ಲಕ್ನೋ: ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಏಕಾಏಕಿ ಬೆಂಕಿ ಹೊತ್ತಿಕೊಂಡ ಪರಿಣಾಮ 9 ಮಂದಿ ಸಜೀವ ದಹನವಾಗಿರುವ ಘಟನೆ ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದ ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ ನಡೆದಿದೆ. ಘಟನೆ ವೇಳೆ ಸ್ಲೀಪರ್ ಬಸ್‌ನಲ್ಲಿಸುಮಾರು 40 ರಿಂದ 50 ಮಂದಿ ಪ್ರಯಾಣಿಕರು ಇದ್ದರು. ಏಕಾಏಕಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆ ಪ್ರಯಾಣಿಕರಲ್ಲಿ ಆತಂಕ ಸೃಷ್ಟಿಯಾಗಿದ್ದು, ಬೆಂಕಿ ವೇಗವಾಗಿ ಇಡೀ ಬಸ್‌ಗೆ ಆವರಿಸಿಕೊಂಡಿದೆ. ಪ್ರಾಣ ಉಳಿಸಿಕೊಳ್ಳಲು ಕೆಲವರು ಚಲಿಸುತ್ತಿದ್ದ ಬಸ್‌ನಿಂದ ಹೊರಕ್ಕೆ ಜಿಗಿದಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿದ್ದು, ಬೆಂಕಿ ನಿಯಂತ್ರಣಕ್ಕೆ ತಂದಿದ್ದಾರೆ. ಸದ್ಯ ಬಸ್‌ನಲ್ಲಿ ಕೂಲ್‌ಡೌನ್ ಕಾರ್ಯಾಚರಣೆ ನಡೆಸಲಾಗುತ್ತಿದೆ. ಕೂಲ್‌ಡೌನ್ ಕಾರ್ಯಾಚರಣೆ ಪೂರ್ಣಗೊಂಡ ಬಳಿಕವಷ್ಟೇ ಬಸ್‌ನೊಳಗೆ ಪರಿಶೀಲನೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಬಸ್‌ನೊಳಗೆ ಇನ್ನೂ ಕೆಲವರು ಸಿಲುಕಿರುವ ಸಾಧ್ಯತೆಯನ್ನೂ ಪೊಲೀಸರು ವ್ಯಕ್ತಪಡಿಸಿದ್ದಾರೆ.
ಘಟನೆ ಕುರಿತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಗಮನ ಹರಿಸಿದ್ದು, ಮೃತಪಟ್ಟವರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ. ಗಾಯಗೊಂಡವರಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ಒದಗಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
