ಮೈಸೂರು: ಬಿಜೆಪಿಯ ಆಡಳಿತಾವಧಿಯಲ್ಲಿ ಬಳ್ಳಾರಿಯ ಸಂಪತ್ತು ಯಾರ ಪಾಲಾಗಿತ್ತು ಮತ್ತು ಅಲ್ಲಿನ ಪರಿಸ್ಥಿತಿ ಹೇಗಿತ್ತು ಎಂಬುದು ಎಲ್ಲರಿಗೂ ತಿಳಿದಿದೆ. ಈಗ ಆರೋಪಿಗಳೇ ಪಾದಯಾತ್ರೆ ಮತ್ತು ಸಮಾವೇಶ ಮಾಡುತ್ತೇವೆ ಎನ್ನುವುದು ಅತ್ಯಂತ ಹಾಸ್ಯಾಸ್ಪದ ಎಂದು ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ. ಮಹದೇವಪ್ಪ ಲೇವಡಿ ಮಾಡಿದ್ದಾರೆ.
ಬಳ್ಳಾರಿ ಘಟನೆಯನ್ನು ಮುಂದಿಟ್ಟುಕೊಂಡು ಬಿಜೆಪಿ ಪಾದಯಾತ್ರೆಗೆ ಸಿದ್ಧತೆ ನಡೆಸುತ್ತಿರುವ ಕುರಿತು ಮೈಸೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂತಹ ರಾಜಕೀಯ ಪ್ರೇರಿತ ಯಾತ್ರೆಗಳಿಂದ ಜನರಿಗೆ ಯಾವುದೇ ಪ್ರಯೋಜನವಿಲ್ಲ ಎಂದು ಕಿಡಿಕಾರಿದರು.
ಖಾಸಗಿ ವಲಯದ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಮೀಸಲಾತಿ ನೀಡುವ ವಿಚಾರಕ್ಕೆ ಕಿರಣ್ ಮಜುಂದಾರ್ ಶಾ ಸೇರಿದಂತೆ ಹಲವರ ವಿರೋಧದ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, “ಕರ್ನಾಟಕದಲ್ಲಿ ನೆಲೆಸಿರುವ ಕಂಪನಿಗಳಲ್ಲಿ ಕನ್ನಡಿಗರಿಗೆ ಮೊದಲ ಆದ್ಯತೆ ಸಿಗಲೇಬೇಕು. ಒಂದು ವೇಳೆ ಕನ್ನಡಿಗರ ಹಿತಾಸಕ್ತಿಯನ್ನು ಕಡೆಗಣಿಸಿದರೆ ಮುಂದೇನು ಮಾಡಬೇಕೋ ಅದನ್ನು ಸರ್ಕಾರ ಮಾಡಲಿದೆ” ಎಂದು ಎಚ್ಚರಿಕೆ ನೀಡಿದರು.
ಕೇಂದ್ರ ಸರ್ಕಾರವು ಉದ್ಯೋಗ ಖಾತ್ರಿ (ನರೇಗಾ) ಯೋಜನೆಗೆ ತಿದ್ದುಪಡಿ ತರುತ್ತಿರುವುದು ಸಂವಿಧಾನ ವಿರೋಧಿ ನಡೆಯಾಗಿದೆ. ಈ ವಿಚಾರದಲ್ಲಿ ಯಾರೇ ಬಂದರೂ ಚರ್ಚೆಗೆ ನಾವು ಸಿದ್ಧರಿದ್ದೇವೆ. ಬಡವರ ಹಕ್ಕುಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷವು ‘ನರೇಗಾ ಬಚಾವೋ’ ಆಂದೋಲನವನ್ನು ಹಮ್ಮಿಕೊಳ್ಳುತ್ತಿದೆ ಎಂದು ಅವರು ಮಾಹಿತಿ ನೀಡಿದರು.
