Friday, December 12, 2025

ಸತ್ಯ | ನ್ಯಾಯ |ಧರ್ಮ

ದೇವನಹಳ್ಳಿ ಬಳಿ ರಾತ್ರಿ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾ*ವು

ಬೆಂಗಳೂರು: ಬೆಂಗಳೂರಿನ ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹೊರವಲಯದ ಲಾಲಗೊಂಡನಹಳ್ಳಿ ಗೇಟ್ ಬಳಿ ಬುಧವಾರ ರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೂರು ಮಂದಿ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ದೇವನಹಳ್ಳಿ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ದುರ್ಘಟನೆ ಸಂಭವಿಸಿದೆ.

ಮೂಲಗಳ ಪ್ರಕಾರ, ಚಿಕ್ಕಬಳ್ಳಾಪುರ ದಿಕ್ಕಿನಿಂದ ದೇವನಹಳ್ಳಿಯ ಕಡೆಗೆ ವೇಗವಾಗಿ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ದಾಟಿ ಎದುರುಗಡೆಯಿಂದ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಸ್‌ನಲ್ಲಿದ್ದ ಕೆಲ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಘಟನೆ ಬಳಿಕ ದೇವನಹಳ್ಳಿ ಸಂಚಾರಿ ಪೊಲೀಸ್ ತಂಡ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದೆ. ನಜ್ಜುಗುಜ್ಜಾದ ಕಾರಿನಲ್ಲಿ ಸಿಲುಕಿದ್ದ ಮೃತದೇಹಗಳನ್ನು ಹೊರತೆಗೆದು ಶವಾಗಾರಕ್ಕೆ ಸಾಗಿಸಲು ಪೊಲೀಸರಿಗೆ ಸಾಕಷ್ಟು ಕಷ್ಟ ಎದುರಾಯಿತು.

ಅಪಘಾತದ ಪರಿಣಾಮ ಹೈದರಾಬಾದ್–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿ ವಾಹನಗಳ ಸಂಚಾರಕ್ಕೆ ತೊಂದರೆ ಎದುರಾಯಿತು. ಅತಿವೇಗವೇ ಅಪಘಾತಕ್ಕೆ ಪ್ರಮುಖ ಕಾರಣವೆಂದು ಪೊಲೀಸರು ಪ್ರಾಥಮಿಕ ವರದಿ ನೀಡಿದ್ದಾರೆ.

ಮೃತದೇಹಗಳನ್ನು ಆಕಾಶ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದ್ದು, ಮೃತಪಟ್ಟವರ ಗುರುತು ಪತ್ತೆಹಚ್ಚುವ ಕಾರ್ಯ ಮುಂದುವರಿದಿದೆ. ಪ್ರಕರಣ ದಾಖಲಿಸಿಕೊಂಡಿರುವ ದೇವನಹಳ್ಳಿ ಸಂಚಾರಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page