
ಕೊಡಗು: ಜಿಲ್ಲೆಯ ಹಲವೆಡೆ ಇಂದು ಕೂಡ ವರುಣ ಅಬ್ಬರಿಸಿ ಬೊಬ್ಬರಿದಿದ್ದು, ಜನಜೀವನ ಅಸ್ತವ್ಯಸ್ತವಾಗುವಂತೆ ಮಾಡಿದ್ದಾನೆ.
ಇಂದು ಮಧ್ಯಾಹ್ನದಿಂದಲೂ ಜಿಲ್ಲೆಯ ಹಲವೆಡೆ ಮೋಡ ಕವಿದ ವಾತಾವರಣವಿತ್ತು. ಸಂಜೆಯ ವೇಳೆಗೆ ಗುಡುಗು ಸಹಿತ ಧಾರಾಕಾರ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗುವಂತೆ ಮಾಡಿತು.
ಭಾರೀ ಮಳೆಯಿಂದ ರಸ್ತೆಯ ಇಕ್ಕೆಲಗಳಲ್ಲಿ ನೀರು ನದಿಯಂತೆ ಹರಿದಿದ್ದು, ದ್ವಿಚಕ್ರ ವಾಹನ ಸವಾರರ ಪಾಡು ಹೇಳತೀರದಂತಾಗಿತ್ತು.
ಇನ್ನು ಧಾರಾಕಾರ ಮಳೆಯಿಂದ ವಿದ್ಯುತ್‌ಸಂಪರ್ಕ ಕಡಿತವಾಗಿದ್ದು, ಜನತೆ ಕತ್ತಲಲ್ಲೇ ಕಾಲ ಕಳೆಯುವ ಪರಿಸ್ಥಿತಿ ನಿರ್ಮಾಣವಾಗಿದೆ.
ಕೊಡಗು ಜಿಲ್ಲೆಯಲ್ಲಿ ಮುಂಗಾರು ಪೂರ್ವ ಮಳೆ ಇನ್ನೂ ಐದು ದಿನಗಳ ಕಾಲ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದ್ದು, ತಗ್ಗು ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.