ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಶನಿವಾರ ಮೋಡ ಕವಿದ ವಾತಾವರಣವಿದ್ದು, ಮಧ್ಯಾಹ್ನದ ನಂತರ ನಗರದ ವಿವಿಧ ಭಾಗಗಳಲ್ಲಿ (Rain Alert) ಗುಡುಗು-ಮಿಂಚಿನ ಸಹಿತ ಭರ್ಜರಿ ಮಳೆಯಾಗಿದೆ. ಇದರ ಬೆನ್ನಲ್ಲೇ ಹವಾಮಾನ ಇಲಾಖೆಯು ರಾಜ್ಯದ ಜನತೆಗೆ ಪ್ರಮುಖ ಮುನ್ಸೂಚನೆಯೊಂದನ್ನು ನೀಡಿದ್ದು, ಮುಂದಿನ ಮೂರು ದಿನಗಳ ಕಾಲ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಜೋರಾಗಿರಲಿದೆ ಎಂದು ಮುನ್ನೆಚ್ಚರಿಕೆ ನೀಡಿದೆ. ವಿಶೇಷವಾಗಿ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಜೋರಾದ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.
ಕರಾವಳಿ ಭಾಗದಲ್ಲಿ ಮುಂದುವರಿಯಲಿದೆ ಮಳೆ
ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ ಭಾನುವಾರ ಸಾಧಾರಣದಿಂದ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಕರಾವಳಿ ತೀರ ಪ್ರದೇಶಗಳಲ್ಲಿ ಮಳೆಯ ಆರ್ಭಟ ಹೀಗೆಯೇ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.
ಉತ್ತರ ಕರ್ನಾಟಕದ ಜಿಲ್ಲೆಗಳ ಸ್ಥಿತಿ ಏನು?
ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬೀದರ್, ಕಲಬುರಗಿ, ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳ ಕೆಲವು ಭಾಗಗಳಲ್ಲಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಬಲವಾದ ಗಾಳಿ ಬೀಸಲಿದ್ದು, ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇನ್ನುಳಿದಂತೆ ಬಾಗಲಕೋಟೆ, ಕೊಪ್ಪಳ ಹಾಗೂ ವಿಜಯಪುರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಬಿರುಗಾಳಿ ಸಹಿತ ಸಾಧಾರಣ ಮಳೆಯಾಗಬಹುದು.
ಬೆಂಗಳೂರು ಹಾಗೂ ದಕ್ಷಿಣ ಒಳನಾಡಿಗೆ ಅಲರ್ಟ್
ರಾಜಧಾನಿ ಬೆಂಗಳೂರು ನಗರ ಮತ್ತು ಗ್ರಾಮಾಂತರ ಸೇರಿದಂತೆ ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಹಾಸನ, ಕೊಡಗು, ದಾವಣಗೆರೆ, ಚಿಕ್ಕಮಗಳೂರು, ಬಳ್ಳಾರಿ , ಚಿತ್ರದುರ್ಗ, ಶಿವಮೊಗ್ಗ ಹಾಗೂ ವಿಜಯನಗರ ಜಿಲ್ಲೆಗಳ ಹಲವೆಡೆ ವಾತಾವರಣದಲ್ಲಿ ಭಾರಿ ಬದಲಾವಣೆಯಾಗಲಿದೆ. ಈ ಭಾಗಗಳಲ್ಲಿ 30-40 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸಲಿದ್ದು, ಗುಡುಗಿನೊಂದಿಗೆ ಮಳೆ ಸುರಿಯುವ ಸಾಧ್ಯತೆ ದಟ್ಟವಾಗಿದೆ.
ಹಠಾತ್ ಹವಾಮಾನ ವೈಪರೀತ್ಯ ಹಾಗೂ ಬಲವಾದ ಗಾಳಿ ಬೀಸುವ ಮುನ್ಸೂಚನೆ ಇರುವುದರಿಂದ ಸಾರ್ವಜನಿಕರು ಹಾಗೂ ರೈತರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.
ಬಾಗಲಕೋಟೆಯಲ್ಲಿ ರೈತರಿಗೆ ಸಂಕಷ್ಟ
ಆದರೆ ಬಾಗಲಕೋಟೆ ಜಿಲ್ಲೆಯಲ್ಲಿ ಮಾತ್ರ ವರುಣದೇವ ಕಣ್ಣಾಮುಚ್ಚಾಲೆ ಆಡುತ್ತಿದ್ದಾನೆ. ಮುಂಗಾರು ಆರಂಭದ ಮೊದಲ ಎರಡು ಮೂರು ದಿನಗಳಲ್ಲಿ ಇಲ್ಲಿ ಸುರಿದ ಭಾರಿ ಮಳೆಗೆ ಇಡೀ ಜಿಲ್ಲೆ ಬೆಚ್ಚಿಬಿದ್ದಿತ್ತು. ಅತಿಯಾದ ಮಳೆಯ ಪರಿಣಾಮವಾಗಿ ಜಿಲ್ಲೆಯ ಸುಮಾರು 42ಕ್ಕೂ ಹೆಚ್ಚು ಮನೆಗಳು ನೆಲಕಚ್ಚಿದ್ದು, ಆಶ್ರಯ ಕಳೆದುಕೊಂಡ ಕುಟುಂಬಗಳು ಕಣ್ಣೀರಿಡುತ್ತಿವೆ. ಇನ್ನೇನು ಮಳೆ ಹಿಡಿದರೆ ಬಿಡುವುದಿಲ್ಲ ಎಂದುಕೊಳ್ಳುವಷ್ಟರಲ್ಲೇ ನಿಧಾನವಾಗಿ ತಣ್ಣಗಾಗಿರುವ ವರುಣ ಸದ್ಯ ಕಣ್ಮರೆಯಾಗಿದ್ದಾನೆ. ಮಳೆ ಸಕಾಲಕ್ಕೆ ಕೈಕೊಟ್ಟಿರುವುದರಿಂದ ಜಿಲ್ಲೆಯಲ್ಲಿ ಬಿತ್ತನೆ ಕಾರ್ಯ ಕುಂಠಿತಗೊಂಡಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಸುಮಾರು 25 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ರೈತರು ಬಿತ್ತನೆ ಮಾಡಿದ್ದರು. ಆದರೆ ಈ ಬಾರಿ ಮಳೆಯ ಕೊರತೆಯಿಂದಾಗಿ ಕೇವಲ 3 ಸಾವಿರ ಹೆಕ್ಟೇರ್ ಬಿತ್ತನೆ ಆಗಿದೆ.
