ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಭಾರತಿಪುರ ಕ್ರಾಸ್ ಬಳಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ.
ಅಪಘಾತದಲ್ಲಿ ರಿಯಾಜ್ ಅಹಮದ್ ಮತ್ತು ಫಾತಿಮಾ ಸೇರಿದಂತೆ ಕಾರಿನಲ್ಲಿದ್ದ ಮಗು, ಚಾಲಕ ಹಾಗೂ ಪಕ್ಕದ ಸೀಟಿನಲ್ಲಿದ್ದ ಮಹಿಳೆ ಸಾವನ್ನಪ್ಪಿದ್ದಾರೆ. ಕಾರಿನಲ್ಲಿದ್ದ ಉಳಿದ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತರು ಹಾಗೂ ಗಾಯಾಳುಗಳು ಚನ್ನಗಿರಿಯಲ್ಲಿ ಮದುವೆ ಕಾರ್ಯಕ್ರಮ ಮುಗಿಸಿಕೊಂಡು ಕಿಗ್ಗಾಕ್ಕೆ ವಾಪಸ್ ಆಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಮಂಗಳೂರಿನಿಂದ ಮಂತ್ರಾಲಯಕ್ಕೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್, ಚೆನ್ನಗಿರಿಯಿಂದ ಶೃಂಗೇರಿ ಕಡೆಗೆ ಸಾಗುತ್ತಿದ್ದ ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದಿದೆ.
ಅಪಘಾತದ ತೀವ್ರತೆಗೆ ಕಾರು ಸಂಪೂರ್ಣವಾಗಿ ಜಖಂಗೊಂಡಿದ್ದು, ಬಸ್‌ನ ಮುಂಭಾಗಕ್ಕೂ ಹಾನಿಯಾಗಿದೆ. ಮಾಹಿತಿ ಪಡೆದ ತೀರ್ಥಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
