ಚೆನ್ನೈ: ತಮಿಳುನಾಡಿನ ತಿರುಪ್ಪೂರು ಜಿಲ್ಲೆಯ ವೆಳ್ಳಕೋವಿಲ್ ಸಮೀಪದ ಕುಮಾರವಲ್ಸು ಎಂಬಲ್ಲಿ ಬುಧವಾರ ಮುಂಜಾನೆ ನಡೆದ ರಸ್ತೆ ಅಪಘಾತದಲ್ಲಿ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರರಲ್ಲಿ ಒಬ್ಬ ಪೊಲೀಸ್ ಕಾನ್ಸ್ಟೇಬಲ್, ಓರ್ವ ಲಾರಿ ಚಾಲಕ ಮತ್ತು ಕಾರಿನಲ್ಲಿದ್ದ ನಾಲ್ವರು ಪ್ರಯಾಣಿಕರು ಸೇರಿದ್ದಾರೆ.
ಅಪಘಾತ ನಡೆದಿದ್ದು ಹೇಗೆ?: ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ನೀಡಿರುವ ಮಾಹಿತಿಯ ಪ್ರಕಾರ, ಪೊಲೀಸ್ ಕಾನ್ಸ್ಟೇಬಲ್ ರವಿಕುಮಾರ್ ಮತ್ತು ಲಾರಿ ಚಾಲಕರೊಬ್ಬರು ರಸ್ತೆಗೆ ಅಡ್ಡಲಾಗಿ ಇರಿಸಲಾಗಿದ್ದ ಬ್ಯಾರಿಕೇಡ್‌ಗಳನ್ನು ತೆರವುಗೊಳಿಸುತ್ತಿದ್ದರು. ಈ ಸಮಯದಲ್ಲಿ ಅತಿ ವೇಗವಾಗಿ ಬಂದ ಕಾರೊಂದು ಅವರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾನ್ಸ್ಟೇಬಲ್ ಮತ್ತು ಲಾರಿ ಚಾಲಕ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.
ಇದೇ ಅಪಘಾತದಲ್ಲಿ ನಿಯಂತ್ರಣ ತಪ್ಪಿದ ಕಾರಿನಲ್ಲಿದ್ದ ನಾಲ್ವರು ಪ್ರಯಾಣಿಕರು ಮೃತಪಟ್ಟಿದ್ದಾರೆ. ಮೃತ ಪ್ರಯಾಣಿಕರಲ್ಲಿ ಒಬ್ಬ ಮಹಿಳೆಯೂ ಸೇರಿದ್ದಾರೆ ಎಂದು ತಿಳಿದುಬಂದಿದೆ.
ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ತಿರುಪ್ಪೂರು ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ರವಾನಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
