ಕನ್ನಡ ಚಿತ್ರನಟ ಉಪೇಂದ್ರ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ವಿಡಿಯೋ ಒಂದು ಈಗ ಹೆಚ್ಚು ಸದ್ದು ಮಾಡುತ್ತಿದೆ. ಇದೇ ಕಾರಣಕ್ಕೆ ಉಪೇಂದ್ರ ಮೇಲೆ ದಲಿತ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ಅಟ್ರಾಸಿಟಿ ದಾಖಲಾಗಿದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ ಉಪೇಂದ್ರ ಕುರಿತು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.
ತಾನು ಮಾಡಿದ ವಿಡಿಯೋ ಒಂದರಲ್ಲಿ ಕೆಳವರ್ಗವನ್ನು ನಿಂದಿಸುವ ಹಿನ್ನೆಲೆಯಲ್ಲಿ ಬಳಸಿರುವ ವಾಕ್ಯದ ಬಗ್ಗೆ ಜಾಲತಾಣ ಸೇರಿದಂತೆ ಎಲ್ಲೆಡೆ ಉಪೇಂದ್ರ ವಿರುದ್ಧ ಆಕ್ಷೇಪ ವ್ಯಕ್ತವಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪನವರು ‘ಉಪೇಂದ್ರ ಅವರಿಗೆ ಭಾರತದ ಇತಿಹಾಸ, ಚರಿತ್ರೆ ಸಾಂಸ್ಕೃತಿಕ ಬದುಕಿನ ಅರಿವು, ಸಾಮಾಜಿಕ ಅಸಮಾನತೆಗಳ ಪ್ರಜ್ಞೆ ಅಗತ್ಯವಾಗಿ ಇದೆ ಅಂದುಕೊಂಡಿದ್ದೆ. ಆದರೆ ಸಮಾಜದ ಕೆಳವರ್ಗಗಳ ಬಗೆಗಿರುವ ಅವರ ಅಸಹನೆ ಬಗ್ಗೆ ಬಲವಾಗಿ ಖಂಡಿಸುತ್ತೇನೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಉಪೇಂದ್ರ ಅವರು ಒಬ್ಬ ಖ್ಯಾತ ನಟ, ನಿರ್ಮಾಪಕ ಮತ್ತು ಒಂದು ನಿರ್ದಿಷ್ಟ ರಾಜಕೀಯ ಪಕ್ಷದ ಮೂಲಕ ಸಾರ್ವಜನಿಕ ಜೀವನದಲ್ಲಿ ಇರಲು ಬಯಸುತ್ತಿರುವ ವ್ಯಕ್ತಿ. ಇಂತಹ ವ್ಯಕ್ತಿಗೆ ಭಾರತದ ಇತಿಹಾಸ, ಚರಿತ್ರೆ ಸಾಂಸ್ಕೃತಿಕ ಬದುಕಿನ ಅರಿವು, ಸಾಮಾಜಿಕ ಅಸಮಾನತೆಗಳ ಪ್ರಜ್ಞೆ ಅಗತ್ಯವಾಗಿ ಇದೆ ಅಂದುಕೊಂಡಿದ್ದೆ. ಆದರೆ ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ಅವರು ಜಾತಿ ಹೆಸರನ್ನು ಕರೆಯುತ್ತಿರುವುದನ್ನು ನೋಡಿದರೆ ಇದು ಸಮುದಾಯ ಮಾತ್ರವಲ್ಲದೇ ಸಂವಿಧಾನಕ್ಕೂ ಮಾಡಿದ ಅಪಚಾರ ಆಗಿದೆ. ಇದನ್ನು ನಾನು ಬಲವಾಗಿ ಖಂಡಿಸುತ್ತೇನೆ” ಎಂದು ಸಚಿವರಾದ ಹೆಚ್.ಸಿ.ಮಹದೇವಪ್ಪ ಉಪೇಂದ್ರ ವಿರುದ್ಧ ತಮ್ಮ ಆಕ್ರೋಶ ಹೊರಹಾಕಿದ್ದಾರೆ.
ಇದನ್ನೂ ಓದಿ : ಉಪೇಂದ್ರ ವಿರುದ್ದ ‘ಅಟ್ರಾಸಿಟಿ ಕೇಸ್’ ದಾಖಲು
“ಇನ್ನು ಸೂಕ್ಷ್ಮವಾಗಿ ಗಮನಿಸುವಾಗ ಉಪೇಂದ್ರ ಅವರು ತಮ್ಮ ಮಾತುಗಳಿಗೆ ಪೂರಕವಾಗಿ ಹೊಲಗೇರಿ ಎಂಬ ಪದವನ್ನು ಬಳಸಿರುವುದೇ ಅಪ್ರಸ್ತುತ. ಜೊತೆಗೆ ಅವರು ಕ್ಷಮೆಯಾಚನೆಯಲ್ಲೂ ಸಹ ನಾನೂ ಕೂಡಾ ಬಡತನದಿಂದ ಬಂದಿದ್ದೇನೆ ಎಂದು ಹೇಳುತ್ತಿದ್ದಾರೆ. ಆದರೆ ಬಡತನವೇ ಬೇರೆ ಜಾತಿ ಆಧಾರಿತವಾದ ಸಾಮಾಜಿಕ ಅಸಮಾನತೆಯೇ ಬೇರೆ ಎಂಬ ಸಂಗತಿಯು ಉಪೇಂದ್ರ ಅವರಿಗೆ ಸಹಜವಾಗಿ ತಿಳಿದಿಲ್ಲ ಎಂದು ಕಾಣುತ್ತದೆ. ಹೀಗಾಗಿ ಸಾರ್ವಜನಿಕ ಜೀವನದಲ್ಲಿ ಇರುವ ಅವರು ಈ ದೇಶದ ಅಸಮಾನತೆ ಮತ್ತು ನೋವಿನ ಚರಿತ್ರೆಯನ್ನೇ ತಿಳಿಯದಿದ್ದ ಮೇಲೆ ಇವರ ಸಮಾಜ ಬದಲಾಯಿಸುವಂತಹ ಮಾತುಗಳಿಗೆ ಯಾವ ಅರ್ಥವಿದೆ” ಎನ್ನುವ ಮೂಲಕ ಉಪೇಂದ್ರ ಅವರಿಗೆ ಸಾಮಾಜಿಕ ಅರಿವಿನ ಅಗತ್ಯವಿದೆ ಎಂದು ಹೇಳಿದ್ದಾರೆ.
ತಮ್ಮ ಸಾಮಾಜಿಕ ಜಾಲತಾಣದ ಖಾತೆಯ ಮೂಲಕ ಉಪೇಂದ್ರ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿದ ಸಚಿವರು “ಈಗಾಗಲೇ ಬಹುತೇಕ ದಲಿತ ಸಂಘಟನೆಗಳು ಈ ಕುರಿತಂತೆ ಮನವಿ ಸಲ್ಲಿಸುತ್ತಿರುವ ಕಾರಣ ಮುಂದೆ ಶೋಷಿತ ಸಮುದಾಯಗಳನ್ನು Taken for granted ಆಗಿ ಉಲ್ಲೇಖಿಸುವ ಪ್ರವೃತ್ತಿಯನ್ನು ನಿಲ್ಲಿಸಲು ಮತ್ತು ಸಮುದಾಯಗಳಿಗೆ ಸಂವಿಧಾನದಲ್ಲೇ ಇರುವ ಸಮಾನ ಘನತೆಯನ್ನು ಎತ್ತಿ ಹಿಡಿಯುವ ನಿಟ್ಟಿನಲ್ಲಿ ಪೂರಕ ಕ್ರಮ ಕೈಗೊಳ್ಳಲಾಗುವುದು” ಎಂದೂ ತಿಳಿಸಿದ್ದಾರೆ.
ಪ್ರಸ್ತುತ ಬೆಂಗಳೂರು ಸೇರಿದಂತೆ ಸುತ್ತಮುತ್ತಲಿನ ಕಡೆಗಳಲ್ಲಿ ಚಿತ್ರನಟ ಉಪೇಂದ್ರ ವಿರುದ್ಧ ದೂರು ದಾಖಲಾಗಿದ್ದು, ಈ ಪ್ರಕರಣ ಯಾವ ಹಂತಕ್ಕೆ ಹೋಗಲಿದೆ ಎಂಬುದನ್ನು ಕಾದು ನೋಡಬೇಕಿದೆ.