ದೆಹಲಿ: 2020ರ ದೆಹಲಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರಿಗೆ ಸುಪ್ರೀಂ ಕೋರ್ಟ್ ಸೋಮವಾರ ನೋಟಿಸ್ ಜಾರಿ ಮಾಡಿದೆ.
ಈ ಪ್ರಕರಣದ ಆರೋಪಿಗಳಾದ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್, ಗುಲ್ಫಿಶಾ ಫಾತಿಮಾ, ಮೀರನ್ ಹೈದರ್ ಮತ್ತು ಶಿಫಾ ಉರ್ ರೆಹಮಾನ್ ಸಲ್ಲಿಸಿದ್ದ ಜಾಮೀನು ಅರ್ಜಿಗೆ ಪ್ರತಿಕ್ರಿಯಿಸುವಂತೆ ನ್ಯಾಯಾಲಯವು ದೆಹಲಿ ಪೊಲೀಸರಿಗೆ ಸೂಚನೆ ನೀಡಿದೆ.
ನ್ಯಾಯಮೂರ್ತಿಗಳಾದ ಅರವಿಂದ್ ಕುಮಾರ್ ಮತ್ತು ಎನ್. ವಿ. ಅಂಜಾರಿಯಾ ಅವರನ್ನೊಳಗೊಂಡ ದ್ವಿಸದಸ್ಯ ಪೀಠವು ಮುಂದಿನ ವಿಚಾರಣೆಯನ್ನು ಅಕ್ಟೋಬರ್ 7ಕ್ಕೆ ಮುಂದೂಡಿದೆ.
ಅರ್ಜಿದಾರರ ಪರವಾಗಿ ಹಿರಿಯ ವಕೀಲರಾದ ಕಪಿಲ್ ಸಿಬಲ್ ಮತ್ತು ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಿದರು. ವಿಚಾರಣೆಗೂ ಮುನ್ನವೇ ಆರೋಪಿಗಳು ಐದು ವರ್ಷಗಳ ಕಾಲ ಜೈಲು ಶಿಕ್ಷೆ ಅನುಭವಿಸಿದ್ದಾರೆ ಎಂದು ಅವರು ವಾದಿಸಿದರು.
ಸೆಪ್ಟೆಂಬರ್ 2 ರಂದು ದೆಹಲಿ ಹೈಕೋರ್ಟ್ ಈ ಆರೋಪಿಗಳ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ಇದರ ನಂತರ, ಖಾಲಿದ್ ಸೇರಿದಂತೆ ಇತರರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು.