ಬೆಂಗಳೂರು: ದೈಹಿಕವಾಗಿ ಚಟುವಟಿಕೆ ಇಲ್ಲದೆ ಖಾಲಿ ಕುಳಿತುಕೊಂಡರೆ ಅನಾರೋಗ್ಯ ಕಾಡುತ್ತದೆ. ಆರೋಗ್ಯವಾಗಿರಬೇಕಾದರೆ ದೈಹಿಕ ಮತ್ತು ಮಾನಸಿಕ ಚಟುವಟಿಕೆ ಅಗತ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಸಚಿವಾಲಯದ ಅಧಿಕಾರಿ ಮತ್ತು ಸಿಬ್ಬಂದಿಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣಾ ಮತ್ತು ಚಿಕಿತ್ಸಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ಜೀವನಶೈಲಿ ಮತ್ತು ಆಹಾರ ಪದ್ಧತಿ ಮನುಷ್ಯನ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ. ರಾಜ್ಯ ಸರ್ಕಾರ ಎಲ್ಲಾ ಜನ ವರ್ಗಕ್ಕೆ ಆರೋಗ್ಯ ಮತ್ತು ಅಗತ್ಯ ಚಿಕಿತ್ಸೆಗೆ ಒದಗಿಸಲು ಕಾರ್ಯಕ್ರಮಗಳನ್ನು ನಿರಂತರವಾಗಿ ರೂಪಿಸಿ, ಜಾರಿ ಮಾಡುತ್ತಿದ್ದೇವೆ ಎಂದರು.
ಕ್ಯಾನ್ಸರ್ ನಂತಹ ಮಾರಕ ರೋಗವನ್ನೂ ಗುಣಪಡಿಸುವುದು ಸಾಧ್ಯವಿದೆ. ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುತ್ತಿದ್ದರೆ ದೀರ್ಘಕಾಲ ಆರೋಗ್ಯ ಕಾಪಾಡಿಕೊಳ್ಳುವುದು ಸಾಧ್ಯವಿದೆ ಎಂದರು.
ಹಿಂದಿನವರ ಆರೋಗ್ಯ ಪದ್ಧತಿ ಮತ್ತು ಶ್ರಮಾಧಾರಿತ ಜೀವನ ಶೈಲಿ ಅವರನ್ನು ಗಟ್ಟಿಮುಟ್ಟಾಗಿ ಸದೃಡವಾಗಿ ಇಟ್ಟಿತ್ತು ಎಂದರು.
ಇಂಥಾ ಆರೋಗ್ಯ ತಪಾಸಣಾ ಶಿಬಿರಗಳು ಮೇಲಿಂದ ಮೇಲೆ ಆಗಬೇಕು. ರಾಜ್ಯದ ಮೂಲೆ ಮೂಲೆಗಳಲ್ಲೂ ನಡೆಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ತುಂಬಾ ವಯಸ್ಸಾದ ಮೇಲೆ ಬರುವ ಆರೋಗ್ಯ ಸಮಸ್ಯೆಗಳು ಬರದಂತೆ ವಯಸ್ಸಿದ್ದಾಗಲೇ ಪ್ರಯತ್ನಿಸಿ ಎಂದು ಕರೆ ನೀಡಿದರು.
ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಎಚ್.ಎಂ.ರೇವಣ್ಣ, ಮುಖ್ಯ ಸಚೇತಕರಾದ ಅಶೋಕ್ ಪಟ್ಟಣ್ , ಅಪರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಉಪಸ್ಥಿತರಿದ್ದರು.