2ಎ ಮೀಸಲಾತಿಗಾಗಿ ಆಗ್ರಹಿಸಿ ಪಂಚಮಸಾಲಿ ಸಮುದಾಯದವರು ಪ್ರತಿಭಟನೆ ನಡೆಸುತ್ತಿದ್ದು, ಈಗ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಪ್ರತಿಭಟನಾಕಾರರು ಹಲವು ಕಡೆ ಸಾರ್ವಜನಿಕ ಮತ್ತು ಸರ್ಕಾರಿ ಆಸ್ತಿಪಾಸ್ತಿಗೆ ಹಾನಿ ಮಾಡಿದ್ದು ಇದನ್ನು ನಿಯಂತ್ರಿಸಲು ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ.
ಬೆಳಗಾವಿಯ ಹಿರೇಬಾಗೇವಾಡಿಯಲ್ಲಿ ಪ್ರತಿಭಟನೆ ತೀವ್ರಗೊಂಡಿದ್ದು, ನಿಷೇಧವಿದ್ದರೂ ಟ್ರ್ಯಾಕ್ಟರ್ ಮೂಲಕ ಸುವರ್ಣಸೌಧದತ್ತ ತೆರಳುತ್ತಿದ್ದ ವೇಳೆ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಐದು ಸಾವಿರ ಟ್ರ್ಯಾಕ್ಟರ್ ಮೂಲಕ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಪಂಚಮಸಾಲಿ ಸಮುದಾಯದ ಹೋರಾಟಗಾರರು ನಿರ್ಧರಿಸಿದ್ದರು. ಆದರೆ ಪಂಚಮಸಾಲಿ ಮುಖಂಡರಿಗೆ ಟ್ರ್ಯಾಕ್ಟರ್ ರ್ಯಾಲಿಗೆ ಅವಕಾಶವಿಲ್ಲ, ಶಾಂತಿಯುತ ಪ್ರತಿಭಟನೆಗೆ ಮಾತ್ರ ಅವಕಾಶ ನೀಡುವುದಾಗಿ ಬೆಳಗಾವಿ ಜಿಲ್ಲಾಡಳಿತ ಸ್ಪಷ್ಟವಾಗಿ ತಿಳಿಸಿತ್ತು.
ನಿಷೇಧವಿದ್ದರೂ ಪಂಚಮಸಾಲಿ ಮುಖಂಡರು ಪ್ರತಿಭಟನೆ ವೇಳೆ ಟ್ರ್ಯಾಕ್ಟರ್ ಮೂಲಕ ಸುವರ್ಣಸೌಧದತ್ತ ಬರಲು ಯತ್ನಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ಹಿರೇಬಾಗೆವಡಿ ಗ್ರಾಮದಲ್ಲಿ ಟ್ರ್ಯಾಕ್ಟರ್ ಮೂಲಕ ಬರಲು ಮುಂದಾಗಿದ್ದ ಪ್ರತಿಭಟನಾಕಾರರನ್ನು ಪೊಲಿಸರು ತಡೆದು ವಶಕ್ಕೆ ಪಡೆದಿದ್ದಾರೆ.