ಹಾಸನ : ಕಾರ್ಮಿಕರಿಗೆ ನಿಗದಿಪಡಿಸಿರುವ ಕನಿಷ್ಠ ವೇತನದ ಅಧಿಸೂಚನೆಯನ್ನು ರಾಜ್ಯ ಸರ್ಕಾರ ತಕ್ಷಣ ಜಾರಿಗೊಳಿಸಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು ಎಂದು ಸಿಐಟಿಯು ಜಿಲ್ಲಾಧ್ಯಕ್ಷ ಧರ್ಮೇಶ್ ಎಚ್ಚರಿಸಿದರು.
ನಗರದಲ್ಲಿ ಸಿಐಟಿಯು, ಕೆಪಿಆರ್‌ಎಸ್ ಹಾಗೂ ಡಿಎಚ್‌ಎಸ್ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಬೃಹತ್ ‘ಜನಾಕ್ರೋಶ ಸಭೆ’ಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಕಳೆದ 10-15 ವರ್ಷಗಳಲ್ಲಿ ದೇಶದ ಬಂಡವಾಳಶಾಹಿಗಳು ಹಾಗೂ ಕಾರ್ಪೊರೇಟ್ ಕಂಪನಿಗಳ ಸಂಪತ್ತು ನೂರಾರು ಪಟ್ಟು ಹೆಚ್ಚಾಗಿದೆ. ಆದರೆ ಶ್ರಮಿಕ ವರ್ಗದ ಆದಾಯ ಕುಸಿದಿದ್ದು, ಬೆಲೆ ಏರಿಕೆಯಿಂದ ಜೀವನ ನಿರ್ವಹಣೆ ದುಸ್ತರವಾಗಿದೆ. ಕಾರ್ಮಿಕ ಸಂಘಟನೆಗಳ ಸುದೀರ್ಘ ಹೋರಾಟದ ಫಲವಾಗಿ ಮೇ 22ರಂದು ಸರ್ಕಾರ ಕನಿಷ್ಠ ವೇತನದ ಅಧಿಸೂಚನೆ ಹೊರಡಿಸಿತ್ತು. ಆದರೆ ಖಾಸಗಿ ಮಾಲೀಕರ ಒತ್ತಡಕ್ಕೆ ಮಣಿದು ಅದನ್ನು ಮೌಖಿಕವಾಗಿ ತಡೆಹಿಡಿಯಲಾಗಿದೆ ಎಂದು ಆರೋಪಿಸಿದರು.
ಗ್ರಾಮ ಪಂಚಾಯಿತಿ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಹಾಗೂ ಗುತ್ತಿಗೆ ಕಾರ್ಮಿಕರಿಗೆ ಹಲವು ತಿಂಗಳಿಂದ ವೇತನ ಪಾವತಿಯಾಗಿಲ್ಲ. ಸರ್ಕಾರ ಹಾಗೂ ಆಡಳಿತ ಯಂತ್ರ ಕಾರ್ಮಿಕರ ಸಮಸ್ಯೆಗಳನ್ನು ನಿರ್ಲಕ್ಷಿಸುತ್ತಿದೆ ಎಂದು ಧರ್ಮೇಶ್ ದೂರಿದರು.
ಹೋರಾಟದ ರೂಪುರೇಷೆ
ಕನಿಷ್ಠ ವೇತನ ಜಾರಿಗೊಳಿಸದ ಸರ್ಕಾರದ ಕ್ರಮವನ್ನು ವಿರೋಧಿಸಿ ರಾಜ್ಯದ ಪ್ರತಿಯೊಬ್ಬ ಕಾರ್ಮಿಕರೂ ಕಾರ್ಮಿಕ ಇಲಾಖೆಗೆ ಸಾಮೂಹಿಕವಾಗಿ ‘ಕ್ಲೈಮ್ ಅರ್ಜಿ’ ಸಲ್ಲಿಸಲಿದ್ದಾರೆ. ಆ.18ರಂದು ಗ್ರಾಮ ಪಂಚಾಯಿತಿ ನೌಕರರ ಬಾಕಿ ವೇತನ ಬಿಡುಗಡೆಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯಿತಿಗಳಿಗೆ ಏಕಕಾಲದಲ್ಲಿ ಮುತ್ತಿಗೆ ಹಾಕಲಾಗುವುದು.
ಸರ್ಕಾರದ ವಿಳಂಬ ನೀತಿ ಮುಂದುವರಿದರೆ ಸೆ.8ರಂದು ‘ಬೆಂಗಳೂರು ಚಲೋ’ ಹಮ್ಮಿಕೊಳ್ಳಲಾಗುವುದು. ರಾಜ್ಯದ ವಿವಿಧೆಡೆಯಿಂದ ಲಕ್ಷಾಂತರ ಕಾರ್ಮಿಕರು ಬೆಂಗಳೂರಿಗೆ ಆಗಮಿಸಿ ಅಹೋರಾತ್ರಿ ಧರಣಿ ಹಾಗೂ ರಸ್ತೆ ತಡೆ ನಡೆಸಲಿದ್ದಾರೆ ಎಂದು ಅವರು ಘೋಷಿಸಿದರು.
