ವಿನಯ್ ಕುಲಕರ್ಣಿಗೆ ಮತ್ತೆ ಶಾಸಕ ಸ್ಥಾನ: ವಿಧಾನಸಭೆ ಸಚಿವಾಲಯದಿಂದ ಅಧಿಕೃತ ಆದೇಶ

ಧಾರವಾಡ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರ ಶಾಸಕ ಸ್ಥಾನವನ್ನು ರಾಜ್ಯ ವಿಧಾನಸಭೆ ಸಚಿವಾಲಯ ಮರುಸ್ಥಾಪಿಸಿದೆ. ಬಿಜೆಪಿ ಮುಖಂಡ ಯೋಗೇಶ್‌ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ಅನರ್ಹಗೊಂಡಿದ್ದ ವಿನಯ್ ಕುಲಕರ್ಣಿ ಅವರಿಗೆ, ಕರ್ನಾಟಕ ಹೈಕೋರ್ಟ್ ಶಿಕ್ಷೆಗೆ ತಡೆ ನೀಡಿ ಜಾಮೀನು ಮಂಜೂರು ಮಾಡಿದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ವಿಧಾನಸಭೆಯ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ಅವರು ಸೋಮವಾರ ಹೊರಡಿಸಿದ ಆದೇಶದಲ್ಲಿ, ಹೈಕೋರ್ಟ್‌ನ ಇತ್ತೀಚಿನ ತೀರ್ಪನ್ನು ಪರಿಗಣಿಸಿ ವಿನಯ್ ಕುಲಕರ್ಣಿ ಅವರ ಅನರ್ಹತೆಯನ್ನು ಹಿಂಪಡೆದು, ಶಾಸಕ ಸ್ಥಾನವನ್ನು ಮರುಸ್ಥಾಪಿಸಲಾಗಿದೆ ಎಂದು ತಿಳಿಸಿದ್ದಾರೆ. ಇದರೊಂದಿಗೆ ಅವರು ಧಾರವಾಡ ಗ್ರಾಮೀಣ ಕ್ಷೇತ್ರದ ಶಾಸಕರಾಗಿ ಮತ್ತೆ ಮುಂದುವರಿಯಲಿದ್ದಾರೆ.

ಪ್ರಕರಣದ ಹಿನ್ನೆಲೆ
2016ರ ಜೂನ್ 15ರಂದು ಧಾರವಾಡ ಉಪನಗರದ ಜಿಮ್‌ನಲ್ಲಿ ಬಿಜೆಪಿ ಮುಖಂಡ ಯೋಗೇಶ್‌ಗೌಡ ಅವರನ್ನು ದುಷ್ಕರ್ಮಿಗಳು ಹತ್ಯೆಗೈದಿದ್ದರು. ಆರಂಭದಲ್ಲಿ ಸ್ಥಳೀಯ ಪೊಲೀಸರು ತನಿಖೆ ನಡೆಸಿದರೂ, ತನಿಖೆ ಸಮರ್ಪಕವಾಗಿ ನಡೆಯುತ್ತಿಲ್ಲ ಎಂದು ಮೃತರ ಕುಟುಂಬಸ್ಥರು ಆರೋಪಿಸಿದ್ದರು.

2019ರಲ್ಲಿ, ಪ್ರಕರಣದ ಪ್ರಮುಖ ಆರೋಪಿ ಎಂದು ಆರೋಪಿಸಲ್ಪಟ್ಟಿದ್ದ ವಿನಯ್ ಕುಲಕರ್ಣಿ ಸಾಕ್ಷ್ಯ ನಾಶಪಡಿಸಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿ ಯೋಗೇಶ್‌ಗೌಡ ಕುಟುಂಬವು ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಪ್ರತ್ಯೇಕ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುವಂತೆ ನಿರ್ದೇಶನ ನೀಡಿತ್ತು. ಬಳಿಕ, ಅಂದಿನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸರ್ಕಾರ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಿತ್ತು.

ಸಿಬಿಐ ಸಲ್ಲಿಸಿದ್ದ ದೋಷಾರೋಪ ಪಟ್ಟಿಯನ್ನು ಆಧರಿಸಿ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯ, ವಿನಯ್ ಕುಲಕರ್ಣಿ ಸೇರಿದಂತೆ 17 ಮಂದಿಯನ್ನು ದೋಷಿಗಳೆಂದು ತೀರ್ಪು ನೀಡಿ ಜೀವಾವಧಿ ಶಿಕ್ಷೆ ವಿಧಿಸಿತ್ತು. ಈ ಹಿನ್ನೆಲೆಯಲ್ಲಿ ಜನಪ್ರತಿನಿಧಿ ಕಾಯ್ದೆಯಡಿ ಅವರ ಶಾಸಕ ಸ್ಥಾನ ಅನರ್ಹಗೊಂಡಿತ್ತು.

ಆದರೆ, ಕರ್ನಾಟಕ ಹೈಕೋರ್ಟ್ ಇತ್ತೀಚೆಗೆ ಶಿಕ್ಷೆಯನ್ನು ಅಮಾನತಿನಲ್ಲಿಟ್ಟು ಜಾಮೀನು ಮಂಜೂರು ಮಾಡಿದ ಹಿನ್ನೆಲೆಯಲ್ಲಿ, ವಿಧಾನಸಭೆ ಸಚಿವಾಲಯವು ಅವರ ಶಾಸಕ ಸ್ಥಾನವನ್ನು ಮರುಸ್ಥಾಪಿಸಿ ಅಧಿಕೃತ ಆದೇಶ ಹೊರಡಿಸಿದೆ.

Related Articles

ಇತ್ತೀಚಿನ ಸುದ್ದಿಗಳು