Home ಹವಾಮಾನ High Alert : ಇನ್ನೂ ಮೂರು ದಿನ ಮುಂದುವರೆಯಲಿರುವ ಮಳೆ

High Alert : ಇನ್ನೂ ಮೂರು ದಿನ ಮುಂದುವರೆಯಲಿರುವ ಮಳೆ

0

ಬೆಂಗಳೂರಿನಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಬೆಂಗಳೂರಿಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಅಷ್ಟೇ ಅಲ್ಲದೆ ಇಂದು ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಸಕಲೇಶಪುರ, ಉತ್ತರ ಕನ್ನಡ, ಕಾಸರಗೋಡು, ಮೈಸೂರು ಸೇರಿದಂತೆ ಕರ್ನಾಟಕದ ಅನೇಕ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

ಹಳದಿ ಅಲರ್ಟ್ ಘೋಷಣೆ ಮಾಡಿದ ಹಲವು ಕಡೆಗಳಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಬೆಂಗಳೂರು ನಗರದ ಎಲ್ಲಾ ಅಂಗನವಾಡಿ ಕೇಂದ್ರಗಳು, ಖಾಸಗಿ/ಅನುದಾನಿತ ಪ್ರಾಥಮಿಕ ಶಾಲೆಗಳು, ಪ್ರೌಢಶಾಲೆಗಳು ಮತ್ತು ಕಾಲೇಜುಗಳಿಗೆ ಬುಧವಾರ ರಜೆ ನೀಡಲಾಗಿದೆ ಎಂದು ಸರ್ಕಾರಿ ಆದೇಶದಲ್ಲಿ ತಿಳಿಸಲಾಗಿದೆ.

ಐಟಿ ಕಂಪನಿಗಳು ತಮ್ಮ ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡಲು ಅವಕಾಶ ನೀಡುವಂತೆ ಸರ್ಕಾರ ಸೂಚಿಸಿದೆ. ಹೀಗಾಗಿ ಇನೋವೇಷನ್ & ಟೆಕ್ನಾಲಜಿ ಸೊಸೈಟಿ ಸುತ್ತೋಲೆ ಹೊರಡಿಸಿದ್ದು, ಮಳೆಯಿಂದ ರಸ್ತೆಗಳಲ್ಲಿ ನೀರು ತಂಬಿದ್ದು, ಟ್ರಾಫಿಕ್ ಜಾಮ್​ ಹಿನ್ನೆಲೆಯಲ್ಲಿ ಕಚೇರಿಗೆ ತೆರಳಲು ಉದ್ಯೋಗಿಗಳಿಗೆ ಕಷ್ಟವಾಗುತ್ತಿದೆ. ಹೀಗಾಗಿ ವರ್ಕ್ ಫ್ರಂ ಹೋಂಗೆ ಅನುಮತಿ ನೀಡುವಂತೆ ಐಟಿ ಕಂಪನಿಗಳಿಗೆ ಸೂಚಿಸಿದೆ.

ಕರಾವಳಿಯ ಜಿಲ್ಲೆಗಳಲ್ಲಿ ಭಾರೀ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಭಾರೀ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಕೋಲಾರ, ಮಂಡ್ಯ, ಮೈಸೂರು ಮತ್ತು ರಾಮನಗರ ಜಿಲ್ಲೆಗಳಲ್ಲಿ ಪ್ರತ್ಯೇಕ ಭಾರೀ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಕರ್ನಾಟಕದ ಉಳಿದ ಜಿಲ್ಲೆಗಳಲ್ಲಿ ಹೆಚ್ಚಿನ ಸ್ಥಳಗಳಲ್ಲಿ ಹಗುರಾಗಿ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಹೆಚ್ಚಿನ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಹವಮಾನ ಇಲಾಖೆ ತಿಳಿಸಿದ ಮಾಹಿತಿಯಂತೆ ಮಳೆ ಇನ್ನೂ 3 ದಿನ ಮುಂದುವರೆಯುವುದು.

You cannot copy content of this page

Exit mobile version