ರಾಜ್ಯದ ಹಲವೆಡೆ ಭಾನುವಾರವೂ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹಮಾವಾನ ಇಲಾಖೆ ಮುನ್ಸೂಚನೆ ನೀಡಿದೆ. ಅದರಂತೆ ಹಲವ ಜಿಲ್ಲೆಗಳಿಗೆ ರೆಡ್, ಆರೆಂಜ್, ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು ಜಾಗ್ರತೆಯಿಂದ ಇರುವಂತೆ ಹವಾಮಾನ ಇಲಾಖೆ ಸೂಚಿಸಿದೆ.
ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಹಾಸನ ಹಾಗೂ ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಮುಂಜಾಗ್ರತ ಕ್ರಮವಾಗಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಉಳಿದಂತೆ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ, ಬೆಳಗಾವಿ, ಧಾರವಾಡ, ಹಾವೇರಿ, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿಯೂ ಭಾರಿ ಮಳೆಯ ಜತೆಗೆ 40ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಂಭವವಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.
ಭಾನುವಾರ ಮಾತ್ರವಲ್ಲದೇ ಸೋಮವಾರ ಮಂಗಳವಾರ ಮತ್ತು ಬುಧವಾರವೂ ಮಳೆ ಪ್ರಮಾಣ ಏರಿಕೆ ಕಾಣಲಿದ್ದು, ಕರಾವಳಿ ಪ್ರದೇಶದ ಮೂರೂ ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ರೆಡ್ ಅಲರ್ಟ್ ಮುಂದುವರೆಯಲಿದೆ.