Thursday, June 13, 2024

ಸತ್ಯ | ನ್ಯಾಯ |ಧರ್ಮ

ಧಾರ್ಮಿಕ ದತ್ತಿ ಇಲಾಖೆಯ ದೇವಾಲಯಗಳಿಗೆ ವಿಶೇಷ ಆದೇಶ ಹೊರಡಿಸಿದ ರಾಜ್ಯ ಸರ್ಕಾರ ; ಏನದು ಹೊಸ ಆದೇಶ?

ಕರ್ನಾಟಕ ಸರ್ಕಾರದ ಧಾರ್ಮಿಕ ದತ್ತಿ ಇಲಾಖೆಗೆ ಒಳಪಡುವ ಎಲ್ಲಾ ದೇವಸ್ಥಾನಗಳಲ್ಲಿ 65 ವರ್ಷ ಮೇಲ್ಪಡುವ ಎಲ್ಲಾ ಹಿರಿಯ ನಾಗರೀಕರಿಗೂ ನೇರ ದೇವರ ದರ್ಶನಕ್ಕೆ ಅವಕಾಶ ಕೊಡಬೇಕು ಎಂದು ಕರ್ನಾಟಕ ರಾಜ್ಯ ಸರ್ಕಾರ ವಿಶೇಷ ಆದೇಶ ಹೊರಡಿಸಿದೆ. ಕೆಲವು ಪ್ರಮುಖ ಅಂಶಗಳನ್ನು ಒಳಗೊಂಡಂತೆ ಹೊರಡಿಸಿದ ಆದೇಶ ಪತ್ರದಲ್ಲಿ ಈ ವಿಶೇಷ ಅಂಶವೂ ಒಳಗೊಂಡಿದೆ.

ಇತ್ತೀಚೆಗೆ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಯಾದ ಶಕ್ತಿ ಯೋಜನೆಯಲ್ಲಿ ಕರ್ನಾಟಕದ ಮಹಿಳೆಯರು, ವಯಸ್ಕರು ಹೆಚ್ಚಿನ ಸಂಖ್ಯೆಯಲ್ಲಿ ಧಾರ್ಮಿಕ ಕೇಂದ್ರಗಳಿಗೆ ಹೋಗುತ್ತಿರುವುದು ಕಂಡುಬಂದಿದೆ. ಕರ್ನಾಟಕದ ಧಾರ್ಮಿಕ ಕೇಂದ್ರಗಳಿಗೆ ಪ್ರವಾಸಿಗರು, ಭಕ್ತಾದಿಗಳ ಸಂಖ್ಯೆ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಈ ವಿಶೇಷ ಆದೇಶವನ್ನು ಸರ್ಕಾರ ಹೊರಡಿಸಿದೆ.

65 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರಿಗೆ ಸರತಿ ಸಾಲಿನಲ್ಲಿ ನಿಲ್ಲಲು ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ವಯಸ್ಸಿನ ಆಧಾರದಲ್ಲಿ ಸರತಿ ಸಾಲಿನಲ್ಲಿ ನಿಲ್ಲದೇ ನೇರವಾಗಿ ದೇವರ ದರ್ಶನಕ್ಕೆ ಅನುವು ಮಾಡಿಕೊಡಬೇಕು ಎಂದು ಹೊರಡಿಸಿದ ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಹಿರಿಯ ನಾಗರಿಕರು ಅವರ ವಯಸ್ಸಿನ ದಾಖಲೆಯಾದ ಆಧಾರ್ ಕಾರ್ಡ್, ಓಟರ್ ಐಡಿಯಂತಹ ದಾಖಲೆಗಳನ್ನು ತೋರಿಸಿ ನೇರ ದೇವರ ದರ್ಶನಕ್ಕೆ ಹೋಗಬಹುದು. ಹಾಗೆಯೇ ದೇವಾಲಯಗಳಲ್ಲಿ ಹೆಚ್ಚಿನ ಸ್ಥಳಾವಕಾಶ ಇದ್ದಲ್ಲಿ ಹಿರಿಯ ನಾಗರಿಕರಿಗೆ ಪ್ರತ್ಯೇಕ ಸ್ಥಳ ಕಾಯ್ದಿರಿಸಲೂ ಸೂಚಿಸಿದೆ.

ದೇವಾಲಯಗಳಲ್ಲಿ ಹಿರಿಯ ನಾಗರೀಕರಿಗೆ ಸಹಾಯ ಕೇಂದ್ರಗಳನ್ನು ಸ್ಥಾಪಿಸಿ, ಅವರೊಂದಿಗೆ ಸಹಕರಿಸಿ ಸೂಕ್ತ ವ್ಯವಸ್ಥೆಯನ್ನು ಕಲ್ಪಿಸಬೇಕು. ಸದರಿ ಸಹಾಯ ಕೇಂದ್ರಕ್ಕೆ ಜವಾಬ್ದಾರಿಯುತ ಸಿಬ್ಬಂದಿಗಳನ್ನು ನೇಮಿಸಿ, ಹಿರಿಯ ನಾಗರೀಕರಿಗೆ ತ್ವರಿತ ದರ್ಶನ ವ್ಯವಸ್ಥೆ ಕಲ್ಪಿಸಲು ಧಾರ್ಮಿಕ ದತ್ತಿ ಇಲಾಖೆಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳಿಗೆ ಆದೇಶ ಹೊರಡಿಸಿದೆ.

Related Articles

ಇತ್ತೀಚಿನ ಸುದ್ದಿಗಳು