Home ಬೆಂಗಳೂರು ಮೇಕೆದಾಟು ಯೋಜನೆಯೇ 2 ರಾಜ್ಯಗಳಿಗೆ ಶಾಶ್ವತ ಪರಿಹಾರ ನೀಡಲಿದೆ – ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಮೇಕೆದಾಟು ಯೋಜನೆಯೇ 2 ರಾಜ್ಯಗಳಿಗೆ ಶಾಶ್ವತ ಪರಿಹಾರ ನೀಡಲಿದೆ – ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು : ರಾಜ್ಯದಲ್ಲಿ ಉದ್ಭವಿಸಿರುವ ನೀರಾವರಿ ಹಾಗೂ ಕುಡಿಯುವ ನೀರಿನ ಸಮಸ್ಯೆಗಳಿಗೆ ಮೇಕೆದಾಟು ಯೋಜನೆಯೇ (Mekedatu Project) ಶಾಶ್ವತ ಪರಿಹಾರ ನೀಡಲಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರಿನ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ನಡೆದ ಸರ್ವಪಕ್ಷ ಸಭೆಯ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಈ ಯೋಜನೆಯಿಂದ ಕರ್ನಾಟಕ ಮಾತ್ರವಲ್ಲದೆ ತಮಿಳುನಾಡಿಗೂ ಹೆಚ್ಚಿನ ಲಾಭವಾಗಲಿದೆ ಎಂದರು.

ರಾಜ್ಯದಲ್ಲಿ ಬರಗಾಲ ಘೋಷಣೆ ಮಾಡುವ ಕುರಿತು ಮಾತನಾಡಿದ ಅವರು, ಕೇಂದ್ರ ಸರ್ಕಾರದ ಸ್ಪಷ್ಟ ಮಾರ್ಗಸೂಚಿಗಳ ಅನ್ವಯವೇ ಬರ ಪೀಡಿತ ಪ್ರದೇಶಗಳನ್ನು ನಿರ್ಧರಿಸಬೇಕಾಗುತ್ತದೆ. ಹೀಗಾಗಿ ತಾಲೂಕುಗಳನ್ನು ಸೇರಿಸಲು ಅಥವಾ ಬಿಡಲು ನಮಗೆ ಸ್ವತಂತ್ರ ಅಧಿಕಾರವಿರುವುದಿಲ್ಲ, ಅಲ್ಲದೆ ಬರಗಾಲ ಘೋಷಿಸಲು ಇನ್ನೂ ಸೂಕ್ತ ಸಮಯವಿದೆ ಎಂದು ತಿಳಿಸಿದರು.

ಪ್ರಸ್ತುತ ಪರಿಸ್ಥಿತಿಯಲ್ಲಿ ಕುಡಿಯುವ ನೀರಿನ ಅಭಾವ ಉಂಟಾಗದಂತೆ ತಡೆಯಲು ಕೆರೆಗಳಿಗೆ ನೀರು ಹರಿಸಲು ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ. ಯಾವುದೇ ಕಾರಣಕ್ಕೂ ರಾಜ್ಯದ ಹಿತಾಸಕ್ತಿಯ ವಿಷಯದಲ್ಲಿ ಸರ್ಕಾರ ಹಿಂದೆಟು ಹಾಕುವುದಿಲ್ಲ ಎಂದು ಅವರು ಭರವಸೆ ನೀಡಿದರು.

ಇನ್ನು ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ವಿಸ್ತೃತ ಯೋಜನಾ ವರದಿಯನ್ನು (ಡಿಪಿಆರ್) ಪರಿಷ್ಕರಿಸಿ ಶೀಘ್ರದಲ್ಲೇ ಕೇಂದ್ರಕ್ಕೆ ಕಳುಹಿಸಿಕೊಡಲಾಗುವುದು. ಅಗತ್ಯ ಬಿದ್ದಾಗ ತಮಿಳುನಾಡು ಮುಖ್ಯಮಂತ್ರಿಗಳೊಂದಿಗೂ ಸಭೆ ನಡೆಸಿ ಚರ್ಚಿಸಲಾಗುವುದು ಎಂದು ಹೇಳಿದರು. ರಾಜ್ಯದ ರೈತರು ಯಾವುದೇ ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳಬಾರದು ಎಂದು ಮನವಿ ಮಾಡಿದ ಅವರು, ಸರ್ವಪಕ್ಷ ಸಭೆಯಲ್ಲಿ ಭಾಗವಹಿಸಿ ರಾಜ್ಯದ ಹಿತಕ್ಕೆ ಕೈಜೋಡಿಸಿದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಸೇರಿದಂತೆ ಎಲ್ಲಾ ಪಕ್ಷಗಳ ನಾಯಕರಿಗೆ ಕೃತಜ್ಞತೆ ಸಲ್ಲಿಸಿದರು.

You cannot copy content of this page

Exit mobile version