ಶೃಂಗೇರಿ ತಾಲ್ಲೂಕಿನ ಕೆರೆಕಟ್ಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಆನೆ ದಾಳಿಗೆ ಇಬ್ಬರು ಗ್ರಾಮಸ್ಥರು ಜೀವ ತೆತ್ತಿದ್ದಾರೆ. ಕೊಟ್ಟಿಗೆಗೆ ಸೊಪ್ಪು ತರಲು ಹೋಗಿದ್ದ ಇಬ್ಬರು ವ್ಯಕ್ತಿಗಳ ಮೇಲೆ ಏಕಾಏಕಿ ಕಾಡಾನೆಯೊಂದು ದಾಳಿ ನಡೆಸಿ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ತಾಲೂಕಿನ ಕೆರೆಕಟ್ಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುಡುಬಾ ಎಲ್ಸಾರ ಸಮೀಪ ಈ ಘಟನೆ ನಡೆದಿದೆ. ಮೃತರನ್ನು ಉಮೇಶ್ ಮತ್ತು ಹರೀಶ್ ಎಂದು ಗುರುತಿಸಲಾಗಿದೆ.
ಹಸುವಿನ ಕೊಟ್ಟಿಗೆಗೆ ಸೊಪ್ಪು ತರುವುದಕ್ಕಾಗಿ ಸಮೀಪದ ಅರಣ್ಯ ಪ್ರದೇಶಕ್ಕೆ ಉಮೇಶ್ ಮತ್ತು ಹರೀಶ್ ತೆರಳಿದ್ದರು. ಆನೆ ಇರುವಿಕೆಯ ಅರಿವೇ ಇರದ ಇಬ್ಬರ ಮೇಲೆ ಎದುರಾದ ಕಾಡಾನೆ, ತೀವ್ರವಾಗಿ ದಾಳಿ ನಡೆಸಿದ ಪರಿಣಾಮ ಇಬ್ಬರೂ ಸಾವನ್ನಪ್ಪಿದ್ದಾರೆ.
ಘಟನೆಯಿಂದಾಗಿ ಸ್ಥಳೀಯರಲ್ಲಿ ತೀವ್ರ ಆಕ್ರೋಶ ಭುಗಿಲೆದ್ದಿದ್ದು, ಸ್ಥಳೀಯರು ಮತ್ತು ರೈತ ಸಮಿತಿಗಳು ಪ್ರತಿಭಟನೆಗೆ ಕರೆ ನೀಡಿವೆ. ಸ್ಥಳಕ್ಕೆ ಭೇಟಿ ನೀಡಿದ ತಹಶೀಲ್ದಾರರಿಗೆ ಮತ್ತು ಅರಣ್ಯ ಅಧಿಕಾರಿಗಳಿಗೆ ಗ್ರಾಮಸ್ಥರು ಘೇರಾವ್ ಹಾಕಿದ್ದಾರೆ. ಈ ದುರಂತಕ್ಕೆ ಅಧಿಕಾರಿಗಳೇ ಕಾರಣ ಎಂದು ಗ್ರಾಮಸ್ಥರು ಪ್ರತಿಭಟನೆಗೆ ಮುಂದಾಗಿದ್ದಾರೆ.
ಈ ದುರಂತದಿಂದಾಗಿ ಸುತ್ತಮುತ್ತಲಿನ ಗ್ರಾಮಗಳಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
