ಜನರ ತೆರಿಗೆ ಹಣದಿಂದ ರಾಜಕೀಯ ನಾಯಕರ ಪ್ರತಿಮೆಗಳನ್ನು ಏಕೆ ಸ್ಥಾಪಿಸಬೇಕು ಎಂದು ತಮಿಳುನಾಡು ಸರ್ಕಾರವನ್ನು ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ.
ಮಾಜಿ ಮುಖ್ಯಮಂತ್ರಿ ಕರುಣಾನಿಧಿ ಅವರ ಪ್ರತಿಮೆ ಸ್ಥಾಪನೆಗೆ ಅನುಮತಿ ಕೋರಿ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನ್ಯಾಯಮೂರ್ತಿಗಳಾದ ವಿಕ್ರಮ್‌ನಾಥ್ ಮತ್ತು ಪ್ರಶಾಂತ್‌ಕುಮಾರ್ ಮಿಶ್ರ ಅವರನ್ನೊಳಗೊಂಡ ಪೀಠದ ಮುಂದೆ ಮಂಗಳವಾರ ನಡೆಯಿತು.
ಈ ಸಂದರ್ಭದಲ್ಲಿ ನ್ಯಾಯಮೂರ್ತಿಗಳು, “ಜನರ ತೆರಿಗೆ ಹಣದಿಂದ ರಾಜಕೀಯ ನಾಯಕರ ಪ್ರತಿಮೆಗಳನ್ನು ಏಕೆ ಸ್ಥಾಪಿಸಬೇಕು? ಅವರನ್ನು ಏಕೆ ಕೊಂಡಾಡಬೇಕು?” ಎಂದು ಪ್ರಶ್ನಿಸಿದರು. ಇದರಿಂದಾಗಿ ತಮಿಳುನಾಡು ಸರ್ಕಾರದ ಪರ ವಕೀಲರು ಅರ್ಜಿಯನ್ನು ಹಿಂಪಡೆಯುವುದಾಗಿ ತಿಳಿಸಿದರು. ಇದಕ್ಕೆ ಅನುಮತಿ ನೀಡಿದ ನ್ಯಾಯಾಲಯ ಮೇಲ್ಮನವಿಯನ್ನು ವಜಾಗೊಳಿಸಿತು.
ಹಿನ್ನೆಲೆ: ತಿರುನೆಲ್ವೇಲಿ ಜಿಲ್ಲೆಯ ವಳ್ಳಿಯೂರ್ ತರಕಾರಿ ಮಾರುಕಟ್ಟೆ ಎದುರು ಕರುಣಾನಿಧಿ ಅವರ ಕಂಚಿನ ಪ್ರತಿಮೆ ಸ್ಥಾಪನೆಗೆ ಅನುಮತಿ ಕೋರಿ ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠದಲ್ಲಿ ಹಿಂದೆ ಅರ್ಜಿಯನ್ನು ಸಲ್ಲಿಸಲಾಗಿತ್ತು.
ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಸ್.ಎಂ. ಸುಬ್ರಮಣ್ಯಂ ಮತ್ತು ಮರಿಯಾಗ್ಲಾಡ್ ಅವರ ಪೀಠವು, ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿಮೆಗಳನ್ನು ಸ್ಥಾಪಿಸಿದರೆ ಸಂಚಾರ ಸಮಸ್ಯೆ ಉಂಟಾಗುತ್ತದೆ ಎಂದು ಹೇಳಿ ಅನುಮತಿ ನಿರಾಕರಿಸಿತ್ತು. ಇದರ ನಂತರ, ಹೈಕೋರ್ಟ್‌ನ ಈ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿತ್ತು.