ಮಂಗಳೂರು: ರಾಜ್ಯದಲ್ಲಿ ಬಿಜೆಪಿಯನ್ನು ಬಲಪಡಿಸುವ ನಿಟ್ಟಿನಲ್ಲಿ ನೂತನವಾಗಿ ಆಯ್ಕೆಯಾಗಿರುವ ಪಕ್ಷದ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರೊಂದಿಗೆ ಪ್ರವಾಸ ಕೈಗೊಳ್ಳುವುದಾಗಿ ಕರ್ನಾಟಕ ಬಿಜೆಪಿ ನಿರ್ಗಮಿತ ಅಧ್ಯಕ್ಷ ಹಾಗೂ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಶುಕ್ರವಾರ ಇಲ್ಲಿ ತಿಳಿಸಿದರು.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಕಟೀಲ್, ಕರ್ನಾಟಕದಲ್ಲಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರಲು ತಾವು ಮತ್ತು ವಿಜಯೇಂದ್ರ ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದರು.
ಶಿಕಾರಿಪುರ ಶಾಸಕರಾಗಿರುವ ವಿಜಯೇಂದ್ರ ರಾಜ್ಯ ಘಟಕದ ಉಪಾಧ್ಯಕ್ಷರಾಗಿ ಹಾಗೂ ರಾಜ್ಯ ಬಿಜೆಪಿ ಯುವಮೋರ್ಚಾ ಅಧ್ಯಕ್ಷರಾಗಿ ಪಕ್ಷವನ್ನು ಸಂಘಟಿಸುವ ಅನುಭವ ಹೊಂದಿರುವುದರಿಂದ ಪಕ್ಷವನ್ನು ಮತ್ತಷ್ಟು ಸಂಘಟಿಸಲಿದ್ದಾರೆ ಎಂದು ಕಟೀಲ್ ವಿಶ್ವಾಸ ವ್ಯಕ್ತಪಡಿಸಿದರು.
ವಿಜಯೇಂದ್ರ ಅವರ ನೇಮಕ ರಾಜ್ಯದ ಪಕ್ಷದ ಕಾರ್ಯಕರ್ತರ ಆತ್ಮವಿಶ್ವಾಸವನ್ನು ಮತ್ತಷ್ಟು ಹೆಚ್ಚಿಸಿದೆ ಎಂದರು.
ಕಳೆದ ಆರು ತಿಂಗಳಲ್ಲಿ ಕಾಂಗ್ರೆಸ್ ಆಡಳಿತದಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಕಾಮಗಾರಿಗಳು ನನೆಗುದಿಗೆ ಬಿದ್ದಿವೆ ಎಂದು ಕಟೀಲು ಆರೋಪಿಸಿದರು.