ಬೆಂಗಳೂರು : ಲೋಕಾಯುಕ್ತ ವಿಶೇಷ ತನಿಖಾ ತಂಡ (SIT) ಎಡಿಜಿಪಿ ಚಂದ್ರಶೇಖರ್ ಅವರಿಗೆ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಅವರು ಬೆದರಿಕೆ ಹಾಕಿದ್ದ ಪ್ರಕರಣವನ್ನು ಸುಪ್ರೀಂ ಕೋರ್ಟ್ (Supreme Court) ರದ್ದುಗೊಳಿಸಿದೆ. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲನವಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಕುಮಾರಸ್ವಾಮಿ ಅವರಿಗೆ ದೊಡ್ಡ ಗೆಲುವಾಗಿದೆ. ಸರ್ಕಾರದ ಮೇಲ್ಮನವಿ ಅರ್ಜಿಯನ್ನು ವಜಾಗೊಳಿಸುವಂತೆ ಕುಮಾರಸ್ವಾಮಿ ಸಲ್ಲಿಸಿದ್ದ ಅರ್ಜಿಯನ್ನು ಮಾನ್ಯ ಮಾಡಿದ ನ್ಯಾಯಾಲಯ ಮೇಲ್ನೋಟಕ್ಕೆ ಬೆದರಿಕೆ ಹಾಕಿರುವ ಬಗ್ಗೆ ದಾಖಲೆಗಳು ಸರಿಯಾಗಿಲ್ಲ. ಹೀಗಾಗಿ ಅರ್ಜಿಯನ್ನು ವಜಾಗೊಳಿಸುವುದಾಗಿ ನ್ಯಾಯಮೂರ್ತಿಗಳು ಆದೇಶದಲ್ಲಿ ತಿಳಿಸಿದ್ದಾರೆ.
ಏನಿದು ಘಟನೆ ?
ಆಂಧ್ರಪ್ರದೇಶ ಮೂಲದ ಜಂತಕಲ್ ಮೈನಿಂಗ್ ಕಂಪನಿಯ ಸಹವರ್ತಿ ಸಂಸ್ಥೆ ಶ್ರೀ ಸಾಯಿ ವೆಂಕಟೇಶ್ವರ್ ಮಿನರಲ್ಸ್ ಕಂಪನಿಗೆ ಆಗಿನ ಸಿಎಂ ಆಗಿದ್ದ ಕುಮಾರಸ್ವಾಮಿ ಅವರು ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಎನ್‌ಇಬಿ ರೇಂಜ್‌ನಲ್ಲಿ 550 ಎಕರೆ ಪ್ರದೇಶದಲ್ಲಿ ಗಣಿಗಾರಿಕೆ ಲೀಸ್ ನೀಡಲು ಪರವಾನಗಿಗೆ ಅನುಮೋದನೆ ಕಡತಕ್ಕೆ ಸಹಿ ಹಾಕಿದ್ದರು. 2007ರ ಅಕ್ಟೋಬರ್ 5 ರಂದು ಸಹಿ ಹಾಕಲಾಗಿತ್ತು. ಈ ವೇಳೆ ಸಲ್ಲಿಕೆಯಾಗಿದ್ದ 29 ಅರ್ಜಿಗಳ ಪೈಕಿ ಕೊನೆಯದಾಗಿ ಸಲ್ಲಿಕೆಯಾಗಿದ್ದ ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್ ಅರ್ಜಿಯನ್ನು ಸರ್ಕಾರ ನಿಯಮಾವಳಿ ಉಲ್ಲಂಘಿಸಿ ಅನುಮೋದಿಸಿ ಮಂಜೂರು ಮಾಡಲಾಗಿತ್ತು ಎಂದು ಕುಮಾರಸ್ವಾಮಿ ವಿರುದ್ಧ ಆರೋಪಿಸಲಾಗಿತ್ತು.ಈ ಪ್ರಕರಣದಲ್ಲಿ ಹೆಚ್ಚುವರಿ ಸಾಕ್ಷ್ಯಾಧಾರಗಳು ದೊರೆತಿದ್ದರಿಂದ ಕಾನೂನು ಕ್ರಮಕೈಗೊಳ್ಳಲು ಅನುಮತಿ ನೀಡುವಂತೆ ರಾಜ್ಯಪಾಲ ಥಾವರ್ ಚಂದ್ ಗೆಹೋಟ್ ಅವರಿಗೆ ಎಸ್‌ಐಟಿ ಮುಖ್ಯಸ್ಥ ಎಂ ಚಂದ್ರಶೇಖರ್ ಮನವಿ ಮಾಡಿದ್ದರು. ಆದರೆ ಕುಮಾರಸ್ವಾಮಿ ಅವರು ಸೆಪ್ಟೆಂಬರ್ 28 ಮತ್ತು 29ರಂದು ಮಾಧ್ಯಮಗೋಷ್ಠಿ ನಡೆಸಿ ತನ್ನ ವಿರುದ್ಧ ಸುಳ್ಳು ಮತ್ತು ದುರುದ್ದೇಶಪೂರಿತ ಆರೋಪ ಮಾಡಿ, ಬೆದರಿಕೆ ಹಾಕಿದ್ದಾರೆ ಎಂದು ಪ್ರತ್ಯಾರೋಪ ಮಾಡಿದ್ದರು. ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ರಾಜ್ಯಪಾಲರಿಗೆ ಚಂದ್ರ ಶೇಖರ್ ಪತ್ರ ಬರೆದಿದ್ದರು. ಆ ಬಳಿಕ, ಕುಮಾರಸ್ವಾಮಿ ಸುದ್ದಿಗೋಷ್ಠಿ ನಡೆಸಿ, ಚಂದ್ರಶೇಖರ್ ವಿರುದ್ಧ ಆರೋಪ ಮಾಡಿದ್ದರು. 50 ಕೋಟಿ ನೀಡುವಂತೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ವಿಜಯ ತಾತ ನೀಡಿದ ದೂರು ಆಧರಿಸಿ, ಕುಮಾರಸ್ವಾಮಿ ವಿರುದ್ಧ ಇತ್ತೀಚೆಗಷ್ಟೇ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.