ಬೆಂಗಳೂರು : ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳುತ್ತಿರುವ ರಾಜ್ಯ ಸರಕಾರದ ನೀತಿಯನ್ನು ಖಂಡಿಸಿ ಅನಿರ್ಧಿಷ್ಟಾವಧಿ ಧರಣಿ ನಡೆಸುತ್ತಿದ್ದ ರೈತ ನಾಯಕರನ್ನು ಸ್ವಾತಂತ್ರ್ಯ ದಿನವೇ ಪೊಲೀಸರು ಬಂಧಿಸಿದ್ದು, ರೈತರ ಆಕ್ರೋಶಕ್ಕೆ ಕಾರಣವಾಗಿದೆ.
ದೇವನಹಳ್ಳಿಯ ವಿಮಾನ ನಿಲ್ದಾಣದ ಸುತ್ತ ಮುತ್ತಲಿನ 1700 ಎಕರೆಗೂ ಹೆಚ್ಚು ಫಲವತ್ತಾದ ಭೂಮಿಯನ್ನು ವಶಪಡಿಸಿಕೊಳ್ಳುವ ಸರಕಾರ ನೀತಿಯ ವಿರುದ್ಧ 135 ದಿನಗಳಿಂದ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದ್ದು, ಪ್ರತಿಭಟನೆಗೆ ನಾಯಕತ್ವ ನೀಡಿದ್ದ ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಸಮಿತಿ ಅಧ್ಯಕ್ಷ ಜಿಸಿ ಬಯ್ಯಾರೆಡ್ಡಿಯರನ್ನು ಇಂದು ಬೆಳಗ್ಗೆ 4 ಗಂಟೆ ಸಮಯದಲ್ಲಿ ಪೊಲೀಸರು ಬಂಧಿಸಿದ್ದಾರೆ. ನಂತರ ಆರ್ ಕೆ ಹೆಗಡೆ ನಗರದ ಸಂಪಿಗೆಹಳ್ಳಿ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ.
ಈ ಕುರಿತು ರಾಜ್ಯ ಪ್ರಧಾನ ಕಾರ್ಯದರ್ಶಿ ಯು. ಬಸವರಾಜ ಪತ್ರಿಕಾ ಹೇಳಿಕೆ ನೀಡಿದ್ದು, ಬಯ್ಯಾರೆಡ್ಡಿಯವರನ್ನು ಸ್ವಾತಂತ್ರ್ಯದ ಅಮೃತ ಮಹೋತ್ಸವದ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಬಿಡದೇ ಅಕ್ರಮವಾಗಿ ಬಂಧನದಲ್ಲಿರಿಸಿರುವುದು ಸರಿಯಾದ ಕ್ರಮವಲ್ಲ ಎಂದು ಆರೋಪಿಸಿದ್ದಾರೆ. ಈ ಘಟನೆಯಿಂದಾಗಿ ರೈತರು ಯಾವುದೇ ಕಾರಣಕ್ಕು ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.