ನವದೆಹಲಿ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಮದ್ಯ ಹಗರಣದಲ್ಲಿ ಸಿಲುಕಿಸಲು ಕೇಸರಿ ಪಕ್ಷದ ನಾಯಕರು ಭಾರಿ ಷಡ್ಯಂತ್ರ ನಡೆಸಿದ್ದಾರೆ ಎಂದು ಪ್ರಸ್ತುತ ಜೈಲಿನಲ್ಲಿರುವ ಎಎಪಿ ನಾಯಕ ಸಂಜಯ್ ಸಿಂಗ್ ಆರೋಪಿಸಿದ್ದಾರೆ. ಅಬಕಾರಿ ನೀತಿ ಪ್ರಕರಣದಲ್ಲಿ ಆರೋಪಿಯಾಗಿರುವ ಸಂಜಯ್ ಸಿಂಗ್ ಅವರನ್ನು ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯಕ್ಕೆ ಹಾಜರುಪಡಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಈ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ. ಆಪ್ ಈ ವಿಡಿಯೋವನ್ನು ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದೆ.
ಕೇಜ್ರಿವಾಲ್ ಅವರನ್ನು ಸಿಲುಕಿಸಲು ದೊಡ್ಡ ಪಿತೂರಿ ನಡೆಯುತ್ತಿದೆ ಎಂದು ಸಿಂಗ್ ಈ ವಿಡಿಯೋದಲ್ಲಿ ಹೇಳಿದ್ದಾರೆ. ಕಳೆದ ತಿಂಗಳು, ಮದ್ಯ ಹಗರಣಕ್ಕೆ ಸಂಬಂಧಿಸಿದಂತೆ ಸುದೀರ್ಘ ವಿಚಾರಣೆಯ ನಂತರ ಇಡಿ ಸಂಜಯ್ ಸಿಂಗ್ ಅವರನ್ನು ಅವರ ನಿವಾಸದಲ್ಲಿ ಬಂಧಿಸಿತ್ತು.
ಮದ್ಯದ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗೆಂದು ಇಡಿ ಇತ್ತೀಚೆಗೆ ಕೇಜ್ರಿವಾಲ್‌ಗೆ ಸಮನ್ಸ್ ನೀಡಿದ ಹಿನ್ನೆಲೆಯಲ್ಲಿ ಸಂಜಯ್ ಸಿಂಗ್ ಅವರ ಹೇಳಿಕೆಗಳು ಮಹತ್ವ ಪಡೆದಿವೆ. ಬಿಜೆಪಿಯ ಸೋಗಿನಲ್ಲಿ ಇಡಿ ತಮಗೆ ಸಮನ್ಸ್ ನೀಡಿದೆ ಎಂದು ಕೇಜ್ರಿವಾಲ್ ಆರೋಪಿಸಿದ್ದಾರೆ. ಇದೇ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ ಅವರ ಸಹೋದ್ಯೋಗಿಗಳಾದ ಮನೀಶ್ ಸಿಸೋಡಿಯಾ ಮತ್ತು ಸಂಜಯ್ ಸಿಂಗ್ ಇಡಿ ಬಂಧನದಲ್ಲಿದ್ದಾರೆ.