ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೊಮ್ಮೆ ಗುಂಡಿನ ದಾಳಿ ನಡೆದಿದೆ. ಉತ್ತರ ಕಾಶ್ಮೀರದ ಬಂಡಿಪೋರಾ ಜಿಲ್ಲೆಯ ಅರಗಾಂ ಪ್ರದೇಶದಲ್ಲಿ ಭಾನುವಾರ ರಾತ್ರಿ ನಡೆದ ಗುಂಡಿನ ದಾಳಿಯಲ್ಲಿ ಅಪರಿಚಿತ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅರಗಾಂ ಪ್ರದೇಶದಲ್ಲಿ ಇಬ್ಬರು ಉಗ್ರರು ಅಡಗಿ ಕುಳಿತಿದ್ದಾರೆ ಎಂಬ ಮಾಹಿತಿ ಪಡೆದ ಭದ್ರತಾ ಪಡೆಗಳು ಅಲ್ಲಿಗೆ ಬಂದು ಗುಂಡಿನ ದಾಳಿ ನಡೆಸಿವೆ. ಈ ಎನ್‌ಕೌಂಟರ್‌ನಲ್ಲಿ ಒಬ್ಬ ಭಯೋತ್ಪಾದಕನನ್ನು ಕೊಲ್ಲಲಾಗಿದೆ ಎಂದು ಹೇಳಲಾಗಿದೆ. ಡ್ರೋನ್ ಸಹಾಯದಿಂದ ಮೃತ ಉಗ್ರನ ದೇಹವನ್ನು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಪರಿಸ್ಥಿತಿ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ದೆಹಲಿಯಲ್ಲಿ ಸಭೆ ನಡೆದ ದಿನವೇ ಈ ಘಟನೆ ನಡೆದಿದೆ.
ಕಾಶ್ಮೀರದಲ್ಲಿ ನಡೆಯುತ್ತಿರುವ ಭಯೋತ್ಪಾದನೆಯ ಘಟನೆಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಅಮಿತ್ ಶಾ ಸಭೆಯಲ್ಲಿ ಅಧಿಕಾರಿಗಳಿಗೆ ಆದೇಶಿಸಿದರು. ಭಯೋತ್ಪಾದಕ ದಾಳಿಯ ಪರಿಸ್ಥಿತಿಯನ್ನು ಪರಿಶೀಲಿಸಲು ರಕ್ಷಣಾ ಸಿಬ್ಬಂದಿ ಮುಖ್ಯಸ್ಥ (ಸಿಡಿಎಸ್) ಅನಿಲ್ ಚೌಹಾಣ್ ಅವರು ಇಂದು (ಸೋಮವಾರ) ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಲಿದ್ದಾರೆ.