ಶ್ರೀನಗರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಸೋಮವಾರ ಬಸ್ ಕಂದಕಕ್ಕೆ ಬಿದ್ದ ಪರಿಣಾಮ ಸುಮಾರು 15 ಮಂದಿ ಮೃತಪಟ್ಟಿರುವ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ರಾಮ್‌ನಗರದಿಂದ ಉಧಂಪುರಕ್ಕೆ ತೆರಳುತ್ತಿದ್ದ ಬಸ್, ಸೋಮವಾರ ಬೆಳಿಗ್ಗೆ 10 ಗಂಟೆ ಸುಮಾರಿಗೆ ಜಾಲೋ ಎಂಬ ಪ್ರದೇಶದಲ್ಲಿ ಈ ದುರ್ಘಟನೆ ಸಂಭವಿಸಿದೆ. ಬೆಟ್ಟದ ತಿರುವಿನಲ್ಲಿ ದಾರಿ ಕಾಣದ ಕಾರಣ ಚಾಲಕನ ನಿಯಂತ್ರಣ ತಪ್ಪಿ ಬಸ್ ಕಂದಕಕ್ಕೆ ಉರುಳಿದೆ ಎಂದು ಉಧಂಪುರ ಡಿಐಜಿ ಶಿವಕುಮಾರ್ ಶರ್ಮಾ ತಿಳಿಸಿದ್ದಾರೆ.
ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಈ ದುರ್ಘಟನೆಯಲ್ಲಿ 15 ಮಂದಿ ಮೃತಪಟ್ಟಿದ್ದು, ಸುಮಾರು 20 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಘಟನೆಗೆ ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ತೀವ್ರ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿರುವ ಅವರು, ಸಂತ್ರಸ್ತ ಕುಟುಂಬಗಳಿಗೆ ಸರ್ಕಾರದಿಂದ ಎಲ್ಲ ರೀತಿಯ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ. ಉಧಂಪುರ ಬಸ್ ಅಪಘಾತವು ಅತ್ಯಂತ ನೋವಿನ ಸಂಗತಿಯಾಗಿದ್ದು, ಮೃತರಿಗೆ ಗೌರವ ಸಲ್ಲಿಸುವುದಾಗಿ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ‘ಎಕ್ಸ್’ (ಟ್ವಿಟರ್)ನಲ್ಲಿ ಪೋಸ್ಟ್ ಮಾಡಿದ್ದಾರೆ.
