ದೆಹಲಿ: ಪರಿಸರ ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರ ಬಂಧನವನ್ನು ಪ್ರಶ್ನಿಸಿ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಇಂದು) ಕೈಗೆತ್ತಿಕೊಳ್ಳಲಿದೆ.
ರಾಷ್ಟ್ರೀಯ ಭದ್ರತಾ ಕಾಯಿದೆ (ಎನ್‌ಎಸ್‌ಎ) ಅಡಿಯಲ್ಲಿ ವಾಂಗ್‌ಚುಕ್ ಅವರನ್ನು ಬಂಧಿಸಿರುವುದು ಅಕ್ರಮ ಮತ್ತು ಮೂಲಭೂತ ಹಕ್ಕುಗಳಿಗೆ ಭಂಗ ತರುವ ಏಕಪಕ್ಷೀಯ ಕ್ರಮವಾಗಿದೆ ಎಂದು ಗೀತಾಂಜಲಿ ತಮ್ಮ ಅರ್ಜಿಯಲ್ಲಿ ವಿವರಿಸಿದ್ದಾರೆ.
ನವೆಂಬರ್ 24 ರಂದು ನಡೆದ ಹಿಂದಿನ ವಿಚಾರಣೆಯ ಸಂದರ್ಭದಲ್ಲಿ, ಕೇಂದ್ರ ಮತ್ತು ಲಡಾಖ್ ಆಡಳಿತದ ಪರವಾಗಿ ಹಾಜರಿದ್ದ ಸಾಲಿಟರ್ ಜನರಲ್ ತುಷಾರ್ ಮೆಹ್ತಾ ಅವರು ಅರ್ಜಿಯ ಕುರಿತು ವಿವರಣೆ ನೀಡಲು ಸಮಯ ಕೇಳಿದ್ದರಿಂದ ಸುಪ್ರೀಂ ಕೋರ್ಟ್ ಅದಕ್ಕೆ ಸಮ್ಮತಿಸಿತ್ತು. ನ್ಯಾಯಮೂರ್ತಿಗಳಾದ ಅರವಿಂದ್ ಕುಮಾರ್ ಮತ್ತು ಎನ್.ವಿ. ಅಂಜಾರಿಯಾ ಅವರ ಧರ್ಮಪೀಠವು ಸೋಮವಾರ ಈ ಕುರಿತು ವಿಚಾರಣೆ ನಡೆಸಲಿದೆ.
ಲಡಾಖ್‌ಗೆ ರಾಜ್ಯ ಸ್ಥಾನಮಾನ ಮತ್ತು ಸಂವಿಧಾನದ ಆರನೇ ಶೆಡ್ಯೂಲ್ ಅಡಿಯಲ್ಲಿ ಸೇರಿಸಬೇಕೆಂದು ಒತ್ತಾಯಿಸಿ ಸೆಪ್ಟೆಂಬರ್‌ನಲ್ಲಿ ವಾಂಗ್‌ಚುಕ್ ನೇತೃತ್ವದಲ್ಲಿ ನಡೆದ ಆಂದೋಲನವು ಹಿಂಸಾತ್ಮಕ ಸ್ವರೂಪ ಪಡೆದಿತ್ತು.
ಈ ವೇಳೆ ಹಲವಾರು ಘಟನೆಗಳಲ್ಲಿ ನಾಲ್ವರು ಸಾವನ್ನಪ್ಪಿದ್ದು, 90ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಹಿಂಸೆಯನ್ನು ಪ್ರಚೋದಿಸಿದ ಆರೋಪದ ಮೇಲೆ ವಾಂಗ್‌ಚುಕ್ ಅವರನ್ನು ಸೆಪ್ಟೆಂಬರ್ 26ರಂದು ಬಂಧನಕ್ಕೆ ತೆಗೆದುಕೊಳ್ಳಲಾಗಿತ್ತು.
