ಬೇಲೂರು: ಹಾಸನ ಜಿಲ್ಲೆಯ ಬೇಲೂರು ಪಟ್ಟಣದಲ್ಲಿ ಗಣೇಶ ಮೂರ್ತಿಗೆ ಚಪ್ಪಲಿ ಹಾರ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಒಬ್ಬ ಮಹಿಳೆಯನ್ನು ಬಂಧಿಸಿದ್ದಾರೆ.
ಬೇಲೂರು ಪುರಸಭೆ ಆವರಣದಲ್ಲಿರುವ ಶ್ರೀ ವರಸಿದ್ಧಿ ವಿನಾಯಕ ದೇವಾಲಯದಲ್ಲಿ ನಿನ್ನೆ (ಭಾನುವಾರ) ಬೆಳಿಗ್ಗೆ ಈ ಅಕ್ಷಮ್ಯ ಕೃತ್ಯ ನಡೆದಿದೆ. ದೇವಸ್ಥಾನಕ್ಕೆ ಬಂದಿದ್ದ ಮಹಿಳೆಯೇ ಈ ಕೃತ್ಯ ಎಸಗಿದ್ದಾರೆ ಎಂದು ತಿಳಿದುಬಂದಿದೆ.
ಪ್ರಕರಣದ ವಿವರ
ದೇವಾಲಯದ ಆವರಣದಲ್ಲಿ ಗಣೇಶ ಮೂರ್ತಿಗೆ ಚಪ್ಪಲಿ ಹಾರ ಹಾಕಿರುವುದನ್ನು ಗಮನಿಸಿದ ಸಾರ್ವಜನಿಕರು ಮತ್ತು ಭಕ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದರು. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು, ದೇವಾಲಯದ ಆವರಣದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದರು.
ದೃಶ್ಯಾವಳಿಗಳ ಆಧಾರದ ಮೇಲೆ, ದೇವಸ್ಥಾನಕ್ಕೆ ಬಂದಿದ್ದ ಮಹಿಳೆಯೇ ಈ ಕೃತ್ಯ ಎಸಗಿರುವುದು ದೃಢಪಟ್ಟಿದೆ. ಆ ಮಹಿಳೆ ಮುಖ ಮುಚ್ಚಿಕೊಂಡು ಬಂದಿದ್ದಳು. ದೇವಸ್ಥಾನಕ್ಕೆ ಪ್ರವೇಶಿಸುವಾಗ ಆಕೆ ಕಾಲಿನಲ್ಲಿ ಚಪ್ಪಲಿ ಧರಿಸಿದ್ದಳು, ಆದರೆ ದೇವಸ್ಥಾನದಿಂದ ಹೊರ ಹೋಗುವಾಗ ಕಾಲಿನಲ್ಲಿ ಚಪ್ಪಲಿ ಇರಲಿಲ್ಲ. ಈ ಆಧಾರದ ಮೇಲೆ ಆಕೆಯ ಮೇಲೆ ಅನುಮಾನ ವ್ಯಕ್ತವಾಯಿತು. ನಂತರ ಪೊಲೀಸರು ಆರೋಪಿ ಮಹಿಳೆಯನ್ನು ಪತ್ತೆಹಚ್ಚಿ ಬಂಧಿಸಿದ್ದಾರೆ.