯಲ್ಲಿ ಆಕೆಯನ್ನು ಅತ್ಯಾಚಾರ ಮಾಡಿ ಬಳಿಕ ಕೊಲೆ ಮಾಡಲಾಗಿದೆ ಎಂಬುದು ದೃಢಪಟ್ಟಿತ್ತು.

ಪ್ರಕರಣದ ಆರಂಭಿಕ ತನಿಖೆಯನ್ನು ಬೆಳ್ತಂಗಡಿ ಪೊಲೀಸರು ನಡೆಸಿದ ನಂತರ, ಹೆಚ್ಚಿನ ಪರಿಶೀಲನೆಗಾಗಿ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಲಾಗಿತ್ತು. ಸಿಬಿಐ ತನಿಖೆಯ ಭಾಗವಾಗಿ ಸಂತೋಷ್ ರಾವ್ ಎಂಬಾತನನ್ನು ಬಂಧಿಸಿ ಆರೋಪಪಟ್ಟಿ ಸಲ್ಲಿಸಿತು. ಆದರೆ ಬೆಂಗಳೂರಿನ ಸಿಬಿಐ ವಿಶೇಷ ನ್ಯಾಯಾಲಯವು ಸಾಕ್ಷ್ಯಾಧಾರಗಳ ಕೊರತೆಯನ್ನು ಉಲ್ಲೇಖಿಸಿ ಆರೋಪಿಯನ್ನು ನಿರ್ದೋಷಿ ಎಂದು ಬಿಡುಗಡೆ ಮಾಡಿತ್ತು.

ವಿಚಾರಣೆಯ ವೇಳೆ ನ್ಯಾಯಾಲಯವು ತನಿಖೆಯಲ್ಲಿನ ಗಂಭೀರ ಲೋಪಗಳನ್ನು ಎತ್ತಿ ತೋರಿಸಿ, ನೈಜ ಅಪರಾಧಿಗಳನ್ನು ಪತ್ತೆಹಚ್ಚುವಲ್ಲಿ ತನಿಖಾ ಸಂಸ್ಥೆಗಳು ವಿಫಲವಾಗಿವೆ ಎಂದು ಅಭಿಪ್ರಾಯಪಟ್ಟಿತ್ತು.

ಈ ಹಿನ್ನೆಲೆಯಲ್ಲಿ ಸೌಜನ್ಯ ತಾಯಿ ಕುಸುಮಾವತಿ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಮೇಲ್ಮನವಿಯನ್ನು ವಿಚಾರಣೆ ಮಾಡಿದ ಪೀಠವು ಕೆಳ ನ್ಯಾಯಾಲಯದ ತೀರ್ಪಿನ ಅಂಶಗಳನ್ನು ಪರಿಗಣಿಸಿ ಸಿಬಿಐಗೆ ಸಂಪೂರ್ಣ ತನಿಖಾ ವರದಿ ಸಲ್ಲಿಸುವಂತೆ ನಿರ್ದೇಶಿಸಿದೆ.

ಸುಮಾರು 14 ವರ್ಷಗಳಿಂದ ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿರುವ ಕುಟುಂಬಕ್ಕೆ, ಸುಪ್ರೀಂ ಕೋರ್ಟ್‌ನ ಈ ಕ್ರಮವು ಪ್ರಕರಣಕ್ಕೆ ಹೊಸ ಚೈತನ್ಯ ನೀಡುವ ನಿರೀಕ್ಷೆ ಮೂಡಿಸಿದೆ.

Related Articles

ಇತ್ತೀಚಿನ ಸುದ್ದಿಗಳು