ಹೊಸದೆಹಲಿ: ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂಕೋರ್ಟ್ ಸೋಮವಾರ ವಜಾಗೊಳಿಸಿದೆ.
ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ತನಗೆ ಜಾಮೀನು ನೀಡಲು ನಿರಾಕರಿಸಿದ ಕರ್ನಾಟಕ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು.
ಇಂದು ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು ಸತೀಶ್ ಚಂದ್ರ ಶರ್ಮಾ ಅವರನ್ನೊಳಗೊಂಡ ಪೀಠ, ಹೈಕೋರ್ಟ್ ಆದೇಶವನ್ನು ಎತ್ತಿ ಹಿಡಿದಿದ್ದು, ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿತು.
ಪ್ರಜ್ವಲ್ ರೇವಣ್ಣ ಪರ ವಾದ ಮಂಡಿಸಿದ ಹಿರಿಯ ವಕೀಲ ಮುಕುಲ್ ರೋಹ್ಟಗಿ, ಆರೋಪಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ್ದರು. ಹೀಗಾಗಿ ಅವರ ವರ್ಚಸ್ಸಿಗೆ ಧಕ್ಕೆ ತರಲು ಅತ್ಯಾಚಾರದ ಆರೋಪ ಮಾಡಲಾಗಿದ್ದು, ಅವರಿಗೆ ಜಾಮೀನು ನೀಡುವಂತೆ ನ್ಯಾಯಾಲಯದ ಬಳಿ ಮನವಿ ಮಾಡಿದರು. ಆದರೆ ಆರೋಪಿ ಪ್ರಭಾವಿ ಎಂದು ಪರಗಣಿಸಿದ ಉನ್ನತ ನ್ಯಾಯಪೀಠ, ಜಾಮೀನು ಅರ್ಜಿಯನ್ನು ವಜಾಗೊಳಿಸಿತು.
ಆರು ತಿಂಗಳ ನಂತರ ಮತ್ತೆ ಜಾಮೀನು ಅರ್ಜಿ ಸಲ್ಲಿಸಬಹುದೇ ಎಂಬ ರೊಹ್ಟಗಿ ಮನವಿಗೆ ಏನನ್ನೂ ಹೇಳುವುದಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿತು.