ಶಿವಮೊಗ್ಗ: ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ಘಾಟ್‌ನಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ವೇಳೆ ಗುಡ್ಡ ಕುಸಿದು ಭೀಕರ ದುರಂತ ಸಂಭವಿಸಿದ್ದು, ಮೂವರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಮೃತರನ್ನು ರಾಘವೇಂದ್ರ (37), ರಾಜು (30) ಮತ್ತು ಶಬ್ಬೀರ್ (40) ಎಂದು ಗುರುತಿಸಲಾಗಿದೆ.
ಕಾಮಗಾರಿ ನಡೆಯುತ್ತಿದ್ದ ವೇಳೆ ಅಚಾನಕ್ ಗುಡ್ಡ ಕುಸಿದ ಪರಿಣಾಮ, ಸ್ಥಳದಲ್ಲೇ ಮೂವರು ಕಾರ್ಮಿಕರು ಮಣ್ಣಿನಡಿಯಲ್ಲಿ ಸಿಲುಕಿ ಸಾವನ್ನಪ್ಪಿದರು. ಘಟನೆಯಲ್ಲಿ ಸುಮಂತ ಮತ್ತು ಪರಮೇಶ್ ಸೇರಿದಂತೆ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ನಗರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಯ ನಂತರ ಸ್ಥಳಕ್ಕೆ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿ ರಕ್ಷಣಾ ಕಾರ್ಯಾಚರಣೆ ಕೈಗೊಂಡಿದ್ದಾರೆ. ರಾತ್ರಿ ಸಮಯವಾಗಿರುವುದರಿಂದ ಕಾರ್ಯಾಚರಣೆಗೆ ಕೆಲ ಅಡ್ಡಿಗಳು ಎದುರಾದರೂ ಶೋಧ ಕಾರ್ಯ ಮುಂದುವರಿದಿದೆ. ಹೊಸನಗರ ತಹಶೀಲ್ದಾರ್ ಭರತ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ದುರ್ಘಟನೆಯ ಪರಿಣಾಮವಾಗಿ ಕುಂದಾಪುರ-ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿದ್ದು, ವಾಹನ ಸಂಚಾರಕ್ಕೆ ತಾತ್ಕಾಲಿಕ ವ್ಯತ್ಯಯ ಉಂಟಾಗಿದೆ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
