ಹಾಸನ: ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಗಂಭೀರವಾಗಿದ್ದು, ರೈತರ ಹಿತವನ್ನು ಕಾಪಾಡಲು ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಸಚಿವ ಎಚ್.ಡಿ. ರೇವಣ್ಣ ಆಗ್ರಹಿಸಿದರು.
ಹಾಸನದಲ್ಲಿ ಇಂದು ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಕೆ.ಎಂ. ಶಿವಲಿಂಗೇಗೌಡ ಅವರ ಬರ ಅಧ್ಯಯನವನ್ನು ಸ್ವಾಗತಿಸಿದರೂ, ಅಧಿಕಾರಿಗಳು ವಾಸ್ತವ ಸ್ಥಿತಿಯನ್ನು ಸರ್ಕಾರಕ್ಕೆ ನಿಖರವಾಗಿ ವರದಿ ಮಾಡಬೇಕು ಎಂದು ಒತ್ತಾಯಿಸಿದರು.
ಜಿಲ್ಲಾಧಿಕಾರಿಗಳು ಕಚೇರಿಯಲ್ಲಿ ಕುಳಿತು ವರದಿ ಸಲ್ಲಿಸುವ ಬದಲು ಸ್ಥಳ ಪರಿಶೀಲನೆ ನಡೆಸಬೇಕು. ಅಧಿಕಾರಿಗಳು ಸತ್ಯಾಂಶ ಮುಚ್ಚಿಟ್ಟರೆ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಬರದಿಂದ ಸಂಕಷ್ಟದಲ್ಲಿರುವ ರೈತರಿಗೆ ನೀರಾವರಿ ನಾಲೆಗಳಲ್ಲಿ ನೀರು ಹರಿಸಬೇಕು. ಕಳೆದ ವರ್ಷದ ಬೆಳೆ ವಿಮೆ ಇನ್ನೂ ರೈತರಿಗೆ ಸಿಕ್ಕಿಲ್ಲ. ಜಿಪಿಎಸ್ ಯಂತ್ರಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲ. ನಿಜವಾಗಿ ಬೆಳೆ ಹಾನಿಯಾಗಿರುವ ಪ್ರದೇಶಗಳಿಗೆ ಮಾತ್ರ ಪರಿಹಾರ ನೀಡಬೇಕು ಎಂದು ಅವರು ಆಗ್ರಹಿಸಿದರು.
