ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಬೇಸಿಗೆಯಲ್ಲಿ ಉಂಟಾಗಬಹುದಾದ ಕುಡಿಯುವ ನೀರಿನ ಸಮಸ್ಯೆಯನ್ನು ಎದುರಿಸಲು ಸರ್ಕಾರ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದು, ಈಗಾಗಲೇ 21 ಜಿಲ್ಲೆಗಳ 144 ತಾಲ್ಲೂಕುಗಳ 183 ಗ್ರಾಮಗಳಲ್ಲಿ ನೀರಿನ ಸಮಸ್ಯೆ ದಾಖಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಈ ಗ್ರಾಮಗಳ ಪೈಕಿ 31 ಗ್ರಾಮಗಳಿಗೆ 96 ಟ್ಯಾಂಕರ್‌ಗಳ ಮೂಲಕ ಕುಡಿಯುವ ನೀರನ್ನು ಪೂರೈಸಲಾಗುತ್ತಿದ್ದು, ಉಳಿದ 152 ಗ್ರಾಮಗಳಿಗೆ 154 ಖಾಸಗಿ ಕೊಳವೆಬಾವಿಗಳನ್ನು ಬಾಡಿಗೆ ಆಧಾರದ ಮೇಲೆ ಪಡೆದು ನೀರಿನ ಸರಬರಾಜು ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.
ಬೇಸಿಗೆಯಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಕೊರತೆ ಉಂಟಾಗದಂತೆ ಎಲ್ಲಾ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಲಾಗಿದೆ. ಅಗತ್ಯವಿರುವ ಸ್ಥಳಗಳಲ್ಲಿ ಖಾಸಗಿ ಬೋರ್‌ವೆಲ್‌ಗಳನ್ನು ಬಾಡಿಗೆಗೆ ಪಡೆಯುವುದು ಹಾಗೂ ಟ್ಯಾಂಕರ್‌ಗಳ ಮೂಲಕ ನೀರನ್ನು ಪೂರೈಸುವ ವ್ಯವಸ್ಥೆ ಕಲ್ಪಿಸಲು ಸೂಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ನೀರು ಬತ್ತಿಹೋಗಿರುವ ಕೊಳವೆಬಾವಿಗಳನ್ನು ಫ್ಲಷಿಂಗ್ ಹಾಗೂ ಆಳಗೊಳಿಸುವ ಮೂಲಕ ಪುನಶ್ಚೇತನಗೊಳಿಸುವ ಕ್ರಮ ಕೈಗೊಳ್ಳಲಾಗುತ್ತಿದ್ದು, ಅಗತ್ಯವಿದ್ದಲ್ಲಿ ಭೂವಿಜ್ಞಾನಿಗಳ ವರದಿ ಆಧರಿಸಿ ಹೊಸ ಕೊಳವೆಬಾವಿಗಳನ್ನು ಕೊರೆಯಲು ಸೂಚಿಸಲಾಗಿದೆ ಎಂದು ಸಚಿವರು ಹೇಳಿದ್ದಾರೆ.
ರಾಜ್ಯವು ಮೂಲತಃ ಶುಷ್ಕ ಪ್ರದೇಶವಾಗಿರುವುದರಿಂದ ಬೇಸಿಗೆಯಲ್ಲಿ ಬಹುತೇಕ ಜಲಮೂಲಗಳು ಬತ್ತಿಹೋಗುವ ಸಾಧ್ಯತೆ ಇರುವುದರಿಂದ ಈ ಸಮಸ್ಯೆಯನ್ನು ದೈನಂದಿನ ಆಧಾರದ ಮೇಲೆ ಮೇಲ್ವಿಚಾರಣೆ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಕುಡಿಯುವ ನೀರಿನ ಗುಣಮಟ್ಟವನ್ನು ಖಚಿತಪಡಿಸಿಕೊಳ್ಳುವ ನಿಟ್ಟಿನಲ್ಲಿ ಗ್ರಾಮ ಪಂಚಾಯತಿ ಮಟ್ಟದಲ್ಲಿ ಎಲ್ಲಾ ನೀರಿನ ಮೂಲಗಳ ಮಾದರಿಗಳನ್ನು ಪರೀಕ್ಷಿಸಲು ಹಾಗೂ ಪ್ರತಿ ಗ್ರಾಮದಲ್ಲಿ ಕನಿಷ್ಠ ಮೂರು ನಳ ಸಂಪರ್ಕಗಳ ನೀರಿನ ಗುಣಮಟ್ಟ ಪರೀಕ್ಷೆ ನಡೆಸಿ ದಾಖಲಿಸಲು ಸೂಚಿಸಲಾಗಿದೆ. ಜೊತೆಗೆ ಎಲ್ಲ ಮೇಲ್ಮಟ್ಟದ ಜಲಸಂಗ್ರಹಾರಗಳಾದ OHTಗಳನ್ನು ಮಾರ್ಗಸೂಚಿಗಳಂತೆ ಶುದ್ಧೀಕರಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದು ಸಚಿವರು ವಿವರಿಸಿದ್ದಾರೆ.
ಮಾರ್ಚ್ 2026ರ ಅವಧಿಯಲ್ಲಿ ಫ್ಲಷಿಂಗ್ ಹಾಗೂ ಆಳಗೊಳಿಸುವ ಮೂಲಕ 1053 ಕೊಳವೆಬಾವಿಗಳನ್ನು ದುರಸ್ತಿಗೊಳಿಸುವ ಕಾರ್ಯವನ್ನು ಕೈಗೊಳ್ಳಲಾಗುತ್ತಿದ್ದು, ತುರ್ತು ಪರಿಸ್ಥಿತಿಯಲ್ಲಿ ಹೊಸ ಕೊಳವೆಬಾವಿಗಳನ್ನು ಕೊರೆಯುವ ಸಾಧ್ಯತೆಯೂ ಇದೆ. ಈ ಸಂಬಂಧ ಎಲ್ಲಾ ಜಿಲ್ಲಾಡಳಿತಗಳಿಗೆ ಆದ್ಯತೆಯ ಮೇರೆಗೆ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಬೇಸಿಗೆ ಅವಧಿಯಲ್ಲಿ ರಾಜ್ಯದ ಯಾವುದೇ ಗ್ರಾಮೀಣ ಪ್ರದೇಶದಲ್ಲೂ ಕುಡಿಯುವ ನೀರಿನ ಕೊರತೆ ಉಂಟಾಗದಂತೆ ತುರ್ತು ಕಾಮಗಾರಿಗಳನ್ನು ಕೈಗೊಳ್ಳಲು ಅಗತ್ಯವಿರುವ ಅನುದಾನವನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಬರ ಪರಿಹಾರ ನಿಧಿ ಮತ್ತು ಇಲಾಖೆಯ ಟಾಸ್ಕ್‌ಫೋರ್ಸ್ ಮೂಲಕ ಸಮನ್ವಯಗೊಳಿಸಿ ಬಳಸಿಕೊಳ್ಳಲಾಗುತ್ತದೆ. ಈ ಕಾರ್ಯದಲ್ಲಿ ಗ್ರಾಮ ಪಂಚಾಯತಿಗಳು, ತಾಲ್ಲೂಕು ಪಂಚಾಯತಿಗಳು ಹಾಗೂ ಜಿಲ್ಲಾಡಳಿತ ಪರಸ್ಪರ ಸಮನ್ವಯದೊಂದಿಗೆ ಕೆಲಸ ಮಾಡುವಂತೆ ಸೂಚಿಸಲಾಗಿದೆ ಎಂದು ಸಚಿವರು ಹೇಳಿದ್ದಾರೆ.
