ಮುಂಗಾರು ಅಧಿವೇಶನಕ್ಕೆ ಚಾಲನೆ: ಪರಿಷತ್‌ನಲ್ಲಿ ಯತೀಂದ್ರ ಸಿದ್ದರಾಮಯ್ಯ ಸಭಾನಾಯಕ ಘೋಷಣೆ

ಬೆಂಗಳೂರು: ರಾಜ್ಯ ವಿಧಾನಮಂಡಲದ ಮುಂಗಾರು ಅಧಿವೇಶನ ಗುರುವಾರದಿಂದ ಆರಂಭವಾಗಿದ್ದು, ವಿಧಾನ ಪರಿಷತ್ ಕಲಾಪ ಆರಂಭವಾಗುತ್ತಿದ್ದಂತೆ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರನ್ನು ನೂತನ ಸಭಾನಾಯಕರಾಗಿ ಹಂಗಾಮಿ ಸಭಾಪತಿ ಪುಟ್ಟಣ್ಣ ಘೋಷಿಸಿದರು.

ಸಭಾನಾಯಕರಾಗಿ ಘೋಷಣೆಯಾದ ಬಳಿಕ ಸದನವನ್ನು ಉದ್ದೇಶಿಸಿ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ, ತಾವು ಮೊದಲ ಬಾರಿಗೆ ಸಚಿವರಾಗಿದ್ದು, ಇದೇ ಮೊದಲ ಬಾರಿಗೆ ಸಭಾನಾಯಕರ ಜವಾಬ್ದಾರಿಯನ್ನೂ ವಹಿಸಿಕೊಂಡಿರುವುದಾಗಿ ತಿಳಿಸಿದರು. ಅನುಭವದ ಕೊರತೆಯಿಂದ ಯಾವುದೇ ತಪ್ಪುಗಳಾಗಿದ್ದರೆ ಆಡಳಿತ ಹಾಗೂ ಪ್ರತಿಪಕ್ಷದ ಸದಸ್ಯರು ಮಾರ್ಗದರ್ಶನ ನೀಡಿ ಸಹಕರಿಸಬೇಕು ಎಂದು ಅವರು ವಿನಂತಿಸಿದರು.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕಾರ ಸ್ವೀಕರಿಸಿದ ಬಳಿಕ ನಡೆಯುತ್ತಿರುವ ಮೊದಲ ವಿಧಾನಮಂಡಲ ಅಧಿವೇಶನ ಇದಾಗಿದ್ದು, ರಾಜಕೀಯವಾಗಿ ಸಾಕಷ್ಟು ಮಹತ್ವ ಪಡೆದುಕೊಂಡಿದೆ. ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ಕಾರ್ಯವೈಖರಿಯನ್ನು ಪ್ರಶ್ನಿಸಲು ಎನ್‌ಡಿಎ ಮೈತ್ರಿಕೂಟದ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಸಜ್ಜಾಗಿವೆ.

ರಾಜ್ಯದ ಆಡಳಿತ, ಅಭಿವೃದ್ಧಿ ಯೋಜನೆಗಳು, ಕಾನೂನು ಸುವ್ಯವಸ್ಥೆ, ರೈತರ ಸಮಸ್ಯೆಗಳು ಸೇರಿದಂತೆ ಹಲವು ಪ್ರಮುಖ ವಿಷಯಗಳನ್ನು ಮುಂದಿಟ್ಟು ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಬಿಜೆಪಿ-ಜೆಡಿಎಸ್ ಜಂಟಿ ತಂತ್ರ ರೂಪಿಸಿರುವುದಾಗಿ ತಿಳಿದುಬಂದಿದೆ. ಇದರ ನಡುವೆ ಸರ್ಕಾರವೂ ತನ್ನ ಸಾಧನೆಗಳು ಮತ್ತು ಜನಪರ ಯೋಜನೆಗಳನ್ನು ಸದನದಲ್ಲಿ ಸಮರ್ಥಿಸಿಕೊಳ್ಳಲು ಸಿದ್ಧತೆ ನಡೆಸಿದೆ.

ಹೀಗಾಗಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರದ ಮೊದಲ ಅಧಿವೇಶನದಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ವಾಗ್ವಾದ ಹಾಗೂ ರಾಜಕೀಯ ಚರ್ಚೆಗಳು ನಡೆಯುವ ಸಾಧ್ಯತೆ ಇದೆ.

Related Articles

ಇತ್ತೀಚಿನ ಸುದ್ದಿಗಳು