ನಗದು ಹಣದ ಹಗರಣ ಆರೋಪದ ಹಿನ್ನೆಲೆಯಲ್ಲಿ ವಿವಾದಕ್ಕೊಳಗಾಗಿದ್ದ ಅಲಹಾಬಾದ್ ಹೈಕೋರ್ಟ್ ನ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ತಮ್ಮ ರಾಜೀನಾಮೆ ಪತ್ರವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಕಳುಹಿಸಿರುವುದಾಗಿ ಮೂಲಗಳು ತಿಳಿಸಿವೆ.
ದೆಹಲಿಯಲ್ಲಿನ ತಮ್ಮ ಅಧಿಕೃತ ನಿವಾಸದಲ್ಲಿ ಸುಟ್ಟ ನೋಟುಗಳು ಪತ್ತೆಯಾದ ಪ್ರಕರಣವು ದೇಶದ ನ್ಯಾಯಾಂಗ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಈ ಘಟನೆಯ ನಂತರ ನ್ಯಾಯಮೂರ್ತಿ ವರ್ಮಾ ವಿರುದ್ಧ ಆಂತರಿಕ ತನಿಖೆ ಆರಂಭಗೊಂಡಿದ್ದು, ಪ್ರಕರಣ ಗಂಭೀರ ಸ್ವರೂಪ ಪಡೆದಿದೆ.
ಹಿಂದೆ ದೆಹಲಿ ಹೈಕೋರ್ಟ್ ನಲ್ಲಿ ಸೇವೆ ಸಲ್ಲಿಸುತ್ತಿದ್ದ ವರ್ಮಾ ಅವರನ್ನು ವಿವಾದದ ನಡುವೆಯೇ ಅಲಹಾಬಾದ್ ಹೈಕೋರ್ಟ್ ಗೆ ವರ್ಗಾವಣೆ ಮಾಡಲಾಗಿತ್ತು. 2025ರ ಏಪ್ರಿಲ್ 5ರಂದು ಅವರು ಅಲಹಾಬಾದ್ ಹೈಕೋರ್ಟ್‌ನಲ್ಲಿ ಅಧಿಕಾರ ಸ್ವೀಕರಿಸಿದ್ದರು.
ಇದರ ನಡುವೆಯೇ, ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ನೇತೃತ್ವದಲ್ಲಿ ಮೂವರು ಸದಸ್ಯರ ತನಿಖಾ ಸಮಿತಿಯನ್ನು ರಚಿಸಲಾಗಿದ್ದು, ಮುಂದಿನ ಅಧಿವೇಶನದಲ್ಲಿ ವರದಿ ಸಲ್ಲಿಸುವ ನಿರೀಕ್ಷೆ ವ್ಯಕ್ತವಾಗಿದೆ. ನ್ಯಾಯಮೂರ್ತಿ ವರ್ಮಾ ವಿರುದ್ಧ ದೋಷಾರೋಪಣೆ ಪ್ರಕ್ರಿಯೆ ಆರಂಭಿಸಲು ಎಲ್ಲಾ ಪಕ್ಷಗಳ ಸಂಸದರು ನೋಟಿಸ್ ನೀಡಿದ್ದರು.
ಆದರೆ, ದೋಷಾರೋಪಣೆ ಪ್ರಕ್ರಿಯೆ ಆರಂಭಕ್ಕೂ ಮುನ್ನವೇ ರಾಜೀನಾಮೆ ಸಲ್ಲಿಸಿರುವುದು ಪ್ರಕರಣಕ್ಕೆ ಮಹತ್ವದ ತಿರುವು ನೀಡಿದ್ದು, ಮುಂದಿನ ಕಾನೂನು ಪ್ರಕ್ರಿಯೆಗಳ ಮೇಲೆ ಗಮನ ಕೇಂದ್ರೀಕೃತವಾಗಿದೆ.
