ಸೀತಾಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯಲ್ಲಿ ಮನಕಲಕುವ ಘಟನೆಯೊಂದು ನಡೆದಿದ್ದು, 10 ವರ್ಷದ ಪುಟ್ಟ ಮಗಳ ಕಣ್ಣೆದುರೇ 35 ವರ್ಷದ ದಲಿತ ವ್ಯಕ್ತಿಯೊಬ್ಬರನ್ನು ದುಷ್ಕರ್ಮಿಗಳ ಗುಂಪೊಂದು ಮಾರಣಾಂತಿಕವಾಗಿ ಥಳಿಸಿ ಹತ್ಯೆ ಮಾಡಿದೆ. ಗುರುವಾರ ಸಂಜೆ ರಾಷ್ಟ್ರೀಯ ಹೆದ್ದಾರಿಯ ಸಮೀಪ ಈ ಭೀಕರ ಕೃತ್ಯ ನಡೆದಿದ್ದು, ಎರಡು ಕುಟುಂಬಗಳ ನಡುವಿನ ಹಳೆಯ ದ್ವೇಷವೇ ಕೊಲೆಗೆ ಪ್ರಾಥಮಿಕ ಕಾರಣವೆಂದು ಪೊಲೀಸರು ತಿಳಿಸಿದ್ದಾರೆ.
ಮೃತರನ್ನು ಮನೋಜ್ ಗೌತಮ್ ಎಂದು ಗುರುತಿಸಲಾಗಿದೆ. ಕಮಲಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಲುಧೌರಾ ಗ್ರಾಮದ ಬಳಿ, ಮನೋಜ್ ಅವರು ತಮ್ಮ ಮಗಳೊಂದಿಗೆ ಸ್ಥಳೀಯ ಮಾರುಕಟ್ಟೆಯಿಂದ ಮನೆಗೆ ಮರಳುತ್ತಿದ್ದಾಗ ದುಷ್ಕರ್ಮಿಗಳು ಅವರನ್ನು ತಡೆದು ನಿರ್ದಯವಾಗಿ ಹಲ್ಲೆ ನಡೆಸಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಮನೋಜ್ ಅವರನ್ನು ಕುಟುಂಬಸ್ಥರು ತಕ್ಷಣವೇ ಕಸ್ಮಾಂಡಾದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದರಾದರೂ, ಅವರು ಮಾರ್ಗಮಧ್ಯದಲ್ಲೇ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.
ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಮಹಿಳೆಯರು ಸೇರಿದಂತೆ ಆರು ಮಂದಿಯ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಸೀತಾಪುರ ಪೊಲೀಸ್ ವರಿಷ್ಠಾಧಿಕಾರಿ ಅಂಕುರ್ ಅಗರ್ವಾಲ್ ತಿಳಿಸಿದ್ದಾರೆ. ಪ್ರಕರಣದಲ್ಲಿ ಶುಭಂ ಸಿಂಗ್, ಧೀರೇಂದ್ರ ಸಿಂಗ್ ಹಾಗೂ ನರೇಂದ್ರ ಸಿಂಗ್ ಸೇರಿದಂತೆ ನಾಲ್ವರು ಆರೋಪಿಗಳನ್ನು ಈಗಾಗಲೇ ಬಂಧಿಸಲಾಗಿದ್ದು, ಉಳಿದವರಿಗಾಗಿ ನಾಲ್ಕು ವಿಶೇಷ ಪೊಲೀಸ್ ತಂಡಗಳು ಶೋಧ ಮುಂದುವರಿಸಿವೆ.
ಮೃತ ಮನೋಜ್ ಈ ಹಿಂದೆ ಇದೇ ಆರೋಪಿಗಳ ವಿರುದ್ಧ ಎಸ್ಸಿ/ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದರು ಹಾಗೂ ಘಟನೆ ನಡೆಯುವ ಹಿಂದಿನ ದಿನವೂ ಎರಡೂ ಕಡೆಯವರ ನಡುವೆ ಮಾತಿನ ಚಕಮಕಿ ನಡೆದಿತ್ತು ಎಂದು ತಿಳಿದುಬಂದಿದೆ.
